ಅಕ್ರಮ ಚಟುವಟಿಕೆ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ

| Published : Oct 15 2025, 02:07 AM IST

ಸಾರಾಂಶ

ಜಿಲ್ಲೆಯಲ್ಲಿ ರಾಜಾರೋಷವಾಗಿ ಇಸ್ಪೀಟ್ ದಂಧೆ ನಡೆಯುತ್ತಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ನೋಡಿದರೆ ಅಕ್ರಮ ಚಟುವಟಿಕೆಗಳಿಗೆ ಪೊಲೀಸರೇ ಸಾಥ್ ನೀಡುತ್ತಿದ್ದಾರಾ ಎನ್ನುವ ಅನುಮಾನ ಮೂಡುತ್ತಿದೆ.

ಹಾವೇರಿ:ಜಿಲ್ಲೆಯಲ್ಲಿ ರಾಜಾರೋಷವಾಗಿ ಇಸ್ಪೀಟ್ ದಂಧೆ ನಡೆಯುತ್ತಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ನೋಡಿದರೆ ಅಕ್ರಮ ಚಟುವಟಿಕೆಗಳಿಗೆ ಪೊಲೀಸರೇ ಸಾಥ್ ನೀಡುತ್ತಿದ್ದಾರಾ ಎನ್ನುವ ಅನುಮಾನ ಮೂಡುತ್ತಿದೆ. ರಾಜಾರೋಷವಾಗಿ ಇಸ್ಪೀಟ್ ಆಡುತ್ತಿರುವವರ ಮೇಲೆ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಎಸ್ಪಿ ಕಚೇರಿ ಎದುರು ಉಗ್ರ ಪ್ರತಿಭಟನೆ ಕೈಗೊಳ್ಳಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ.

ಬಹಿರಂಗವಾಗಿ ಇಸ್ಪೀಟ್‌ ಆಡುತ್ತಿರುವ ವಿಡಿಯೋ ವೈರಲ್‌ ಆಗಿರುವ ಹಿನ್ನೆಲೆಯಲ್ಲಿ ಎಕ್ಸ್ ಮಾಡಿರುವ ಅವರು, ಹಗಲು ಹೊತ್ತಿನಲ್ಲಿಯೇ ಇಷ್ಟೊಂದು ಬಹಿರಂಗವಾಗಿ ಇಸ್ಪೀಟ್ ಆಡುತ್ತಿರುವ ಬಗ್ಗೆ ಸಾರ್ವಜನಿಕರು, ಮಾಧ್ಯಮಗಳು ಪೊಲೀಸರ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳದೆ ಮೂಕ ಪ್ರೇಕ್ಷರಾಗಿರುವುದನ್ನು ನೋಡಿದರೆ, ಅಕ್ರಮ ಮಾಡುವವರಿಗೆ ಸರ್ಕಾರವೇ ಶ್ರೀರಕ್ಷೆಯಾಗಿ ನಿಂತಿದೆ ಎಂಬ ಭಾವನೆ ಮೂಡುತ್ತದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಾವೇರಿ ಜಿಲ್ಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿರುವ ಬಗ್ಗೆ ಪೊಲಿಸ್ ಇಲಾಖೆಯ ಗಮನಕ್ಕೆ ತಂದರೂ ಪೊಲಿಸರು ನಿರ್ಲಕ್ಷ್ಯ ತೋರುತ್ತಿದ್ದಾರೆ. ರಾಜಾರೋಷವಾಗಿ ಇಸ್ಪೀಟ್ ಆಡುತ್ತಿರುವವರ ಮೇಲೆ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಎಸ್ಪಿ ಕಚೇರಿ ಎದುರು ಉಗ್ರ ಪ್ರತಿಭಟನೆ ಕೈಗೊಳ್ಳಬೇಕಾಗುವುದು ಎಂದು ಎಚ್ಚರಿಸಿದ್ದಾರೆ.