ಮಕ್ಕಳ ಪ್ರತಿಭೆಗೆ ಸೂಕ್ತ ವೇದಿಕೆ ಕಲ್ಪಿಸಿ: ಶಾಸಕ ಬೇಳೂರು

| Published : Sep 21 2025, 02:00 AM IST

ಸಾರಾಂಶ

ಓದಿನ ಮೂಲಕ ಬೌದ್ಧಿಕ ಶಕ್ತಿ ಅನಾವರಣಗೊಂಡರೆ ಕ್ರೀಡೆ, ಸಾಂಸ್ಕೃತಿಕ, ಸಾಹಿತ್ಯ ಚಟುವಟಿಕೆ ಮೂಲಕ ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆ ಬೆಳಕಿಗೆ ಬರಲು ಸಾಧ್ಯ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯಪಟ್ಟರು.

ಸಾಗರ: ಓದಿನ ಮೂಲಕ ಬೌದ್ಧಿಕ ಶಕ್ತಿ ಅನಾವರಣಗೊಂಡರೆ ಕ್ರೀಡೆ, ಸಾಂಸ್ಕೃತಿಕ, ಸಾಹಿತ್ಯ ಚಟುವಟಿಕೆ ಮೂಲಕ ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆ ಬೆಳಕಿಗೆ ಬರಲು ಸಾಧ್ಯ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯಪಟ್ಟರು.

ಪಟ್ಟಣದ ನೆಹರೂ ಮೈದಾನದಲ್ಲಿ ಶನಿವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಗೆ ಸೂಕ್ತ ವೇದಿಕೆ ಕಲ್ಪಿಸಬೇಕು ಎಂದರು.

ನೆಹರೂ ಮೈದಾನದಲ್ಲಿ ವೇದಿಕೆ ನಿರ್ಮಾಣಕ್ಕಾಗಿ ೪೦ ಲಕ್ಷ ರು. ಮೀಸಲಿಟ್ಟಿದ್ದು, ಟೆಂಡರ್ ಪಡೆದ ಗುತ್ತಿಗೆದಾರ ಬರದೆ ಇರುವುದರಿಂದ ಕಾಮಗಾರಿ ವಿಳಂಬವಾಗಿದೆ. ಇನ್ನು ಒಂದು ವಾರದಲ್ಲಿ ನೆಹರೂ ಮೈದಾನದಲ್ಲಿ ವೇದಿಕೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ. ಮಕ್ಕಳಿಗೆ ಕ್ರೀಡಾಚಟುವಟಿಕೆಗೆ ಬೇಕಾದ ಮೂಲಭೂತ ಸೌಲಭ್ಯ ಒದಗಿಸಲಾಗುತ್ತದೆ ಎಂದು ಹೇಳಿದರು.

ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್ ಮಾತನಾಡಿ, ಓದಿನ ಜೊತೆ ಕ್ರೀಡೆಯೂ ಮುಖ್ಯ. ದೈಹಿಕವಾಗಿ ಸದೃಢರಾಗಬೇಕಾದರೆ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು. ತಾಲೂಕು ಮಟ್ಟದ ಕ್ರೀಡಾಕೂಟಗಳ ಮೂಲಕವೇ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಲು ಅವಕಾಶ ಇರುತ್ತದೆ. ಮಕ್ಕಳು ಅಂತಹ ಅವಕಾಶಕ್ಕಾಗಿ ಉತ್ತಮವಾಗಿ ಸ್ಪರ್ಧೆ ಮಾಡಿ ಎಂದು ಸಲಹೆ ನೀಡಿದರು.

ನಗರಸಭೆ ಉಪಾಧ್ಯಕ್ಷೆ ಸವಿತಾ ವಾಸು, ಸದಸ್ಯರಾದ ಗಣಪತಿ ಮಂಡಗಳಲೆ, ರವಿಕುಮಾರ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಭೂಮೇಶ್, ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್ ಟಿ.ಪಿ., ಲಕ್ಷ್ಮಣ್ ಆರ್. ನಾಯ್ಕ್, ಎಸ್.ಆರ್.ಮಂಜುಪ್ಪ, ಓಂಕಾರಪ್ಪ, ಸಂತೋಷಕುಮಾರ್ ಎನ್., ಮಹಾಬಲೇಶ್ವರ ಜಿ. ಶಿಕ್ಷಣ ಇಲಾಖೆಯ ಅಧಿಕಾರಿಗಳು, ಪ್ರಮುಖರು ಹಾಜರಿದ್ದರು.