ಸಾರಾಂಶ
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ಮೆರವಣಿಗೆ ವೇಳೆ ಕಿಡಿಗೇಡಿಗಳಿಂದ ಕಲ್ಲುತೂರಾಟ ಹಾಗೂ ಗಲಭೆ ಘಟನೆ ಖಂಡಿಸಿ ಚಾಮರಾಜನಗರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆಗಳ ಒಕ್ಕೂಟ ವತಿಯಿಂದ ಪ್ರತಿಭಟನೆ ನಡೆಯಿತು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ಮೆರವಣಿಗೆ ವೇಳೆ ಕಿಡಿಗೇಡಿಗಳಿಂದ ಕಲ್ಲುತೂರಾಟ ಹಾಗೂ ಗಲಭೆ ಘಟನೆ ಖಂಡಿಸಿ ನಗರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆಗಳ ಒಕ್ಕೂಟ ವತಿಯಿಂದ ಪ್ರತಿಭಟನೆ ನಡೆಯಿತು.ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಪ್ರತಿಭಟನಾಕಾರರು ಜಮಾಹಿಸಿ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತದವರೆಗೆ ತೆರಳಿ ಕೆಲಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದಲೂ ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವ ಸಲುವಾಗಿ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುವ ಮೂಲಕ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುತ್ತಿದೆ. ಅದಕ್ಕೆ ಪೂರಕವಾಗಿ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಹಿಂದೂ ಹೋರಾಟಗಾರರ ಮೇಲೆ ಸುಳ್ಳು ಮೊಕದ್ದಮೆಗಳನ್ನು ದಾಖಲಿಸುವುದು, ಇದರಿಂದ ಹಿಂದುಗಳು ಭಯಭೀತರಾಗಿ ಯಾವುದೇ ಹೋರಾಟಗಳಲ್ಲಿ ತೊಡಗಿಸಿಕೊಳ್ಳದಂತೆ ಭಯದ ವಾತಾವರಣ ನಿರ್ಮಾಣವಾಗಿದೆ.ಇದಕ್ಕೆ ಪೂರಕವಾಗಿ ಕರ್ನಾಟಕದಲ್ಲಿ ಕಳೆದ 15 ತಿಂಗಳಿನಲ್ಲಿ ಗಲಭೆ, ಹಿಂಸಾಚಾರ ನಡೆದಿರುವುದು ಸಾಕ್ಷಿಯಾಗಿದೆ. ಕೂಡಲೇ ಸಂಬಂಧಪಟ್ಟವರ ವಿರುದ್ಧ ಕ್ರಮವಹಿಸಬೇಕು. ಜೊತೆಗೆ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಶ್ರೀ ವಿದ್ಯಾಗಣಪತಿ ಮಂಡಳಿಯ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.