ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಿ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಾಸನ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಗುರುವಾರ ನಗರದ ಹಳೆ ಬಸ್ ನಿಲ್ದಾಣದ ಸಮೀಪ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು.

ಕನ್ನಡಪ್ರಭ ವಾರ್ತೆ ಹಾಸನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಿ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಾಸನ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಗುರುವಾರ ನಗರದ ಹಳೆ ಬಸ್ ನಿಲ್ದಾಣದ ಸಮೀಪ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು.ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ಆರಂಭಿಸಿದ ಪ್ರತಿಭಟನಾಕಾರರು ಪ್ರಧಾನ ಅಂಚೆ ಕಚೇರಿವರೆಗೆ ತೆರಳಿ, ಕೇಂದ್ರ ಸರ್ಕಾರ ಹಾಗೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಅಂಚೆ ಕಚೇರಿ ಎದುರು ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಹಳೆ ಬಸ್ ನಿಲ್ದಾಣದ ಸಮೀಪ ರಸ್ತೆಯ ಮಧ್ಯೆಯೇ ಕುಳಿತು ಪ್ರತಿಭಟನೆ ನಡೆಸಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ವಾಹನ ಸವಾರರು ಹಾರ್ನ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆ ತಡೆ ತೆರವುಗೊಳಿಸುವಂತೆ ಕೆಲವು ವಾಹನ ಚಾಲಕರು ಪ್ರತಿಭಟನಾಕಾರರೊಂದಿಗೆ ವಾಗ್ವಾದ ನಡೆಸಿದರು. ಪ್ರತಿಭಟನಾಕಾರರು ರಸ್ತೆ ಮಧ್ಯೆಯೇ ಕುಳಿತು ಹೋರಾಟ ಮುಂದುವರಿಸಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಮಧ್ಯಪ್ರವೇಶಿಸಿ, ವಾಹನಗಳನ್ನು ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ವ್ಯವಸ್ಥೆ ಮಾಡಿದರು. ಬಳಿಕ ವಾಹನ ಸಂಚಾರವನ್ನು ಸುಗಮಗೊಳಿಸಲಾಯಿತು. ಪ್ರತಿಭಟನಾಕಾರರು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಚೆ ಕಚೇರಿ ಎದುರು ಹೋರಾಟ ಮುಂದುವರಿಸಿದರು.ಚುನಾವಣಾ ಆಯೋಗದ ಕಾರ್ಯವೈಖರಿಗೆ ಆಕ್ಷೇಪ:

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಹಾಸನ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟದ ಮುಖಂಡ ಧರ್ಮೇಶ್, ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯಗಳಿಗೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿದರು. ಎಸ್‌ಐಆರ್ ಪ್ರಕ್ರಿಯೆಯಿಂದ ಮತದಾರರಿಗೆ ತೊಂದರೆಯಾಗುವ ಆತಂಕವಿದ್ದು, ಈ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಿ, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಚುನಾವಣಾ ಆಯೋಗವು ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ಆದರೆ, ಆಯೋಗದ ಇತ್ತೀಚಿನ ಕಾರ್ಯವೈಖರಿಯಿಂದ ಅದರ ಸ್ವಾಯತ್ತತೆ ಹಾಗೂ ವಿಶ್ವಾಸಾರ್ಹತೆಯ ಬಗ್ಗೆ ಸಾರ್ವಜನಿಕರಲ್ಲಿ ಪ್ರಶ್ನೆಗಳು ಮೂಡಿವೆ. ಆಯೋಗವು ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಹಿತಾಸಕ್ತಿಗೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ ಎಂದು ಅವರು ಟೀಕಿಸಿದರು.

ದೇಶದ ವಿವಿಧ ಭಾಗಗಳಲ್ಲಿ ರೈತರು, ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಸಂಘಟನೆಗಳು ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿವೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿವಿಧ ವಿರೋಧ ಪಕ್ಷಗಳ ಸಂಸದರೂ ಈ ವಿಚಾರವಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಷ್ಟೆಲ್ಲಾ ವಿರೋಧ ವ್ಯಕ್ತವಾಗುತ್ತಿದ್ದರೂ ಚುನಾವಣಾ ಆಯೋಗ ಸಮರ್ಪಕವಾಗಿ ಪ್ರತಿಕ್ರಿಯಿಸುತ್ತಿಲ್ಲ ಎಂದು ಧರ್ಮೇಶ್ ಆರೋಪಿಸಿದರು.ದೆಹಲಿಯಲ್ಲಿ ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ಮಾಧ್ಯಮ ಪ್ರತಿನಿಧಿಗಳ ಮೇಲೆ ಪೊಲೀಸರು ದೌರ್ಜನ್ಯ ನಡೆಸುತ್ತಿದ್ದಾರೆ ಎನ್ನಲಾದ ಘಟನೆಗಳನ್ನು ಖಂಡಿಸಿದ ಅವರು, ಶಾಂತಿಯುತ ಪ್ರತಿಭಟನೆ ನಡೆಸುವವರ ಮೇಲೆ ದಬ್ಬಾಳಿಕೆ ನಡೆಸುವುದನ್ನು ನಿಲ್ಲಿಸಬೇಕು. ಪ್ರತಿಭಟನೆ ನಡೆಸುವವರಿಗೆ ಪ್ರಜಾಸತ್ತಾತ್ಮಕವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಬಲಪಂಥೀಯ ಸಂಘಟನೆಗಳ ಕಾರ್ಯಕರ್ತರಿಂದ ಪ್ರತಿಭಟನಾಕಾರರ ಮೇಲೆ ಹಲ್ಲೆ ಹಾಗೂ ಬೆದರಿಕೆಗಳು ನಡೆಯುತ್ತಿವೆ ಎನ್ನಲಾದ ಆರೋಪಗಳ ಬಗ್ಗೆಯೂ ಆತಂಕ ವ್ಯಕ್ತಪಡಿಸಿದರು. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಮುಂದಿನ ಪೀಳಿಗೆಯ ಭವಿಷ್ಯಕ್ಕಾಗಿ ಜನಪರ ಸಂಘಟನೆಗಳು ಒಗ್ಗಟ್ಟಿನಿಂದ ಹೋರಾಡಬೇಕಿದೆ ಎಂದು ಹೇಳಿದರು.ಪ್ರತಿಭಟನೆಯಲ್ಲಿ ರೈತರು, ಕಾರ್ಮಿಕರು, ವಿದ್ಯಾರ್ಥಿಗಳು, ಅಲ್ಪಸಂಖ್ಯಾತರು ಹಾಗೂ ವಿವಿಧ ಪ್ರಜಾಪ್ರಭುತ್ವಪರ ಮತ್ತು ಸಂವಿಧಾನಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.ಒಕ್ಕೂಟದ ಎಂ. ಸೋಮಶೇಖರ್, ಎಚ್. ಕೆ. ಸಂದೇಶ್, ರಾಜು ಗೊರೂರು, ಎಚ್. ಆರ್‌. ನವೀನ್ ಕುಮಾರ್, ಸಮೀರ್‌, ರಮೇಶ್, ಅನ್ಸರ್‌, ರಾಜಶೇಖರ್, ಎಂ.ಜಿ. ಪೃಥ್ವಿ, ಅರವಿಂದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.