ಕನ್ನಡಪ್ರಭ ವಾರ್ತೆ ಕಾರವಾರ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಭಾಷಾ ಪತ್ರಿಕೆಗೆ ಅಂಕಗಳ ಬದಲು ಗ್ರೇಡ್ ವ್ಯವಸ್ಥೆ ಜಾರಿಗೆ ತಂದಿರುವ ರಾಜ್ಯ ಸರ್ಕಾರದ ಕ್ರಮವನ್ನು ಪುನರ್ ಪರಿಶೀಲಿಸುವಂತೆ ಆಗ್ರಹಿಸಿ ರಾಜ್ಯಪಾಲ ಥಾವರಚಂದ್ ಗೆಹ್ಲೋತ್‌ ಸರ್ಕಾರಕ್ಕೆ ಪತ್ರ ಬರೆದಿರುವುದನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕರವೇ ಕಾರ್ಯಕರ್ತರು, ರಾಜ್ಯಪಾಲರ ನಡೆಯ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ನಾಡದ್ರೋಹಿ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು ಕೂಡಲೇ ಕರ್ನಾಟಕ ಬಿಟ್ಟು ತೊಲಗಲಿ ಎಂದು ಒಕ್ಕೊರಲಿನಿಂದ ಆಗ್ರಹಿಸಿದರು.ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಅರುಣ್ ಹರ್ಕಡೆ, ನಾವು ಹಿಂದಿ ಭಾಷೆಯ ವಿರೋಧಿಗಳಲ್ಲ, ಆದರೆ ಕನ್ನಡಿಗರ ಮೇಲಿನ ಬಲವಂತದ ಹಿಂದಿ ಹೇರಿಕೆಯನ್ನು ನಾವು ತೀವ್ರವಾಗಿ ವಿರೋಧಿಸುತ್ತೇವೆ. ರಾಜ್ಯಪಾಲರು ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ನಿಂತು ಕರ್ನಾಟಕ ವಿರೋಧಿ ನಿಲುವು ತಳೆದಿದ್ದಾರೆ. ಹಿಂದಿ ಪತ್ರಿಕೆಗೆ ಗ್ರೇಡ್ ವ್ಯವಸ್ಥೆ ರದ್ದುಪಡಿಸುವ ಕುರಿತು ಅವರು ಮುಖ್ಯ ಕಾರ್ಯದರ್ಶಿಗೆ ಬರೆದಿರುವ ಪತ್ರದ ಹಿಂದೆ, ರಾಜ್ಯದಲ್ಲಿ ಹಿಂದಿ ಹೇರಿಕೆಯನ್ನು ಶಾಶ್ವತಗೊಳಿಸುವ ವ್ಯವಸ್ಥಿತ ಹುನ್ನಾರ ಅಡಗಿದೆ. ಇದು ಕನ್ನಡಿಗರ ಆಶೋತ್ತರಗಳಿಗೆ ವಿರುದ್ಧವಾದ ನಡೆ. ಕೇಂದ್ರ ಸರ್ಕಾರ ಕೂಡಲೇ ಇಂತಹ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ಒತ್ತಾಯಿಸಿದರು.ಕರವೇ ಕಾರವಾರ ತಾಲೂಕಾಧ್ಯಕ್ಷ ನರೇಂದ್ರ ತಳೇಕರ್, ಕನ್ನಡ ಭಾಷೆ ಹಾಗೂ ಕನ್ನಡಿಗರನ್ನು ಅವಹೇಳನ ಮಾಡುವ ರೀತಿಯಲ್ಲಿ ರಾಜ್ಯಪಾಲರು ನಡೆದುಕೊಳ್ಳುತ್ತಿದ್ದಾರೆ ಎಂದರು.

ಈ ಪ್ರತಿಭಟನೆಯಲ್ಲಿ ಕರವೇ ಜಿಲ್ಲಾ ಉಪಾಧ್ಯಕ್ಷ ವಿನಾಯಕ ನಾಯಕ, ಪ್ರಧಾನ ಕಾರ್ಯದರ್ಶಿ ಗಣಪತಿ ನಾಯ್ಕ, ಯುವ ಘಟಕದ ಮಂಜುನಾಥ ನಾಯಕ, ಜಿಲ್ಲಾ ಪ್ರಮುಖರಾದ ಶ್ರೀಪಾದ ಶೆಟ್ಟಿ, ಕಾರವಾರ ನಗರಾಧ್ಯಕ್ಷ ರಾಜಾ ನಾಯ್ಕ, ನಾಗರಾಜ ಅಮದಳ್ಳಿ, ದಾಂಡೇಲಿಯ ಅಶೋಕ ಮಾನೆ ಸೇರಿದಂತೆ ಹಲವು ಕಾರ್ಯಕರ್ತರು ಹಾಗೂ ಕನ್ನಡಾಭಿಮಾನಿಗಳು ಭಾಗವಹಿಸಿದ್ದರು.