ಹನುಮಸಾಗರ ಸಮೀಪದ ಹನುಮನಾಳ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿದ್ದು, ಗ್ರಾಮ ಪಂಚಾಯಿತಿ ಆಡಳಿತ ಜನರ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಸೋಮವಾರ ಹನುಮನಾಳ ಗ್ರಾಪಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಹನುಮಸಾಗರ: ಸಮೀಪದ ಹನುಮನಾಳ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿದ್ದು, ಗ್ರಾಮ ಪಂಚಾಯಿತಿ ಆಡಳಿತ ಜನರ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಸೋಮವಾರ ಹನುಮನಾಳ ಗ್ರಾಪಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಗ್ರಾಮದಲ್ಲಿ ಹಲವು ವರ್ಷಗಳಿಂದ ಬಗೆಹರಿಯದೆ ಉಳಿದಿರುವ ಸಮಸ್ಯೆಗಳ ವಿರುದ್ಧ ಪ್ರತಿಭಟನೆಕಾರರು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಪಂ ಆಡಳಿತದ ನಿರ್ಲಕ್ಷ್ಯದಿಂದ ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದು, ಕೂಡಲೇ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.ಪ್ರತಿಭಟನಾಕಾರರು ಮಾತನಾಡಿ, ಗ್ರಾಮದಲ್ಲಿ ಕರ ವಸೂಲಿ ದರ ಹೆಚ್ಚಿಸಲಾಗಿದ್ದು, ಜನರಿಂದ ಸಂಗ್ರಹವಾಗುವ ಹಣದ ಬಳಕೆಯಲ್ಲಿ ಪಾರದರ್ಶಕತೆ ಕಾಣಿಸುತ್ತಿಲ್ಲ ಎಂದು ಆರೋಪಿಸಿದರು. ಬಡವರಿಗೆ ಮಂಜೂರಾಗಿರುವ ಆಶ್ರಯ ಮನೆಗಳ ಬಿಲ್‌ಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ಹಲವು ಕುಟುಂಬಗಳು ಮನೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿದ್ದರೂ ಬಾಕಿ ಹಣಕ್ಕಾಗಿ ಅಧಿಕಾರಿಗಳ ಕಚೇರಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.
ಕಂಪ್ಯೂಟರ್ ಉತಾರ್ ಸೇರಿದಂತೆ ವಿವಿಧ ದಾಖಲೆಗಳಿಗಾಗಿ ಸಾರ್ವಜನಿಕರು ಅನಗತ್ಯವಾಗಿ ಸುತ್ತಾಡಬೇಕಾಗಿದ್ದು, ಜನರಿಗೆ ಸಮಯಕ್ಕೆ ಸರಿಯಾಗಿ ಸೇವೆ ದೊರೆಯುತ್ತಿಲ್ಲ. 42 ಗ್ರಾಮಗಳಿಗೆ ಕೇಂದ್ರಬಿಂದುವಾಗಿರುವ ರೈತ ಸಂಪರ್ಕ ಕೇಂದ್ರದಲ್ಲಿ ಅಗತ್ಯ ಸೌಲಭ್ಯಗಳ ಕೊರತೆಯಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು.ಗ್ರಾಮದ ಸರ್ಕಾರಿ ಆಸ್ಪತ್ರೆ ಹಾಗೂ ಗ್ರಾಪಂ ಕಚೇರಿ ಆವರಣದಲ್ಲಿ ಮಳೆ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಆರೋಗ್ಯ ಇಲಾಖೆಯೂ ಹಾಗೂ ಪಂಚಾಯಿತಿ ಆಡಳಿತವೂ ಈ ಸಮಸ್ಯೆಯ ಬಗ್ಗೆ ನಿರ್ಲಕ್ಷ್ಯ ತೋರಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮದಲ್ಲಿ ಕುಡಿಯುವ ನೀರಿನ ಮೂಲಗಳ ಕೊರತೆ ಇಲ್ಲದಿದ್ದರೂ ಎರಡು ಅಥವಾ ಮೂರು ದಿನಗಳಿಗೊಮ್ಮೆ ಮಾತ್ರ ನೀರು ಪೂರೈಕೆ ಮಾಡಲಾಗುತ್ತಿದೆ. ಬೇಸಿಗೆ ಮತ್ತು ಮಳೆಗಾಲದಲ್ಲಿಯೂ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.ಪ್ರತಿಭಟನೆಯ ವೇಳೆ ಪಿಡಿಒ ಪ್ರಶಾಂತ ಹಾಗೂ ಗ್ರಾಮಸ್ಥರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಬಳಿಕ ಪರಿಸ್ಥಿತಿ ತಿಳಿಗೊಂಡಿದ್ದು, ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ವಿವರವಾಗಿ ಮಂಡಿಸಿದರು.
ಬಳಿಕ ಪ್ರತಿಭಟನಾಕಾರರು ಹನುಮನಾಳ ಉಪ ತಹಸೀಲ್ದಾರ್ ಆಂಜನೇಯ ಅವರಿಗೆ ಮನವಿ ಸಲ್ಲಿಸಿದರು. ಸಮಸ್ಯೆಗಳಿಗೆ ಶೀಘ್ರ ಪರಿಹಾರ ದೊರೆಯದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.ಪ್ರತಿಭಟನೆಯಲ್ಲಿ 300ಕ್ಕೂ ಅಧಿಕ ಗ್ರಾಮಸ್ಥರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಹಿರಿಯರು, ಮಹಿಳೆಯರು ಹಾಗೂ ಯುವಕರು ಭಾಗವಹಿಸಿದ್ದರು.