ಸಾರಾಂಶ
ರಾಣಿಬೆನ್ನೂರು: ಮಹಾರಾಷ್ಟ್ರದ ಪುಂಡಾಟಿಕೆ ಖಂಡಿಸಿ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳ ವತಿಯಿಂದ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಬೆಂಬಲಿಸಿ ಶನಿವಾರ ನಗರದಲ್ಲಿ ತಾಲೂಕು ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ ರೈತಪರ, ಕನ್ನಡಪರ, ಸಂಘ ಸಂಸ್ಥೆಗಳು ಪ್ರತಿಭಟನೆ ನಡೆಸಿದವು.
ಇಲ್ಲಿನ ಕೆಇಬಿ ವಿನಾಯಕ ದೇವಸ್ಥಾನದ ಬಳಿಯಿಂದ ಬೆಳಗ್ಗೆ 11.45ರ ಸುಮಾರು ಮೆರವಣಿಗೆಯಲ್ಲಿ ಹೊರಟ ಪ್ರತಿಭಟನಾಕಾರರು ನಗರದ ಕೇಂದ್ರ ಬಸ್ ನಿಲ್ದಾಣದ ವರೆಗೆ ಸಾಗಿ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.ಕರ್ತವ್ಯಕ್ಕೆ ತೆರಳಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಾಲಕನ ಮೇಲೆ ಹಲ್ಲೆ ನಡೆಸಿದ ಹಾಗೂ ಗಡಿಭಾಗದ ಗ್ರಾಮ ಪಂಚಾಯಿತಿ ಅಧಿಕಾರಿಗಳ ಮೇಲೆ ಮರಾಠಿ ಭಾಷೆಯಲ್ಲಿ ಮಾತನಾಡುವಂತೆ ಕಿರುಕುಳ ನೀಡುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ನಿಷೇಧಿಸಬೇಕು. ಮಹಾರಾಷ್ಟ್ರದಲ್ಲಿ ಶಿವಸೇನೆ ಕಾರ್ಯಕರ್ತರು ನಮ್ಮ ಸಾರಿಗೆ ಸಂಸ್ಥೆ ಬಸ್‌ಗಳ ಮೇಲೆ ಮರಾಠಿ ಭಾಷೆ ಬರಹ ಮೂಡಿಸುವುದು, ಚಾಲಕ, ನಿರ್ವಾಹಕರಿಗೆ ಕಪ್ಪು ಮಸಿ ಬಳಿಯುವುದು, ಗುಂಪು ಕಟ್ಟಿಕೊಂಡು ಬಂದು ಕಪ್ಪುಬಟ್ಟೆ ಪ್ರದರ್ಶನ ಮಾಡುತ್ತಿರುವುದು ಖೇದಕರ ಸಂಗತಿ. ಆದ್ದರಿಂದ ರಾಜ್ಯದಲ್ಲಿ ಕೂಡಲೇ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕು ಮತ್ತು ಅದರ ಮುಖಂಡರನ್ನು ಗಡಿಪಾರು ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ತಾಲೂಕು ಹೋರಾಟ ಸಮಿತಿ ಅಧ್ಯಕ್ಷ ರವೀಂದ್ರಗೌಡ ಪಾಟೀಲ, ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಿತ್ಯಾನಂದ ಕುಂದಾಪುರ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರಭಾಕರ ಶಿಗ್ಲಿ, ಕಿರಣ ಗುಳೇದ, ಕೊಟ್ರೇಶಪ್ಪ ಎಮ್ಮಿ, ಈರಣ್ಣ ಹಲಗೇರಿ, ಮಂಜುನಾಥ ದುಗ್ಗತ್ತಿ, ಗಣೇಶ ಗೋಣಿಬಸಮ್ಮನವರ, ಮಂಜುನಾಥ ಕೋಲಕಾರ ಮತ್ತಿತರರು ಪ್ರತಿಭಟನೆಯಲ್ಲಿದ್ದರು.