ಸಾರಾಂಶ
ವಿಜಯಪುರ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ವತಿಯಿಂದ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಪಟ್ಟಣದ ಶಿವಗಣೇಶ ಸರ್ಕಲ್‌ನಿಂದ ಬಸ್ ನಿಲ್ದಾಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿರುವ ಉಗ್ರರ ದಾಳಿಯಲ್ಲಿ ಮಡಿದಿರುವ ಜನರ ಆತ್ಮಗಳಿಗೆ ಶಾಂತಿಯನ್ನು ಕೋರಿ, ಶ್ರದ್ಧಾಂಜಲಿ ಸಲ್ಲಿಸಿದ ನಂತರ, ಶಿವಗಣೇಶ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ, ಟೈರುಗಳಿಗೆ ಬೆಂಕಿ ಹಚ್ಚಿ ಘೋಷಣೆಗಳು ಉಗ್ರರ ವಿರುದ್ಧ ಹಾಗೂ ಉಗ್ರರಿಗೆ ಬೆಂಬಲ ಹಾಗೂ ಆಶ್ರಯ ನೀಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕಾಶ್ಮೀರದಲ್ಲಿ ಉಗ್ರರ ಚಟುವಟಿಕೆಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಬೇಕು ಎಂದು ಒತ್ರಾಯಿಸಿದರು. ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆಯಲ್ಲಿ ಘೋಷಣೆಗಳನ್ನು ಕೂಗಿದರು. ಪುರಸಭೆಯ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಕೆ ಮಾಡಿದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಬೆಂಗಳೂರು ಗ್ರಾಮಾಂತರ ವಿಭಾಗ ಸಂಚಾಲಕ ಎಂ.ಮನೋಜ್ ಅವರು ಮಾತನಾಡಿ, ದೇಶದಲ್ಲಿ ಅಶಾಂತಿಯನ್ನು ಉಂಟು ಮಾಡಲು ಯತ್ನಿಸುತ್ತಿರುವ ಉಗ್ರಗಾಮಿಗಳನ್ನು ಬುಡಸಮೇತ ಕಿತ್ತುಹಾಕಬೇಕು. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಹೋಗುವಂತಹ ಸ್ಥಳಗಳಲ್ಲಿ ಸೂಕ್ತ ಭದ್ರತೆಯನ್ನು ಒದಗಿಸಬೇಕು. ಉಗ್ರರಿಗೆ ಸಹಾಯ ಮಾಡುವಂತಹ ಯಾರೇ ಆಗಿದ್ದರೂ ಅಂತಹವರ ಮೇಲೆ ಕಠಿಣ ಕ್ರಮ ಜರುಗಿಸಬೇಕು. ಉಗ್ರಗಾಮಿಗಳ ಗುಂಡಿಗೆ ಬಲಿಯಾಗಿರುವವರ ಕುಟುಂಬಗಳಿಗೆ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ವಿಭಾಗ ಸಂಘಟನಾ ಕಾರ್ಯದರ್ಶಿ ಶಿವಾನಂದ ಕಾಂಬಳೆ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ರಾಜ್ಯ ಕಾರ್ಯಕಾರಣಿ ಸದಸ್ಯ ರಾಕೇಶ್, ಸೇರಿದಂತೆ ಪಟ್ಟಣದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.