ಕಬ್ಬಿಗೆ ನ್ಯಾಯಯುತ ಬೆಲೆ ನೀಡುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಸಕ್ಕರೆ ಸಚಿವರು ಹಾಗೂ ಜಿಲ್ಲಾಡಳಿತ ಸ್ಪಂದಿಸುತ್ತಿಲ್ಲ. ಪ್ರತಿ ಟನ್ ಕಬ್ಬಿಗೆ ₹3,600 ನೀಡದಿದ್ದರೆ ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ನಿವಾಸದ ಎದುರು ನ.18ರಿಂದ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ರೈತ ಮುಖಂಡರು ಎಚ್ಚರಿಕೆ ನೀಡಿದರು.
ಹಾವೇರಿ: ಕಬ್ಬಿಗೆ ನ್ಯಾಯಯುತ ಬೆಲೆ ನೀಡುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಸಕ್ಕರೆ ಸಚಿವರು ಹಾಗೂ ಜಿಲ್ಲಾಡಳಿತ ಸ್ಪಂದಿಸುತ್ತಿಲ್ಲ. ಪ್ರತಿ ಟನ್ ಕಬ್ಬಿಗೆ ₹3,600 ನೀಡದಿದ್ದರೆ ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ನಿವಾಸದ ಎದುರು ನ.18ರಿಂದ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ರೈತ ಮುಖಂಡರು ಎಚ್ಚರಿಕೆ ನೀಡಿದರು.
ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಬ್ಬು ಬೆಳೆಗಾರರ ಸಮನ್ವಯ ಸಮಿತಿ ಮುಖಂಡ ಅಶೋಕರಡ್ಡಿ ಮರ್ಚರೆಡ್ಡಿ, ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಹಾವೇರಿ ಜಿಲ್ಲೆಯ ರೈತರಿಗೆ ಕಡಿಮೆ ಬೆಲೆ ನೀಡಲಾಗುತ್ತಿದೆ. ಕಲಬುರಗಿಯಲ್ಲಿ ಶೇ.9.8ರಷ್ಟು ಕಬ್ಬಿನ ರಿಕವರಿ ಇದ್ದರೂ ಟನ್ಗೆ ₹3,500 ನೀಡಲಾಗುತ್ತಿದೆ. ಆದರೆ ಹಾವೇರಿಯಲ್ಲಿ ಶೇ.9.85ರಷ್ಟು ರಿಕವರಿ ಇದ್ದರೂ ಸೂಕ್ತ ಬೆಲೆ ನೀಡುತ್ತಿಲ್ಲ. ಕಳೆದ ಎರಡು ವರ್ಷಗಳಿಂದ ರಿಕವರಿ ಲೆಕ್ಕಾಚಾರದಲ್ಲಿ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು.ಒಂದು ಕಾಲದಲ್ಲಿ ರೈತರ ಆಡಳಿತದಲ್ಲಿದ್ದ ಸಕ್ಕರೆ ಕಾರ್ಖಾನೆಗಳಲ್ಲಿ ಶೇ.11ರಷ್ಟು ರಿಕವರಿ ಬರುತ್ತಿತ್ತು. ಖಾಸಗಿಯವರ ಕೈಗೆ ಕಾರ್ಖಾನೆಗಳು ಹೋದ ಬಳಿಕ ರಿಕವರಿ ಪ್ರಮಾಣ ಕಡಿಮೆಯಾಗಿರುವುದರ ಹಿಂದಿನ ಕಾರಣವೇನು? ಎಂಬುದನ್ನು ಸಮಗ್ರವಾಗಿ ಪರಿಶೀಲಿಸಬೇಕು. ಈ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಧಿಕಾರಿಗಳು ಹಾಗೂ ಸಚಿವರು ಸಭೆ ಕರೆದರೂ ಸಕ್ಕರೆ ಕಾರ್ಖಾನೆಗಳ ಮಾಲೀಕರು ಭಾಗವಹಿಸುತ್ತಿಲ್ಲ. ರೈತರ ಬೇಡಿಕೆಗಳಿಗೆ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಇಂತಹ ಸಂದರ್ಭದಲ್ಲಿ ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಅವರು, ನಾನು ಬರೀ ಸಕ್ಕರೆ ಸಚಿವ ಎಂಬ ಉಡಾಫೆಯ ಹೇಳಿಕೆ ನೀಡಿ ಜವಾಬ್ದಾರಿಯಿಂದ ನುಣುಚಿಕೊಳ್ಳುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಪ್ರತಿ ಟನ್ ಕಬ್ಬಿಗೆ ₹3,600 ನೀಡುವಂತೆ ಸಚಿವರು ಕೂಡಲೇ ಕ್ರಮ ಕೈಗೊಳ್ಳಬೇಕು. ರೈತರ ಹಿತ ಕಾಪಾಡಲು ಸಾಧ್ಯವಾಗದಿದ್ದರೆ ಸಚಿವರು ರಾಜೀನಾಮೆ ನೀಡಲಿ. ರೈತ ಮುಖಂಡರು ಕಾರ್ಖಾನೆಗಳ ಒಳಗೆ ಪ್ರವೇಶಿಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತರಲಾಗಿದೆ. ಕಾರ್ಖಾನೆಗಳಿಗೆ ಹೋದರೆ ಪ್ರಕರಣ ದಾಖಲಿಸುವ ಬೆದರಿಕೆ ಹಾಕಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ರೈತರ ಪರವಾಗಿ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಕಾರ್ಖಾನೆ ಬಂದ್ ಎಚ್ಚರಿಕೆ:ರೈತ ಮುಖಂಡ ಭುವನೇಶ್ವರ ಶಿಡ್ಲಾಪುರ ಮಾತನಾಡಿ, ರೈತರಿಗೆ ನಷ್ಟವಾಗಬಾರದು ಎಂಬ ಉದ್ದೇಶದಿಂದ ಕಾರ್ಖಾನೆಗಳನ್ನು ಆರಂಭಿಸುವಂತೆ ಹೇಳಿದ್ದು ನಿಜ. ಆದರೆ, ನಿಗದಿತ ಬೆಲೆ ನೀಡದಿದ್ದರೆ ಕಾರ್ಖಾನೆಗಳಿಗೆ ಬೀಗ ಹಾಕಿಸುವುದು ಅನಿವಾರ್ಯ. ಕಳೆದ 15 ವರ್ಷಗಳಿಂದ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ರೈತರಿಗೆ ಅನ್ಯಾಯ ಮಾಡುತ್ತಿವೆ. ಈ ಬಾರಿ ಅದಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ಜಿಲ್ಲೆಯಲ್ಲಿ ಬರಗಾಲ ಆವರಿಸಿದೆ. ಈ ಸಂದರ್ಭದಲ್ಲಿ ರೈತರೊಂದಿಗೆ ಸರ್ಕಾರ ಚೆಲ್ಲಾಟ ನಡೆಸಿದೆ. ಕಬ್ಬಿಗೆ ನ್ಯಾಯುತ ಬೆಲೆ ನಿಗದಿ ಮಾಡದಿದ್ದರೆ ಮುಂದೆ ಆಗುವ ಅನಾಹುತಕ್ಕೆ ಸರ್ಕಾರ, ಜಿಲ್ಲಾಡಳಿತವೇ ನೇರ ಹೊಣೆ ಹೊರಬೇಕಾಗುತ್ತದೆ. ರೈತರ ಹಿತಕ್ಕಾಗಿ ಒಗ್ಗಟ್ಟಿನಿಂದ ಹೋರಾಟ ಹಮ್ಮಿಕೊಳ್ಳಲಾಗಿದ್ದು, ಇದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಮಂಜುನಾಥ ಅಸುಂಡಿ, ಹನುಮಂತಪ್ಪ ದೀವಿಗಿಹಳ್ಳಿ, ಎಚ್.ಎಚ್. ಮುಲ್ಲಾ, ಹನುಮಂತಪ್ಪ ಹುಚ್ಚಣ್ಣವರ, ಹನುಮಂತಪ್ಪ ಕಬ್ಬಾರ, ಮರಿಗೌಡ ಪಾಟೀಲ, ಬಸವರಾಜ ತಳವಾರ, ಶಿವಯೋಗಿ ಹೊಸಗೌಡ್ರ, ಅನಿಲ್ ಡೊಳ್ಳಿನ, ಶಿವಾನಂದ ಜಡಿಮಠ, ವೀರಣ್ಣ ಹಲಗೇರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.ನ.18ರಿಂದ ಅನಿರ್ದಿಷ್ಟಾವಧಿ ಧರಣಿ: ಸಕ್ಕರೆ ಸಚಿವರ ನಿವಾಸದ ಮುಂದೆ ನ. 18ರಿಂದ ಅನಿರ್ದಿಷ್ಟಾವಧಿ ಧರಣಿ ನಡೆಸಲು ನಿರ್ಧರಿಸಲಾಗಿದೆ ಎಂದು ರೈತ ಮುಖಂಡ ಮಲ್ಲಿಕಾರ್ಜುನ ಬಳ್ಳಾರಿ ತಿಳಿಸಿದರು. ಕಾರ್ಖಾನೆಗಳ ಆಮಿಷಗಳಿಗೆ ರೈತರು ಬಲಿಯಾಗದೆ ಒಗ್ಗಟ್ಟಿನಿಂದ ಹೋರಾಟಕ್ಕೆ ಕೈಜೋಡಿಸಬೇಕು. ನ್ಯಾಯಯುತ ಬೆಲೆ ಸಿಗುವವರೆಗೂ ಹೋರಾಟ ಮುಂದುವರಿಸಬೇಕು ಎಂದು ಮನವಿ ಮಾಡಿದರು.