ಸಾರಾಂಶ
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದಲ್ಲಿ ಸೋಮವಾರ ಗ್ರಾಪಂ ವ್ಯಾಪ್ತಿಯ ಎಲ್ಲಾ ನೌಕರರರು, ಗ್ರಾಪಂ ಸದಸ್ಯರು ಪ್ರತಿಭಟನೆ ನಡೆಸಿದರು.ಜಿಲ್ಲಾಡಳಿತ ಭವನ ಮುಂದೆ ಧರಣಿ ಕುಳಿತ ನೌಕರರು ಸರ್ಕಾರದ ನೌಕರರ ವಿರೋಧಿ ನೀತಿ ವಿರುದ್ಧ ಭಿತ್ತಿ ಪತ್ರಗಳನ್ನು ಪ್ರದರ್ಶನ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪಿಡಿಒ ನೌಕರರ ಸಂಘದ ಅಧ್ಯಕ್ಷ ಡಿ.ಕುಮಾರಸ್ವಾಮಿ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಪಂ ಕಚೇರಿಗಳನ್ನು ಸೇವೆ ಸಲ್ಲಿಸುತ್ತಿರುವ ನೌಕರರು ಬಹು ದಿನಗಳ ಬೇಡಿಕೆಗಳನ್ನು ಈಡೇರಿಸುವಂತೆ ಅನೇಕ ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ರಾಜ್ಯ ಸಮಿತಿ ಅ.೪ ರಿಂದ ಗ್ರಾಪಂ ಎಲ್ಲಾ ಸೇವೆಗಳನ್ನು ಬಂದ್ ಮಾಡಿ, ರಾಜಧಾನಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ. ಇಂದು ಎಲ್ಲಾ ಜಿಲ್ಲಾ ಕೇಂದ್ರದ ಮುಂದೆ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಪ್ರತಿಭಟನೆ ಮಾಡುತ್ತಿದ್ದೇವೆ ಎಂದರು.
ರಾಜ್ಯದ ಶೇ.೬೮ ರಿಂದ ೭೦ ಜನರಿಗೆ ಸ್ಥಳೀಯ ಸಂಸ್ಥೆಯಾದ ಗ್ರಾಪಂಗಳಿಂದ ಶೇ.೭೦ರಷ್ಟು ಸೇವೆಗಳನ್ನು ನೀಡಲಾಗುತ್ತಿದೆ. ಈ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಗ್ರಾಪಂ, ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಗ್ರಾಪಂ ಎಲ್ಲಾ ಪಂಚ ನೌಕರರಾದ ಕ್ಲರ್ಕ್ ಕಂ ಡಿಇಒ, ಕರವಸೂಲಿಗಾರರು, ಜಲಗಾರರು, ಕಚೇರಿ ಸಹಾಯಕರರು, ಸ್ವಚ್ಛತಾಗಾರರು ಕಾರ್ಯನಿರ್ವಹಣೆಯಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂಬುವುದು ನಮ್ಮೆಲ್ಲರ ಒತ್ತಾಯವಾಗಿದೆ ಎಂದರು.ಗೌರವ ಅಧ್ಯಕ್ಷ ಎನ್.ಜಿ. ಮಾದಪ್ಪ ಮಾತನಾಡಿ, ಗ್ರಾಪಂಯಲ್ಲಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಸರ್ಕಾರ ಮತ್ತು ಇಲಾಖೆಗೆ ಹಲವಾರು ವರ್ಷಗಳಿಂದ ಮನವಿ ಸಲ್ಲಿಸುತ್ತಾ ಬಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಕೇವಲ ಎಲ್ಲಾ ಸಮಸ್ಯೆಗಳಿಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು, ನೌಕರರನ್ನು ಹಾಗೂ ಸಿಬ್ಬಂದಿಗಳನ್ನು ನೇರ ಹೊಣೆಗಾರರನ್ನಾಗಿ ಸರ್ಕಾರಮಾಡುತ್ತಿದೆ ಎಂದು ದೂರಿದರು.
ಗ್ರಾಪಂ ಸೇವೆಗಳಾದ ನರೇಗಾ, ೧೫ನೇ ಹಣಕಾಸು ಯೋಜನೆ ಕಾರ್ಯಕ್ರಮಗಲೂ, ವಸತಿ ಯೋಜನೆಯ ಆಶ್ರಯ ಮನೆಗಳ ನಿರ್ಮಾಣ, ಇ.ಜಮ, ಸ್ವಚ್ಛ ಭಾರತ್ ಮಿಷನ್, ಬಾಫೂಜಿ ಸೇವೆ ಕೇಂದ್ರದ ಸೇವೆಗಳು, ಗ್ರಾಮಗಳಲ್ಲಿ ಕಸ ಸಂಗ್ರಹಣೆ, ಕುಡಿಯುವ ನೀರು ಸರಬರಾಜು, ವಿದ್ಯುತ್ ದೀಪಗಳ ನಿರ್ವಹಣೆ, ಕಛೇರಿ ಕರ್ತವ್ಯ ನಿರ್ವಹಿಸುವುದನ್ನು ನಿಲ್ಲಿಸಿ ಅನಿರ್ದಿಷ್ಟಾವಧಿ ಹೋರಾಟ ಕೈಗೊಂಡಿದ್ದೇವೆ ಎಂದು ತಿಳಿಸಿದರು.ಪ್ರತಿಭಟನೆಯಲ್ಲಿ ಗ್ರಾಪಂ ಸದಸ್ಯರ ಒಕ್ಕೂಟದ ಜಿಲ್ಲಾಧ್ಯಕ್ಷ ಕೆಂಪರಾಜು, ಪ್ರಧಾನ ಕಾರ್ಯದರ್ಶಿ ಪುನೀತ್, ಉಪಾಧ್ಯಕ್ಷ ಬಸಪ್ಪನಪಾಳ್ಯ ರೇವಣ್ಣ, ರೂಪೇಶ್‌ಕಾಡಹಳ್ಲಿ, ಎಸ್‌ಡಿಎ ಮತ್ತು ಕಾರ್ಯದರ್ಶಿಗಳ ಸಂಘದ ಅಧ್ಯಕ್ಷ ಕೊತ್ತಲವಾಡಿ ಮಹದೇವಸ್ವಾಮಿ, ಡಿಇಒ ಸಂಘಗಳ ಅಧ್ಯಕ್ಷ ರಾಜೇಂದ್ರ, ರಾಜ್ಯ ಪರಿಷತ್ ಸದಸ್ಯ ಸುರೇಶ್, ಪ್ರಧಾನ ಕಾರ್ಯದರ್ಶಿ ಶಾಂತರಾಜು, ಸೇರಿದಂತೆ ಜಿಲ್ಲೆಯ ವ್ಯಾಪ್ತಿಯ ವಿವಿಧ ಗ್ರಾಪಂ ಪಂಚಾಯಿತಿಗಳ ಅಭಿವೃದ್ದಿ ಅಧಿಕಾರಿಗಳು, ಕಾರ್ಯದರ್ಶಿಗಳು, ನೌಕರರು, ಗ್ರಾಪಂ ಪ್ರತಿನಿಧಿಗಳು ಭಾಗವಹಿಸಿದ್ದರು.