ಸಾರಾಂಶ
ಜನರಲ್ ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿದ ಹಿಂದೂಪರ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ, ಬಾಂಗ್ಲಾದೇಶದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ಹಲ್ಲೆ, ಹಿಂದೂ ಮಹಿಳೆಯರ ಮೇಲಿನ ಅತ್ಯಾಚಾರ, ದೇವಾಲಯಗಳ ಧ್ವಂಸವನ್ನು ಖಂಡಿಸಿ, ದೌರ್ಜನ್ಯ ತಡೆಯಲು ಬಾಂಗ್ಲಾದ ಮೇಲೆ ಒತ್ತಡ ಹೇರುವಂತೆ ಆಗ್ರಹಿಸಿ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿದ ಹಿಂದೂಪರ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ, ಬಾಂಗ್ಲಾದೇಶದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಬಾಂಗ್ಲಾದಲ್ಲಿ ಶೇ.8ರಷ್ಟು ಇರುವ ಹಿಂದೂಗಳ ಮೇಲೆ ಪ್ರತಿ ದಿನ ಹಲ್ಲೆ, ಪ್ರಾಣಹಾನಿ, ಮಂದಿರಗಳ ಮೇಲೆ ದಾಳಿ ಅವ್ಯಾಹತವಾಗಿ ನಡೆಯುತ್ತಲ್ಲೇ ಇವೆ. ಇದರಿಂದಾಗಿ ಅಲ್ಪಸಂಖ್ಯಾತ ಹಿಂದೂಗಳು ಭಯದಿಂದ ತತ್ತರಿಸುತ್ತಿದ್ದು, ಭಾರತ ಅವರಿಗೆ ಕಾಣುತ್ತಿರುವ ಏಕೈಕ ಆಶಾಕಿರಣಾಗಿದೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ ನಡೆಯುತ್ತಿರುವ ಹಿಂಸೆ, ಅತ್ಯಾಚಾರಗಳನ್ನು ನಿಲ್ಲಿಸಲು ಕಠಿಣ ಕ್ರಮಕೈಗೊಳ್ಳಲು ಅಲ್ಲಿನ ಸರ್ಕಾರದ ಮೇಲೆ ಕೇಂದ್ರ ಸರ್ಕಾರ ಒತ್ತಡ ತರಬೇಕು. ಹಿಂದೂಗಳು ನೆಮ್ಮದಿಯಿಂದ ಬಾಳುವಂತ ವಾತಾವರಣ ನಿರ್ಮಾಣವಾಗಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಹಿಂದೂ ಸಂಘಟನೆಗಳ ಪ್ರಮುಖರು, ಜಿಲ್ಲಾ ಬಿಜೆಪಿ ಮುಖಂಡರು ಸೇರಿದಂತೆ ನೂರಕ್ಕೂ ಅಧಿಕ ಸಂಖ್ಯೆಯ ಕಾರ್ಯಕರ್ತರು ಭಾಗಿಯಾಗಿದ್ದರು.