ಸಾರಾಂಶ
ಕಾಂತರಾಜು ವರದಿ ಜಾರಿಗೊಳಿಸು ವಂತೆ ಒತ್ತಾಯಿಸಿ ಅತಿ ಹಿಂದುಳಿದ ಮಠಾಧೀಶರ ಮಹಾಸಭಾದಿಂದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಧರಣಿ ನಡೆಸಿ,ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರಿಗೆ ಮನವಿ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಬೆಂಗಳೂರು
ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಎಚ್.ಕಾಂತರಾಜು ಅವರು ನೀಡಿರುವ ಜಾತಿ ಗಣತಿ ವರದಿ ಜಾರಿಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಅತಿ ಹಿಂದುಳಿದ ಮಠಾಧೀಶರ ಮಹಾಸಭಾದಿಂದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬುಧವಾರ ಧರಣಿ ನಡೆಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಮಹಾಸಭಾ ಸಂಸ್ಥಾಪಕ ರಾಜ್ಯಾಧ್ಯಕ್ಷರೂ ಆಗಿರುವ ಪ್ರಣವಾನಂದ ಸ್ವಾಮೀಜಿ, ಕಾಂತರಾಜು ಆಯೋಗ ಸಿದ್ಧಪಡಿಸಿರುವ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಬಗ್ಗೆ ವರದಿಯನ್ನು ಸರ್ಕಾರ ಜಾರಿಗೆ ತರಬೇಕು. ವರದಿಯಲ್ಲಿ ಏನಿದೆ ಎಂದು ತಿಳಿಯದೇ ಕೆಲವರು ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ ಎಂದು ನುಡಿದರು.
ಅತಿ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಸ್ಥಾಪಿಸಿದ ಪ್ರತಿ ನಿಗಮಗಳಿಗೂ 500 ಕೋಟಿ ರು. ಅನುದಾನವನ್ನು ತಕ್ಷಣ ಬಿಡುಗಡೆ ಮಾಡಬೇಕು. ಕೋಲಾರದಲ್ಲಿ ಕೊಲೆಯಾದ ಕೌನ್ಸಿಲರ್ ಶ್ರೀನಿವಾಸ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಅತಿ ಹಿಂದುಳಿದ ವರ್ಗಗಳ ಕುಲಕಸುಬುಗಳನ್ನು ರಕ್ಷಣೆ ಮಾಡಬೇಕು. ಕುಲಕಸುಬು ಕಳೆದುಕೊಂಡ ಸಮಾಜಗಳಿಗೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು. ರಾಜ್ಯ ಬಜೆಟ್‌ನಲ್ಲಿ ಜನಸಂಖ್ಯೆ ಆಧಾರದಲ್ಲಿ ಅನುದಾನ ಹಂಚಿಕೆಯಾಗಬೇಕು ಎಂದು ಒತ್ತಾಯಿಸಿದರು.ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರಿಗೆ ಬೇಡಿಕಗಳ ಮನವಿ ಪತ್ರ ಸಲ್ಲಿಸಲಾಯಿತು. ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ಸಂಗಮಾನಂದ ಸ್ವಾಮೀಜಿ, ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ದೊಡ್ಡೇಂದ್ರ ಸ್ವಾಮೀಜಿ, ರಾಜ್ಯ ಕಾರ್ಯದರ್ಶಿ ವರಲಿಂಗ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರು ಧರಣಿಯಲ್ಲಿ ಪಾಲ್ಗೊಂಡಿದ್ದರು.
- - -ಕ್ಯಾಪ್ಷನ್....
ಕಾಂತರಾಜು ವರದಿ ಜಾರಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಅತಿ ಹಿಂದುಳಿದ ಮಠಾಧೀಶರ ಮಹಾಸಭಾದಿಂದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಧರಣಿ ನಡೆಸಿತು. ಈ ವೇಳೆ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ಬೇಡಿಕೆಗಳ ಮನವಿ ಪತ್ರ ಸ್ವೀಕರಿಸಿದರು.