ಬ್ಯಾಡಗಿ: ಮನೆಗಳಿಗೆ ಹಾಗೂ ಕೃಷಿ ಜಮೀನುಗಳಿಗೆ ತೆರಳಲು ಸೂಕ್ತ ರಸ್ತೆ ವ್ಯವಸ್ಥೆ ಕಲ್ಪಿಸದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಹಿಡಿದು ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಕದರಮಂಡಲಗಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಗ್ರಾಮಸ್ಥ ಕಾಂತೇಶ ಮಾತನಾಡಿ, ಗ್ರಾಮದ ಹೊಸಪ್ಲಾಟ್ ಪ್ರದೇಶದಲ್ಲಿ ಸುಮಾರು 300ಕ್ಕೂ ಹೆಚ್ಚು ಮನೆಗಳು ನಿರ್ಮಾಣಗೊಂಡಿದ್ದು, ನೂರಾರು ಕುಟುಂಬಗಳು ವಾಸವಾಗಿವೆ. ಆದರೆ ಮನೆಗಳಿಗೆ ತೆರಳಲು ಹಾಗೂ ರೈತರು ತಮ್ಮ ಕೃಷಿ ಜಮೀನುಗಳಿಗೆ ಹೋಗಲು ಸಮರ್ಪಕ ರಸ್ತೆಯಿಲ್ಲದ ಕಾರಣ ಗ್ರಾಮಸ್ಥರು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ. ಮಳೆಗಾಲದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತಿದ್ದು, ಕೆಸರು ಮತ್ತು ನೀರು ತುಂಬಿದ ದಾರಿಯಲ್ಲಿ ಸಂಚರಿಸುವುದು ದುಸ್ತರವಾಗಿದೆ ಎಂದು ಅಳಲು ತೋಡಿಕೊಂಡರು.ಮೂಲ ಸೌಕರ‍್ಯ ಇನ್ಯಾವಾಗ ಕೊಡ್ತಿರಿ..?:ಹನುಮಂತಪ್ಪ ಕುಡಪಲಿ ಮಾತನಾಡಿ, ಸರ್ಕಾರವೇ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ನಿವೇಶನದ ಪಟ್ಟಾ ನೀಡಿ ಮನೆ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿದೆ, ಆದರೆ ಮನೆ ನಿರ್ಮಾಣವಾದ ನಂತರ ಮೂಲಭೂತ ಸೌಕರ್ಯಗಳಾದ ರಸ್ತೆ ವ್ಯವಸ್ಥೆಯನ್ನೇ ಕಲ್ಪಿಸದಿರುವುದು ಜನಪ್ರತಿನಿಧಿಗಳ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ. ತುರ್ತು ಸಂದರ್ಭಗಳಲ್ಲಿ ಆಂಬುಲೆನ್ಸ್, ಅಗ್ನಿಶಾಮಕ ವಾಹನ ಸೇರಿದಂತೆ ಅಗತ್ಯ ಸೇವೆಗಳು ಮನೆಗಳವರೆಗೆ ತಲುಪಲು ಸಾಧ್ಯವಾಗುತ್ತಿಲ್ಲ ಎಂದು ದೂರಿದರು.
ಕೃಷಿ ಚಟುವಟಿಕೆಗೆ ಹಿನ್ನಡೆ: ಯಲ್ಲಪ್ಪ ಅಜ್ಜಮನವರ ಮಾತನಾಡಿ, ರೈತರು ತಮ್ಮ ಜಮೀನುಗಳಿಗೆ ಕೃಷಿ ಉಪಕರ ಣಗಳು, ಟ್ರ‍್ಯಾಕ್ಟರ್ ಹಾಗೂ ಇತರೆ ವಾಹನಗಳನ್ನು ಕೊಂಡೊಯ್ಯಲು ಸರಿಯಾದ ರಸ್ತೆ ಇಲ್ಲದ ಕಾರಣ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ. ಬೆಳೆ ಬೆಳೆಯಲು ಅಗತ್ಯವಾದ ಗೊಬ್ಬರ, ಬೀಜ ಹಾಗೂ ಕೃಷಿ ಸಾಮಗ್ರಿಗಳನ್ನು ಸಾಗಿಸಲು ಸಮಸ್ಯೆ ಎದುರಾಗುತ್ತಿದೆ ಎಂದು ಅಲವತ್ತುಕೊಂಡರು.ಬೇಜವಾಬ್ದಾರಿ ಅಧಿಕಾರಿಗಳು: ಶಂಕರ ಕುಡಪಲಿ ಮಾತನಾಡಿ, ಹಲವು ವರ್ಷಗಳಿಂದ ಈ ಸಮಸ್ಯೆ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ, ಹಲವಾರು ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಕೇವಲ ಭರವಸೆ ನೀಡುತ್ತಿದ್ದು, ಸಮಸ್ಯೆ ಮಾತ್ರ ಹಾಗೆಯೇ ಉಳಿದಿದೆ ಆರೋಪಿಸಿದರು.
ತಹಸೀಲ್ದಾರ್ ಕಚೇರಿಗೆ ಮುತ್ತಿದೆ: ಯಲ್ಲಪ್ಪ ಕುಡಪಲಿ ಮಾತನಾಡಿ, ಸಂವಿಧಾನ ನೀಡಿರುವ ಮೂಲಭೂತ ಹಕ್ಕುಗಳ ಭಾಗವಾಗಿ ರಸ್ತೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿದರಲ್ಲೇ ಕೂಡಲೇ ತಾಲೂಕಾಡಳಿತ ಹಾಗೂ ಜಿಲ್ಲಾಡಳಿತ ಸ್ಥಳ ಪರಿಶೀಲನೆ ನಡೆಸಿ ರಸ್ತೆ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಒಂದು ವೇಳೆ ಶೀಘ್ರದಲ್ಲಿ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಗ್ರಾಮಸ್ಥರೆಲ್ಲರೂ ಸೇರಿ ಬ್ಯಾಡಗಿ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ರುದ್ರಪ್ಪ ಅಜ್ಜಮ್ಮನವರ,ಶಂಕರ ಕುಡಪಲಿ, ರೈತರು ಗ್ರಾಮಸ್ಥರು ಹಾಗೂ ಮುಖಂಡರು ಭಾಗವಹಿಸಿದ್ದರು.