ಸಾರಾಂಶ
ಕನ್ನಡಪ್ರಭ ವಾರ್ತೆ ಹಾಸನ
ಸುಪ್ರೀಂಕೋರ್ಟ್ ತೀರ್ಪಿನಂತೆ ರಾಜ್ಯ ಸರ್ಕಾರ ಪರಿಶಿಷ್ಟರ ಮೀಸಲಾತಿಯಲ್ಲಿ ಒಳಮೀಸಲಾತಿ ಅನುಷ್ಠಾನಗೊಳಿಸಲು ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ. ಪರಿಶಿಷ್ಟರ ಮಿಸಲಾತಿ ವರ್ಗೀಕರಣ ಶೀಘ್ರವಾಗಿ ಜಾರಿ ಮಾಡಲು ಆಗ್ರಹಿಸಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಸೆಪ್ಟೆಂಬರ್ ೯ರಂದು ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಬೃಹತ್ ಪ್ರತಿಭಟನಾ ಮೆರವಣಿಗೆ ಮಾಡಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಡಾ. ಎನ್. ಮೂರ್ತಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ಪರಿಶಿಷ್ಟರ ಮೀಸಲಾತಿ ಪರಿಶಿಷ್ಟ ಜನಾಂಗದ ೧೦೧ ಜಾತಿಗಳಲ್ಲಿ ಸಮನಾಗಿ ಹಂಚಿಕೆಯಾಗಿಲ್ಲ. ಆತಂಕ ಹಾಗೂ ಅಸಹನೆಯಾಗಿ ೩೦ ದಶಕಗಳಿಂದ ರಾಜ್ಯಾದ್ಯಂತ ನಿರಂತರವಾಗಿ ಹೋರಾಟಗಳು ನಡೆಯುತ್ತಿದೆ. ಹೋರಾಟದಲ್ಲಿ ಹಲವಾರು ಹೋರಾಟಗಾರರು ಜೀವ, ಜೀವನ ಹಾಗೂ ಬದುಕನ್ನೇ ಕಳೆದುಕೊಂಡಿದ್ದಾರೆ. ಪರಿಶಿಷ್ಟರ ಮೀಸಲಾತಿ ವರ್ಗೀಕರಣ ಮಾಡಲು ಕರ್ನಾಟಕ, ಆಂಧ್ರ, ಪಂಜಾಬ್ ಸೇರಿದಂತೆ ಹಲವು ರಾಜ್ಯಗಳಲ್ಲಿ ನಡೆದ ಹೋರಾಟಗಳ ಹಿನ್ನೆಲೆಯಲ್ಲಿ ಹತ್ತಾರು ರಾಜ್ಯ ಸರ್ಕಾರಗಳು ರಚಿಸಿದ ಹಲವಾರು ಆಯೋಗಗಳು ನೀಡಿದ ವರದಿಗಳನ್ನು ಪರಿಶೀಲಿಸಿದ ಸುಪ್ರೀಂ ಕೋರ್ಟಿನ ೭ ನ್ಯಾಯಾಧೀಶರ ಸಂವಿಧಾನ ಪೀಠ ಐತಿಹಾಸಿಕ ತೀರ್ಪು ನೀಡಿ ಈ ವಿವಾದಕ್ಕೆ ತೆರೆ ಎಳೆದಿದೆ. ಸುಪ್ರೀಂಕೋರ್ಟ್ ಪರಿಶಿಷ್ಟರ ಮೀಸಲಾತಿ ವರ್ಗೀಕರಣ ರಾಜ್ಯಕ್ಕೆ ಸಂವಿಧಾನದತ್ತ ಅಧಿಕಾರವಿದೆ ಎಂದು ತೀರ್ಪಿನಲ್ಲಿ ತಿಳಿಸಿದೆ. ಅಲ್ಲದೆ ಈ ಹಿಂದೆ ಬಸವರಾಜ ಬೊಮ್ಮಾಯಿರವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ತೀರ್ಮಾನಿಸಿದಂತೆ ಪರಿಶಿಷ್ಟರ ಮುಖ್ಯಮಂತ್ರಿಗಳಾಗಿದ್ದ ಮಾನ್ಯ ಮಾಡಿದೆ ಎಂದು ಹೇಳಿದರು. ಇತ್ತೀಚೆಗೆ ಸರ್ಕಾರವು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರ ನೇತೃತ್ವದಲ್ಲಿ ಸಹ ಸಚಿವ ಸಂಪುಟದ ಸಭೆಯ ತೀರ್ಮಾನದಂತೆ ೨೦೨೪ ಜನವರಿ ೧೭ರಂದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿಯ ವರ್ಗೀಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಇದೀಗ ಸುಪ್ರೀಂಕೋರ್ಟಿನ ೭ ನ್ಯಾಯಾಧೀಶರ ಪೀಠವು ಪರಿಶಿಷ್ಟರ ಮೀಸಲಾತಿ ವರ್ಗೀಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಸಂವಿಧಾನದತ್ತ ಅಧಿಕಾರವಿದೆ ಎಂದು ತೀರ್ಪು ನೀಡಿದೆ. ಆದರೆ ತೀರ್ಪು ಬಂದು ೯ ದಿನ ಕಳೆದರು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಸರ್ಕಾರ ನಿರ್ಲಕ್ಷ್ಯ ತಾಳಿ ಅನುಷ್ಠಾನಗೊಳಿಸಲು ಮೀನಾಮೇಷ ಮಾಡುತ್ತಿದೆ ಎಂದು ದೂರಿದರು.ಈ ನಿಟ್ಟಿನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸೆ.9ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಛೇರಿಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ರವಾನಿಸಲಾಗುವುದು. ಬೆಂಗಳೂರಿನಲ್ಲಿ ಸಹ ಇದೇ ದಿನ ಫ್ರೀಡಂಪಾರ್ಕ್‌ನಿಂದ ಮುಖ್ಯಮಂತ್ರಿಗಳ ನಿವಾಸಕ್ಕೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿ ಮನವಿ ಸಲ್ಲಿಸಲಾಗುವುದು. ಕೂಡಲೇ ಮುಖ್ಯಮಂತಿಗಳು ಸಚಿವ ಸಂಪುಟ ಸಭೆ ನಡೆಸಿ ನ್ಯಾಯಮೂರ್ತಿ ಎ.ಜೆ. ಸದಾಶಿವ ರವರ ಆಯೋಗದ ವರದಿಯಂತೆ ಪರಿಶಿಷ್ಟರ ಮೀಸಲಾತಿ ವರ್ಗೀಕರಣ ಅನುಷ್ಠಾನ ಮಾಡಲು ಆಗ್ರಹಿಸಿದೆ. ವಿಳಂಬ ಮಾಡಿದಲ್ಲಿ ಮುಂಬರುವ ವಿಧಾನಸಭಾ ಉಪ ಚುನಾವಣೆಯಲ್ಲಿ ಬಹುಜನರು ಚುನಾವಣೆಯನ್ನೇ ಬಹಿಷ್ಕರಿಸಲಾಗುವುದಾಗಿ ಎಚ್ಚರಿಕೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಧರ್ಮ ನಾಕಲಗೂಡು, ಕರವೇ ಜಿಲ್ಲಾ ಉಪಾಧ್ಯಕ್ಷ ದೇವರಾಜು, ಆಟೋ ಚಾಲಕರ ಜಿಲ್ಲಾಧ್ಯಕ್ಷ ಮಂಜುನಾಥ್, ನಿರ್ದೇಶಕ ಬಯಲುಹೊನ್ನಯ್ಯ ಇತರರು ಉಪಸ್ಥಿತರಿದ್ದರು.