ಸಾರಾಂಶ
ಕನ್ನಡಪ್ರಭ ವಾರ್ತೆ ಮಂಡ್ಯ
ಎಸ್‌ಸಿ, ಎಸ್‌ಪಿ, ಟಿಎಸ್‌ಪಿ ಯೋಜನೆಯ ಹಣದ ದುರ್ಬಳಕೆ ವಿರೋಧಿಸಿ, ಗ್ಯಾರಂಟಿ ಯೋಜನೆ, ಅನ್ಯ ಉದ್ದೇಶಗಳಿಗೆ ಬಳಸಿಕೊಂಡ ದಲಿತರ ನಿಧಿ ಹಣವನ್ನು ಹಿಂದಿರುಗಿಸಲು ಆಗ್ರಹಿಸಿ ಕಾಯ್ದೆಯ ೭- ಸಿ ರದ್ದುಪಡಿಸಲು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.ನಗರದ ಜಯಚಾಮರಾಜೇಂದ್ರ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಕೆಲ ಕಾಲ ಧರಣಿ ನಡೆಸಿದರು. ಮಾನವ ಮತ್ತು ಆರ್ಥಿಕ ಅಭಿವೃದ್ಧಿಗೆ ಸಂಬಂಧಪಟ್ಟಂತೆ ನಿರ್ದಿಷ್ಟವಾಗಿ ಗೊತ್ತುಪಡಿಸಬಹುದಾದಂತೆ ರಾಜ್ಯದ ಸರಾಸರಿಗೆ ಹೋಲಿಸಿದಾಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಸೂಚಕಗಳಲ್ಲಿರುವ ವ್ಯತ್ಯಾಸಗಳು ಎಂದು ವ್ಯಾಖ್ಯಾನಿಸುತ್ತದೆ. ಸಾರಾಂಶದಲ್ಲಿ ಪರಿಶಿಷ್ಟ ಜಾತಿ, ಪಂಗಡದವರು ಮತ್ತು ಇತರ ಸಮುದಾಯಗಳ ನಡುವಿನ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಯ ಅಂತರ ಕಡಿಮೆ ಮಾಡುವುದೇ ಈ ಯೋಜನೆಯ ಮೂಲ ಉದ್ದೇಶವಾಗಿದೆ. ಆದರೆ ಇದನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.
೨೦೨೩-೨೪ನೇ ಸಾಲಿನಲ್ಲಿ ಸುಮಾರು ೨೫ ಸಾವಿರ ಕೋಟಿ ರು. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ, ೧೫ ಸಾವಿರ ಕೋಟಿಯನ್ನು ಅನ್ಯ ಉದ್ದೇಶಕ್ಕೂ ಬಳಸಿರುವುದು ಕಾಯ್ದೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದಂತೆ ಆಗುತ್ತದೆ. ಅಷ್ಟೇ ಅಲ್ಲ, ಕಳೆದ ಬಿಜೆಪಿ ಸರ್ಕಾರ ಮಾಡಿದ ಕೆಲಸವನ್ನೇ ಕಾಂಗ್ರೆಸ್ ಸರ್ಕಾರ ಕೂಡ ಮಾಡಿದಂತಾಗಿದೆ. ಅದಷ್ಟೇ ಅಲ್ಲದೆ ಮುಖ್ಯಮಂತ್ರಿ, ಸಮಾಜ ಕಲ್ಯಾಣ ಸಚಿವರೂ ಸೇರಿದಂತೆ ಇತರೆ ಮಂತ್ರಿಗಳೂ ಈ ಕ್ರಮವನ್ನು ಸಮರ್ಥಿಸಿಕೊಳ್ಳುತ್ತಿರುವುದು ದುರಂತ ಮತ್ತು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.ಗ್ಯಾರಂಟಿ ಯೋಜನೆಗಳು ಉತ್ತಮ ಯೋಜನೆಗಳೇ, ಕನ್ನಡಿಗರೆಲ್ಲರಿಗೂ ಈ ಯೋಜನೆಯಿಂದ ಅನುಕೂಲವಾಗಿದೆ. ಆದರೆ ಗ್ಯಾರಂಟಿ ಉದ್ದೇಶವೇ ಬೇರೆ, ಎಸ್‌ಸಿಎಸ್‌ಪಿ,ಟಿಎಸ್‌ಪಿ ಕಾಯ್ದೆಯ ಉದ್ದೇಶವೇ ಬೇರೆ, ಗ್ಯಾರಂಟಿಗಳು ದಲಿತರು ಮತ್ತು ದಲಿತೇತರರ ನಡುವಿನ ಸಾಮಾಜಿಕ-ಆರ್ಥಿಕ ಅಸಮಾನತೆಯ ಅಂತರವನ್ನು ಕಡಿಮೆ ಮಾಡುವುದಿಲ್ಲ. ಆದ್ದರಿಂದ ಈಗಿಂದೀಗಲೇ ಗ್ಯಾರಂಟಿಗಳಿಗೆ ಬಳಸಿರುವ ಎಸ್‌ಸಿಎಸ್‌ಪಿ, ಟಿಎಸ್ಪಿ ಹಣವನ್ನು ದಲಿತರ ಅಭಿವೃದ್ಧಿಗೆ ಹಿಂದಿರುಗಿಸಬೇಕು ಎಂದು ಒತ್ತಾಯಿಸಿದರು.
ಮುಖಂಡರಾದ ಗುರುಪ್ರಸಾದ್ ಕೆರಗೋಡು, ಪ್ರೊ.ಹುಲ್ಕೆರೆ ಮಹದೇವು, ಸೋಮಶೇಖರ್ ಹೆಚ್.ಪಿ. ಸಿದ್ದರಾಜು, ರಾಜಶೇಖರ, ಗುಡಿಗೇನಹಳ್ಳಿ ಚಂದ್ರಶೇಖರ, ವಿಜಯಕುಮಾರ್, ಗಂಜಾಂ ಚಂದ್ರು, ಗಂಗಾಧರ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.