ಶಿಗ್ಗಾಂವಿ: ೧೦ ದಿನಗಳಿಂದ ವಿಶ್ವವಿದ್ಯಾಲಯದ ಆವರಣದಲ್ಲಿ ಹಗಲು-ರಾತ್ರಿ ಧರಣಿ ನಡೆಸುತ್ತಿದ್ದರೂ, ಪ್ರತಿಭಟನಾ ಸ್ಥಳಕ್ಕೆ ವಿಶ್ವವಿದ್ಯಾಲಯದ ಕುಲಸಚಿವರು ಭೇಟಿ ನೀಡಿ ಸಮಸ್ಯೆ ಆಲಿಸುವ ಪ್ರಯತ್ನ ಮಾಡಿಲ್ಲ ಎಂದು ಪ್ರತಿಭಟನಾಕಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಾಲೂಕಿನ ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರು ಹಾಗೂ ಹೊರಗುತ್ತಿಗೆ ಸಿಬ್ಬಂದಿಗಳು ಬಾಕಿ ವೇತನ ಪಾವತಿ, ನೇಮಕಾತಿ ಆದೇಶ ಪತ್ರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹದಲ್ಲಿ ಸೋಮವಾರ (೧೦ನೇ ದಿನ) ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನಾಕಾರರ ಆರೋಪದ ಪ್ರಕಾರ, ವಿಶ್ವವಿದ್ಯಾಲಯದ ಆಡಳಿತ ವ್ಯವಸ್ಥೆಯೇ ಕಳೆದ ೧೦ ದಿನಗಳಿಂದ ಸ್ಥಗಿತಗೊಂಡಿದ್ದು, ಆಡಳಿತ ಭವನದ ಕಾರ್ಯಚಟುವಟಿಕೆಗಳು ಸ್ಥಗಿತಗೊಂಡಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಷ್ಟಾದರೂ ರಾಜ್ಯಪಾಲರ ಕಚೇರಿಯಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಸರ್ಕಾರವೂ ಈ ಗಂಭೀರ ಬೆಳವಣಿಗೆಯ ಬಗ್ಗೆ ಮೌನ ವಹಿಸಿರುವುದು ಬೇಸರ ತಂದಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಸಿಬ್ಬಂದಿಗಳ ಅಹವಾಲು ಆಲಿಸಬೇಕಾಗಿದ್ದರೂ, ಕಳೆದ ೧೦ ದಿನಗಳಲ್ಲಿ ಒಂದೇ ದಿನವೂ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.ಹೋರಾಟಕ್ಕೂ ಯಾವುದೇ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರಲ್ಲಿ ಆಕ್ರೋಶ ಹೆಚ್ಚಾಗಿದ್ದು, ವಿಶ್ವವಿದ್ಯಾಲಯಕ್ಕೆ ಶೀಘ್ರದಲ್ಲೇ ಅಧಿಕಾರ ವಹಿಸಿಕೊಳ್ಳಲಿರುವ ಹೊಸ ಕುಲಪತಿಯ ಆಗಮನದತ್ತ ಎಲ್ಲರ ಗಮನ ನೆಟ್ಟಿದೆ. ಹೊಸ ಕುಲಪತಿ ಅಧಿಕಾರ ಸ್ವೀಕರಿಸಿದ ಬಳಿಕವಾದರೂ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆಯಲಿ ಎಂಬ ನಿರೀಕ್ಷೆಯಲ್ಲಿ ಹೋರಾಟ ಮುಂದುವರಿಸುತ್ತಿದ್ದೇವೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
ಬಾಕಿ ವೇತನ ಬಿಡುಗಡೆ ಹಾಗೂ ಇತರೆ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವವರೆಗೆ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಹಿಂಪಡೆಯುವುದಿಲ್ಲ ಎಂದು ಪ್ರತಿಭಟನಾಕಾರರು ಸ್ಪಷ್ಪಪಡಿಸಿದ್ದಾರೆ.