ಸಾರಾಂಶ
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಎಸ್ಸಿ, ಎಸ್ಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅರಕಲವಾಡಿ ನಾಗೇಂದ್ರ ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2023-24ನೇ ಸಾಲಿನಲ್ಲಿ 11,143 ಕೋಟಿ, 2024-25ನೇ ಸಾಲಿನಲ್ಲಿ 14.678 ಕೋಟಿ, 2025-26ನೇ ಸಾಲಿನಲ್ಲಿ 14,448 ಕೋಟಿಗಳನ್ನು ಬಳಕೆ ಮಾಡಿಕೊಳ್ಳಲಿದೆ ಎಂದು ಸಮಾಜ ಕಲ್ಯಾಣ ಸಚಿವರು ಹೇಳಿದ್ದು, ಕಾಂಗ್ರೆಸ್ ಸರ್ಕಾರ 40,267 ಕೋಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಂಡಿದ್ದು, ಯಾವುದೇ ಕಾರಣಕ್ಕೂ ಈ ಬಾರಿಯ ಬಜೆಟ್‌ನಲ್ಲಿ ಎಸ್ಸಿ, ಎಸ್ಟಿ ಅನುದಾನವನ್ನು ಅನ್ಯ ಕಾರ್ಯಕ್ರಮಗಳಿಗೆ ಬಳಕೆ ಮಾಡಬಾರದು ಎಂದು ಆರೋಪಿಸಿದರು.
ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆ ಘೋಷಸಿರುವುದು ಕಾಂಗ್ರೆಸ್ ಪಕ್ಷದ ತೀರ್ಮಾನ. ಗ್ಯಾರಂಟಿ ಯೋಜನೆಗಳಿಗೆ ಎಸ್‌ಇಪಿ, ಟಿಎಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುವುದಾಗಿ ಹೇಳಿರಲಿಲ್ಲ, ಅನ್ನ ಕಾರ್ಯಕ್ರಮಗಳಿಗೆ ಬಳಕೆ ಮಾಡುವುದು ಎಸ್ಸಿ, ಎಸ್ಟಿ ಜನಾಂಗಗಳಿಗೆ ಮಾಡುವ ದ್ರೋಹವಾಗಿದೆ ಎಂದು ಆರೋಪಿಸಿದರು.ಅಧಿಕಾರಿಗಳು ಎಸ್‌ಇಪಿ, ಟಿಎಸ್‌ಪಿ ಹಣವನ್ನು ಅನ್ಯ ಕಾರ್ಯಕ್ರಮಕ್ಕೆ ಬಳಸಿದರೆ ಅಧಿಕಾರಿಗಳ ಮೇಲೆ ಅಟ್ರಾಸಿಟಿ ಪ್ರಕರಣ ದಾಖಲಾಗುತ್ತದೆ. ಸರ್ಕಾರವೇ ಅನ್ಯ ಕಾರ್ಯಕ್ರಮಗಳಿಗೆ ಬಳಕೆ ಮಾಡಿಕೊಂಡರೆ ಸರ್ಕಾರದ ಮೇಲೆ ಅಟ್ರಾಸಿಟಿ ಪ್ರಕರಣ ದಾಖಲಾಗಿಲ್ಲದಿರುವುದು ದುರಂತ ಎಂದರು.
ಎಸ್ಸಿ, ಎಸ್ಟಿ ಅನುದಾನವನ್ನು ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮ, ತಾಂಡ ಅಭಿವೃದ್ಧಿ ನಿಗಮ, ಅಲೆಮಾರಿ ಅಭಿವೃದ್ಧಿ ನಿಗಮ ಸೇರಿದಂತೆ 8 ನಿಗಮಗಳಿಗೆ ನೀಡಬೇಕು, ಆ ಮೂಲಕ ಆ ಸಮುದಾಯಗಳ ಆರ್ಧಿಕವಾಗಿ ಸಬಲರನ್ನಾಗಿ ಮಾಡಬೇಕು ಈ ನಿಟ್ಟಿನಲ್ಲಿ ಬಜೆಟ್‌ನಲ್ಲಿ ಶೇ.25ರಷ್ಟು ಅನುದಾನವನ್ನು ಎಸ್ಸಿ ಎಸ್ಟಿ ಅಭಿವೃದ್ಧಿಗೆ ನೀಡಬೇಕು ಎಂದರು.ಹಿಂದಿನ ಸರ್ಕಾರಗಳು ಕೂಡ ಎಸ್‌ಇಪಿ, ಟಿಎಸ್‌ಪಿ ಅನುದಾನವನ್ನು ಬಳಕೆ ಮಾಡಿಕೊಂಡಿವೆ ಎಂದು ಮುಖ್ಯಮಂತ್ರಿಗಳು ಹೇಳಿಕೆ ನೀಡಿದ್ದಾರೆ ಆದ್ದರಿಂದ ಎಸ್‌ಇಪಿ, ಟಿಎಸ್‌ಪಿ ಅನುದಾನವನ್ನು 10 ವರ್ಷದಿಂದ ಯಾವ ಯಾವ ಕಾರ್ಯಕ್ರಮಗಳಿಗೆ ಯಾವ ಉದ್ದೇಶಗಳಿಗೆ ಬಳಕೆ ಮಾಡಲಾಗಿದೆ ಎಂಬುದರ ಕುರಿತು ಶ್ವೇತಪತ್ರ ಹೊರಡಿಸಬೇಕು. ಹಾಗೂ 7(ಸಿ) ಸೆಕ್ಷನ್ ಅನ್ನು ರದ್ದುಪಡಿಸಬೇಕು ಎಸ್ಸಿಎಸ್ಟಿ ಸಮುದಾಯಕ್ಕೆ ದ್ರೋಹ ಮಾಡುವ ಕೆಲಸ ಮಾಡಬಾರದು ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಮೂಡಹಳ್ಳಿ ಮೂರ್ತಿ, ಎಸ್ಪಿ ಮೋರ್ಚಾ ಅಧ್ಯಕ್ಷ ಚಂದ್ರು, ಎಸ್ಪಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಮಣ್ಣ, ಮುಖಂಡರಾದ ಮುತ್ತಿಗೆ ಮೂರ್ತಿ, ರಘು, ಸುರೇಶ್, ಶಿವಣ್ಣ ಇದ್ದರು.