ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಹಿರಿಯ ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಬಳಿಕ ಅದೇ ಮೈದಾನದಲ್ಲಿ ಶುದ್ಧೀಕರಣ ಕಾರ್ಯ ನಡೆಸಿರುವುದು ಅತ್ಯಂತ ಖಂಡನೀಯ ಹಾಗೂ ಅಮಾನವೀಯ ಕೃತ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಘಟನೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾಡಿದ ಅವಮಾನ ಮಾತ್ರವಲ್ಲ. ದೇಶದ ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರಿಗೆ ಮಾಡಿದ ಅವಮಾನವಾಗಿದೆ.

ಕನ್ನಡಪ್ರಭ ವಾರ್ತೆ ಹಾಸನ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಬಳಿಕ ಆ ಮೈದಾನವನ್ನು ಶುದ್ಧೀಕರಿಸಿದ ಘಟನೆಯನ್ನು ಖಂಡಿಸಿ ಹಾಸನ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಸಂಸದ ಶ್ರೇಯಸ್ ಎಂ. ಪಟೇಲ್ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯು ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಿಂದ ಆರಂಭವಾಗಿ ಬಿ.ಎಂ. ರಸ್ತೆಯ ಮೂಲಕ ಜಿಲ್ಲಾ ಪಂಚಾಯಿತಿ ಎದುರಿನ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿಗೆ ತಲುಪಿತು. ಅಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿ ಘಟನೆಗೆ ಆಕ್ರೋಶ ವ್ಯಕ್ತಪಡಿಸಲಾಯಿತು. ನಂತರ ಪ್ರತಿಭಟನಾಕಾರರು ಮೆರವಣಿಗೆಯ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು. ಸಂಸದ ಶ್ರೇಯಸ್ ಎಂ. ಪಟೇಲ್ ಅವರು ಪ್ರತಿಭಟನಾಕಾರರಿಗೆ ಸಾಥ್ ನೀಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ (ಹುಡಾ) ಅಧ್ಯಕ್ಷ ಪಟೇಲ್ ಶಿವಪ್ಪ ಮಾತನಾಡಿ, “ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಹಿರಿಯ ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಬಳಿಕ ಅದೇ ಮೈದಾನದಲ್ಲಿ ಶುದ್ಧೀಕರಣ ಕಾರ್ಯ ನಡೆಸಿರುವುದು ಅತ್ಯಂತ ಖಂಡನೀಯ ಹಾಗೂ ಅಮಾನವೀಯ ಕೃತ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಘಟನೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾಡಿದ ಅವಮಾನ ಮಾತ್ರವಲ್ಲ. ದೇಶದ ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರಿಗೆ ಮಾಡಿದ ಅವಮಾನವಾಗಿದೆ. ಇದು ಪ್ರತೀಕಾರ ಮತ್ತು ದ್ವೇಷದ ರಾಜಕಾರಣಕ್ಕೆ ಸಾಕ್ಷಿಯಾಗಿದೆ. ದಲಿತ ನಾಯಕರು ಹಾಗೂ ಸಂವಿಧಾನಕ್ಕೆ ಅವಮಾನವಾಗುವಂತಹ ಕೃತ್ಯಕ್ಕೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಘಟನೆಗೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಖರ್ಗೆ ಅವರಲ್ಲಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ ಅವರು, ಈ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹಾಸನ ಜಿಲ್ಲಾ ಕಾಂಗ್ರೆಸ್ ವತಿಯಿಂದ ಧರಣಿ ಸತ್ಯಾಗ್ರಹ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಇ.ಎಚ್. ಲಕ್ಷ್ಮಣ್, ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಂಜಿತ್ ಗೊರೂರು, ಮುಖಂಡರಾದ ಶಶಿಧರ್, ತಾರಾಚಂದನ್, ರಘು ದಾಸರಕೊಪ್ಪಲು, ಮಲ್ಲಿಗೆವಾಳ್ ದ್ಯಾವಪ್ಪ, ಚಂದ್ರಶೇಖರ್, ದೇವರಾಜು, ರಾಮಚಂದ್ರ, ಪ್ರಕಾಶ್, ಲಕ್ಷ್ಮಣ್, ವಕೀಲರಾದ ಜಯರಾಮ್, ಫೈರೋಜ್ ಸೇರಿದಂತೆ ಹಲವರು ಭಾಗವಹಿಸಿದ್ದರು.

-------------

* ಬಾಕ್ಸ್‌ (ಫೋಟೋ ಶೀರ್ಷಿಕೆ-18ಎಚ್ಎಸ್ಎನ್6ಎ)

ಬಸ್ ನಿರ್ವಾಹಕರ ವಿರುದ್ಧ ಪ್ರತಿಭಟನೆ

ಪ್ರತಿಭಟನಾ ಮೆರವಣಿಗೆಯು ಅಂಬೇಡ್ಕರ್ ಪ್ರತಿಮೆ ಮುಂದೆ ರಸ್ತೆ ಬಳಿ ಕುಳಿತಿದ್ದಾಗ ಆ ಮೂಲಕ ಸಾಗುತ್ತಿದ್ದ ಬಸ್ ನಿರ್ವಾಹಕರು ಪ್ರತಿಭಟನಾಕಾರರ ವಿರುದ್ಧ ಮಾತನಾಡಿದ್ದಾರೆ ಎನ್ನಲಾಗಿದ್ದು, ಇದರಿಂದ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಬಸ್ಸನ್ನು ಹಿಂಬಾಲಿಸಿ ಅಡ್ಡಗಟ್ಟಿ ಕೆಲಕಾಲ ಸಂಚಾರಕ್ಕೆ ತಡೆಯೊಡ್ಡಿದರು. ಕೆಲ ಕಾರ್ಯಕರ್ತರು ರಸ್ತೆಯಲ್ಲೇ ಮಲಗಿ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ಪ್ರತಿಭಟನಾಕಾರರನ್ನು ಮನವೊಲಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.