ನೀರು, ಮೂಲ ಸೌಕರ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

| Published : Feb 23 2024, 01:50 AM IST

ನೀರು, ಮೂಲ ಸೌಕರ್ಯಕ್ಕೆ ಆಗ್ರಹಿಸಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ರಾಯಚೂರು ನಗರದ ಡಿಸಿ ಕಚೇರಿ ಮುಂದೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಎಸ್‌ಯುಸಿಐ(ಎಂ) ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು.

ಕನ್ನಡಪ್ರಭ ವಾರ್ತೆ ರಾಯಚೂರು

ಬೇಸಿಗೆಯಲ್ಲಿ ನಗರ ಸೇರಿದಂತೆ ಪಟ್ಟಣ, ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಅಗತ್ಯ ಕ್ರಮ, ಜನರಿಗೆ ಮೂಲಭೂತ ಸವಲತ್ತುಗಳನ್ನು ಕಲ್ಪಿಸಿಕೊಡುವುದು ಸೇರಿ ನಾನಾ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್‌) ಸಂಘದ ಜಿಲ್ಲಾ ಸಮಿತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಸ್ಥಳೀಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೇರಿದ ಸಮಿತಿ ಪದಾಧಿಕಾರಿಗಳು, ಸದಸ್ಯರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸಂಘದ ರಾಜ್ಯ ಸದಸ್ಯ ಎಚ್.ವಿ ದಿವಾಕರ್, ಜಿಲ್ಲಾ ಕಾರ್ಯದರ್ಶಿ ಡಾ. ಚಂದ್ರಗಿರೀಶ್ ಅವರು ನಗರದ ರಸ್ತೆಗಳನ್ನು ದುರಸ್ತಿ ಮಾಡಬೇಕು ಮತ್ತು ಸ್ವಚ್ಛತೆ ಕಾಪಾಡಬೇಕು. ರಾಯಚೂರಿಗೆ ಏಮ್ಸ್ ಮಂಜೂರು ಮಾಡಬೇಕು. ಒಪೆಕ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಖಾಸಗಿ ಸಂಸ್ಥೆಯವರಿಗೆ ವಹಿಸಬಾರದು. ಎಲ್ಲ ಸೌಲಭ್ಯಗಳೊಂದಿಗೆ ಅದರ ನಿರ್ವಹಣೆಯನ್ನು ಸರ್ಕಾರವೇ ಮಾಡಬೇಕು. ಇಲ್ಲವೇ ಜಯದೇವದಂತಹ ಸಂಸ್ಥೆಗೆ ನೀಡಬೇಕು ಎಂದು ಆಗ್ರಹಿಸಿದರು.

ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕುಪತ್ರ ವಿತರಿಸಬೇಕು. ರಾಯಚೂರು ವಿಶ್ವವಿದ್ಯಾಲಯಕ್ಕೆ ಅವಶ್ಯಕ ಅನುದಾನ ನೀಡಬೇಕು. ಅದರ ಅಭಿವೃದ್ಧಿಗೆ ತ್ವರಿತ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಕಾಯಂ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಬೇಕು. ರಾಯಚೂರಿನ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಿ ಕೂಡಲೇ ಕಾರ್ಯಾರಂಭ ಮಾಡಲು ಕ್ರಮಕೈಗೊಳ್ಳಬೇಕು ಎಂದು ಹೇಳಿದರು.

ರಾಯಚೂರು ನಗರದಲ್ಲಿ ಬೀದಿ ನಾಯಿಗಳ ಹಾವಳಿ ತಡೆಯಲು ನಿಯಂತ್ರಣ ಕ್ರಮ ಕೈಗೊಳ್ಳಬೇಕು. ರಾಯಚೂರಿಗೆ ಇಎಸ್ಐ ಆಸ್ಪತ್ರೆಯನ್ನು ಮಂಜೂರು ಮಾಡಬೇಕು. ರಾಯಚೂರು ನಗರ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ ಸಮಿತಿಯ ಸದಸ್ಯರಾದ ಶರಣಪ್ಪ ಉದ್ಬಾಳ್, ವೀರೇಶ್, ಎನ್.ಎಸ್, ಚನ್ನಬಸವ ಜಾನೇಕಲ್, ಮಹೇಶ್ ಚೀಕಲಪರ್ವಿ, ಅಣ್ಣಪ್ಪ ಹಾಗೂ ಮಲ್ಲನಗೌಡ, ಜಮಾಲುದ್ದಿನ್, ವಿನೋದ್ ಕುಮಾರ್, ಪೀರ್ಸಾಬ್, ಬಸವರಾಜ್, ಆದೆಪ್ಪ ನೂರಾರು ಜನ ವಿದ್ಯಾರ್ಥಿಗಳು, ಯುವಕರು, ಮಹಿಳೆಯರು, ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.