ಔರಾದ್(ಬಿ) ಹಾಗೂ ಕಮಲನಗರ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವಂತೆ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಸೆ. 19ರಂದು ಔರಾದ್ ಪಟ್ಟಣದಲ್ಲಿ ಬಿಜೆಪಿ ಔರಾದ್ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಯಿತು.
ಕನ್ನಡಪ್ರಭ ವಾರ್ತೆ ಔರಾದ್
ಔರಾದ್(ಬಿ) ಹಾಗೂ ಕಮಲನಗರ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವಂತೆ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಸೆ. 19ರಂದು ಔರಾದ್ ಪಟ್ಟಣದಲ್ಲಿ ಬಿಜೆಪಿ ಔರಾದ್ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಯಿತು.ಔರಾದ್(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರ ನೇತೃತ್ವದಲ್ಲಿ ಪಟ್ಟಣದಲ್ಲಿ ನಡೆದ ಸಭೆಯಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯ ರೂಪುರೇಷೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿ ವಿವಿಧ ಸಲಹೆಗಳನ್ನು ನೀಡಿದರು.
ಸೆ. 19ರಂದು ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಔರಾದ್ ಪಟ್ಟಣದ ಅಮರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿ ಪ್ರತಿಭಟನೆಗೆ ಚಾಲನೆ ನೀಡುವರು. ನಂತರ ಬಿಜೆಪಿ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಸಂಖ್ಯಾತ ರೈತರೊಂದಿಗೆ ಪ್ರತಿಭಟನಾ ಮೆರವಣಿಗೆಯ ಮೂಲಕ ಎಪಿಎಂಸಿ ವೃತ್ತದವರೆಗೆ ತೆರಳಿ ಪ್ರತಿಭಟನೆ ನಡೆಸಲಾಗುವುದು.ಸಭೆಯಲ್ಲಿ ಶಾಸಕರು ಮಾತನಾಡಿ, ಔರಾದ್(ಬಿ) ಹಾಗೂ ಕಮಲನಗರ ತಾಲೂಕುಗಳಲ್ಲಿ ಮಳೆ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಗಾರು ಹಂಗಾಮಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ ಬೆಳೆಗಳು ಹಾನಿಗೊಳಗಾಗಿದ್ದು, ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.
ಈ ಬಗ್ಗೆ ಅನೇಕ ಸಲ ಸರ್ಕಾರದ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಇಂತಹ ಗಂಭೀರ ಪರಿಸ್ಥಿತಿಯಲ್ಲಿಯೂ ಸರ್ಕಾರ ಈ ಎರಡೂ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸದೆ ನಿರ್ಲಕ್ಷಿಸುವುದು ಘೊರ ಅನ್ಯಾಯವೆಂದು ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮುಖಂಡರಾದ ಕಿರಣ ಪಾಟೀಲ, ರಾಮಶೆಟ್ಟಿ ಪನ್ನಾಳೆ, ರಂಗರಾವ ಜಾಧವ, ಶಿವರಾಜ ಅಲ್ಮಾಜೆ, ಶಿವಾಜಿರಾವ ಪಾಟೀಲ ಮುಂಗನಾಳ, ಶಿವಾಜಿರಾವ ಕಾಳೆ, ಸತೀಷ ಪಾಟೀಲ, ಧೊಂಡಿಬಾ ನರೋಟೆ, ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.