ಸಾರಾಂಶ
ಶಿಕ್ಷಣ ಸಚಿವ ಮಧು ಬಂಗಾರಪ್ಪ ರಾಜಿನಾಮೆಗೆ ಆಗ್ರಹಿಸಿ ಉಡುಪಿಯಲ್ಲಿ ಎಬಿವಿಪಿಯಿಂದ ಪ್ರತಿಭಟನೆ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಚೆಕ್ ಬೌನ್ಸ್, ವಂಚನೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ಅಜ್ಜರಕಾಡಿನ ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟನೆ ನಡೆಸಲಾಯಿತು.ಈ ಸಂದರ್ಭ ಜಿಲ್ಲಾ ಸಂಚಾಲಕ ಗಣೇಶ್ ಪೂಜಾರಿ ಮಾತನಾಡಿ, ಭಾರತದ ಎಲ್ಲ ಸಮಸ್ಯೆಗಳಿಗೆ ಶಿಕ್ಷಣವೊಂದೇ ಪರಿಹಾರವಾಗಿರುವ ಸಂದರ್ಭದಲ್ಲಿ, ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾಗಿರುವ ವ್ಯಕ್ತಿಯೊಬ್ಬರು ಶಿಕ್ಷಣ ಸಚಿವನಾಗಿ ಮುಂದುವರಿಯುವುದು ತಪ್ಪು ಸಂದೇಶವನ್ನು ನೀಡುತ್ತಿದೆ ಎಂದರು.
ನಗರ ಕಾರ್ಯದರ್ಶಿ ಶ್ರೀವತ್ಸ ಮಾತನಾಡಿ, ಶಿಕ್ಷಣ ಇಲಾಖೆಗೆ ಕಪ್ಪು ಚುಕ್ಕಿ ತಂದಿರುವ ಮಧು ಬಂಗಾರಪ್ಪ ಈ ಕೂಡಲೇ ನೈತಿಕ ಹೊಣೆ ಹೊತ್ತು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಸಂಹಿತಾ ಕೆ., ನಗರ ಸಹಕಾರ್ಯದರ್ಶಿಗಳಾದ ಕಾರ್ತಿಕ್, ಶಶಾಂಕ್, ಪ್ರಮುಖರಾದ ಶ್ರೀಹರಿ, ಅನಂತ್ ಕೃಷ್ಣ, ನವೀನ್, ಸ್ವಸ್ತಿಕ್, ಧನ್ಯ, ಆದಿತ್ಯ, ಲ್ಯಾರಿ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಭಾಗವಹಿಸಿದರು.