ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಗಂಭೀರ ಪ್ರಶ್ನೆಗಳ ಕುರಿತು ಸೊನಮ್ ವಾಂಗ್ಚುಕ್ ನಡೆಸುತ್ತಿರುವ ಶಾಂತಿಯುತ ಉಪವಾಸ ಸತ್ಯಾಗ್ರಹಕ್ಕೆ ಕೇಂದ್ರ ಸರ್ಕಾರ ಸ್ಪಂದಿಸದಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧ

ಕೊಪ್ಪಳ: ಸಾಮಾಜಿಕ ಹೋರಾಟಗಾರ ಸೊನಮ್ ವಾಂಗ್ಚುಕ್ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಹಾಗೂ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯ ಬಳಿಕ ಉಪ ತಹಸೀಲ್ದಾರ್ ಗವಿಸಿದ್ದಪ್ಪ ಮಣ್ಣೂರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರಗತಿಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಮುಖ್ಯ ಸಂಚಾಲಕ ಬಸವರಾಜ ಶೀಲವಂತರ್ ಮಾತನಾಡಿ, ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಗಂಭೀರ ಪ್ರಶ್ನೆಗಳ ಕುರಿತು ಸೊನಮ್ ವಾಂಗ್ಚುಕ್ ನಡೆಸುತ್ತಿರುವ ಶಾಂತಿಯುತ ಉಪವಾಸ ಸತ್ಯಾಗ್ರಹಕ್ಕೆ ಕೇಂದ್ರ ಸರ್ಕಾರ ಸ್ಪಂದಿಸದಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಸಮಸ್ಯೆ ತಕ್ಷಣ ಪರಿಹರಿಸಬೇಕು ಹಾಗೂ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಯುವ ಮುಖಂಡ ಕಾಶಿಂ ನಾಗೇಶನಹಳ್ಳಿ ಮಾತನಾಡಿ, ವಿದ್ಯಾರ್ಥಿಗಳ ಧ್ವನಿಗೆ ಗೌರವ ನೀಡಿ ಶಿಕ್ಷಣ ಕ್ಷೇತ್ರದ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಂಡುಕೊಳ್ಳಬೇಕು. ಸೊನಮ್ ವಾಂಗ್ಚುಕ್ ನ್ಯಾಯಸಮ್ಮತ ಬೇಡಿಕೆಗಳ ಕುರಿತು ಕೇಂದ್ರ ಸರ್ಕಾರ ವಿಳಂಬ ಮಾಡದೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಮುಖಂಡ ಯಮನೂರಪ್ಪ ಈಳಿಗನೂರ್ ಮಾತನಾಡಿ, ಶಾಂತಿಯುತ ಹೋರಾಟ ನಿರ್ಲಕ್ಷಿಸುವುದು ಸರಿಯಲ್ಲ. ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸಂವಾದ ಆರಂಭಿಸಿ ಬೇಡಿಕೆ ಈಡೇರಿಸಬೇಕು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಸ್.ಎ. ಗಫಾರ್, ಭಾರತೀಯ ಕಾರ್ಮಿಕ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ತುಕಾರಾಮ ಪಾತ್ರೋಟಿ, ಸಾಹಿತಿ ಡಿ.ಎಂ. ಬಡಿಗೇರ್, ಶಶಿಕಲಾ ಡಿ. ಮಠದ, ದಿಲಾಶಾದ್ ನದಾಫ್, ಗೌರಿ ಗೋನಾಳ, ನಿಂಗು ಬೆಣಕಲ್, ಕರಿಯಪ್ಪ ಮಣ್ಣಿನವರ, ಮುದುಕಪ್ಪ ಹೊಸಮನಿ, ಶಿವಪ್ಪ ಹಡಪದ,ಮಕಬೂಲ್ ರಾಯಚೂರು, ಗವಿಸಿದ್ದಪ್ಪ ಹಲಗಿ, ಹೊನ್ನೂರು ಬೋಚನಹಳ್ಳಿ, ಲಕ್ಷ್ಮಣ ಮಂಡಲಗೇರಿ, ಮೈಲಪ್ಪ ಮಾದಿನೂರು, ಭರಮಜೀ ತಿಗರಿ, ಸಂಜೀವಮೂರ್ತಿ ಬೇವಿನಗಿಡ, ರಾಮಲಿಂಗ ಶಾಸ್ತ್ರಿ ಮಠ, ಕಾಶಪ್ಪ ಚಲವಾದಿ, ಶಿವರಾಜ್ ಚಲವಾದಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.