ಸಾರಾಂಶ
ಕನ್ನಡಪ್ರಭ ವಾರ್ತೆ, ತುಮಕೂರುಸರ್ಕಾರದ ವಿವಿಧ ಇಲಾಖೆಯ ಅಡಿಯಲ್ಲಿ ನಡೆಯುತ್ತಿರುವ ವಸತಿ ಶಾಲೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಅಡುಗೆ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕನಿಷ್ಠ ಮಾಸಿಕ 31 ಸಾವಿರ ವೇತನ, ನೇರವಾಗಿ ಇಲಾಖೆಯಿಂದ ವೇತನ ಪಾವತಿ, ನಿವೃತ್ತಿಯವರೆಗೆ ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ರಾಜ್ಯ ಸಂಘದ ಕರೆಯ ಮೇರೆಗೆ ರಾಜ್ಯದ ಸಂಘದ ಜಿಲ್ಲಾಧ್ಯಕ್ಷ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಮಹೇಶ್.ಎಸ್.ಎನ್. ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ತಮ್ಮ ಬೇಡಿಕೆಗಳ ಮನವಿ ಪತ್ರವನ್ನು ಮುಖ್ಯಮಂತ್ರಿಗಳಿಗೆ, ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ಪಂಚಾಯಿತಿ ಸಿಇಒ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಿಗೆ, ಹಿಂದುಳಿದ ವರ್ಗಗಳ,ಅಲ್ಪಸಂಖ್ಯಾತರ,ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ರವಿಕುಮಾರ್, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಕಳೆದ ೧೫-೨೦ ವರ್ಷಗಳಿಂದ ಕಡಿಮೆ ಸಂಬಳಕ್ಕೆ ವಸತಿನಿಲಯ, ವಸತಿಶಾಲಾ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅಡುಗೆಯವರು. ಅಡುಗೆ ಸಹಾಯಕರು,ಸ್ವಚ್ಛತಾ ಕೆಲಸಗಾರರು, ಕಾವಲುಗಾರರು, ಡಿ ಗ್ರೂಪ್ ಅಟೆಂಡರ್, ಕಂಪ್ಯೂಟರ್ ಆಪರೇಟರ್, ಡಾಟಾ ಎಂಟ್ರಿ ಆಪರೇಟರ್‌ಗಳು, ಹೊರಗುತ್ತಿಗೆ ಶಿಕ್ಷಕರು, ದಿನಗೂಲಿ ನೌಕರರು ಪ್ರತಿ ದಿನ 14 ಗಂಟೆ ದುಡಿಯುತ್ತಿದ್ದು, ಇವರು ಯಾವುದೇ ಭದ್ರತೆ ಇಲ್ಲದೆ ನಿರಂತರವಾಗಿ ಕೆಲಸ ಮಾಡುತ್ತಾ ಬಂದಿದ್ದೇವೆ ಎಂದರು.ಗುತ್ತಿಗೆದಾರರು ಕೆಲವು ತಾಲೂಕುಗಳಲ್ಲಿ ವಾರ್ಡನ್‌ರವರು, ತಾಲೂಕು ಮಟ್ಟದ ಅಧಿಕಾರಿಗಳು ಹೊರಗುತ್ತಿಗೆ ಸಿಬ್ಬಂದಿಗಳನ್ನು ಶೋಷಣೆ ಮಾಡುತ್ತಿದ್ದಾರೆ. ವಸತಿಶಾಲೆಗಳಲ್ಲಿ ನೌಕರರು 24 ಗಂಟೆ ಹಾಸ್ಟೆಲ್‌ಗಳಲ್ಲಿಯೇ ಉಳಿಯ ಬೇಕಾಗಿರುತ್ತದೆ. ಇಷ್ಟು ಕೆಲಸ ಮಾಡುವ ನೌಕರರಿಗೆ ವಾರದ ರಜೆ ಸಹ ಇಲ್ಲ. ಇದರಿಂದ ನೌಕರರು ಕೆಲಸದ ಒತ್ತಡದಿಂದ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಎಂದರು. ಪ್ರಧಾನ ಕಾರ್ಯದರ್ಶಿ ಮಹೇಶ್ ಮಾತನಾಡಿ ಹಾಸ್ಟೆಲ್ ಮತ್ತು ವಸತಿ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ಸಭೆ ನಡೆಸುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದರು. ಪ್ರತಿಭಟನೆಯಲ್ಲಿ ಸಂಘದ ವಿವಿಧ ತಾಲೂಕು ಘಟಕಗಳ ಮುಖಂಡರಾದ ಹನುಮಂತು, ಆನಂದ್, ಶ್ರೀನಿವಾಸ್, ಮಲ್ಲೇಶ್, ಕುಮಾರ್, ಗೋಪಿನಾಥ್, ರಾಜಣ್ಣ, ವಿಜಯಕುಮಾರ್, ಆನಂದ್ ಸೇರಿದಂತೆ ನೂರಾರು ನೌಕರರು ಪಾಲ್ಗೊಂಡಿದ್ದರು.