ಜಿಲ್ಲೆಯಲ್ಲಿ ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ಕುರಿತಂತೆ ಹೆಚ್ಚಿನ ಸಂಖ್ಯೆಯಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಡಾ. ನಾಗಲಕ್ಷ್ಮಿ ಚೌಧರಿ ಅವರು ನಿರ್ದೇಶನ ನೀಡಿದರು.

ಕಾರವಾರ: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಗೆ ಮತ್ತು ಪೋಕ್ಸೋ ಪ್ರಕರಣದ ಸಂತ್ರಸ್ತರಿಗೆ ನಿಯಮಾನುಸಾರ ವಿವಿಧ ಇಲಾಖೆಗಳ ಮೂಲಕ ದೊರೆಯಬಹುದಾದ ಪರಿಹಾರದ ಮೊತ್ತವನ್ನು ಸಕಾಲದಲ್ಲಿ ತಲುಪಿಸುವಂತೆ ಸಂಬಂಧಪಟ್ಟ ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಸೂಚನೆ ನೀಡಿದರು.

ಮಂಗಳವಾರ ಜಿಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಮಹಿಳಾ ಸ್ಪಂದನಾ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರ ಮೇಲೆ 33 ಲೈಂಗಿಕ ದೌರ್ಜನ್ಯ ಪ್ರಕರಣಗಳು ಮತ್ತು ಮಕ್ಕಳ ಮೇಲಿನ 161 ದೌರ್ಜನ್ಯ ಪ್ರಕರಣಗಳು ವರದಿಯಾಗಿದ್ದು, ಈ ಎಲ್ಲ ಸಂತ್ರಸ್ತರಿಗೆ ನೀಡಿರುವ ಪರಿಹಾರದ ಕುರಿತ ಮಾಹಿತಿಯು ಅಧಿಕಾರಿಗಳ ಬಳಿ ಇಲ್ಲದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಜಿಲ್ಲೆಯ ಎಲ್ಲ ದೌರ್ಜನ್ಯ ಪ್ರಕರಣಗಳಲ್ಲಿ ನೀಡಿರುವ ಪರಿಹಾರದ ಮೊತ್ತದ ಸಮಗ್ರ ವಿವರಗಳನ್ನು ಸಲ್ಲಿಸುವಂತೆ ಸೂಚಿಸಿ, ಸಂತ್ರಸ್ತರಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ನೀಡಬೇಕಾಗಿರುವ ಪರಿಹಾರದ ಮೊತ್ತವನ್ನು ಶೀಘ್ರದಲ್ಲಿ ಪಾವತಿಸುವ ಜತೆಗೆ ಅವರಿಗೆ ಉಚಿತ ಕಾನೂನು ನೆರವು ಸೇರಿದಂತೆ ಸರ್ಕಾರದ ಎಲ್ಲ ಸೌಲಭ್ಯಗಳನ್ನು ದೊರೆಯುವಂತೆ ನೋಡಿಕೊಳ್ಳಬೇಕು. ಈ ಕಾರ್ಯದಲ್ಲಿ ಯಾವುದೇ ರೀತಿ ನಿರ್ಲಕ್ಷ್ಯತನ ಮಾಡುವುದನ್ನು ಸಹಿಸುವುದಿಲ್ಲ ಎಂದರು. ಬಹುತೇಕ ದೌರ್ಜನ್ಯ ಪ್ರಕರಣಗಳು ಬಡವರ ಮನೆಗಳಿಗೆ ಸಂಬಂಧಪಟ್ಟ ಮಹಿಳೆ ಮತ್ತು ಮಕ್ಕಳ ಮೇಲೆಯೇ ನಡೆಯುತ್ತಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿದ ಅವರು, ಜಿಲ್ಲೆಯಲ್ಲಿ ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ಕುರಿತಂತೆ ಹೆಚ್ಚಿನ ಸಂಖ್ಯೆಯಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ನಿರ್ದೇಶನ ನೀಡಿದರು. ಕ್ರೀಡಾ ಹಾಸ್ಟೆಲ್‌ನ ವಿದ್ಯಾರ್ಥಿನಿಯರಿಗೆ ಟಾಯ್ಲೆಟ್ ಕಿಟ್ ಮತ್ತು ಸ್ಯಾನಿಟರಿ ಪ್ಯಾಡ್‌ಗಳನ್ನು ನೀಡಲು ಕ್ರಮ ಕೈಗೊಳ್ಳಬೇಕು. ಪ್ರಮುಖವಾಗಿ ನಿಲಯದ ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ನಿಂದ ಕ್ರೀಡಾಂಗಣಕ್ಕೆ ಉಚಿತ ವಾಹನದ ವ್ಯವಸ್ಥೆಯನ್ನು ಮಾಡುವಂತೆ ಕ್ರೀಡಾ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸುಮಾರು 200ಕ್ಕೂ ಅಧಿಕ ಮಹಿಳೆಯರು ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದು, ಈ ಅಹವಾಲುಗಳನ್ನು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪರಿಶೀಲಿಸಿ, ಕೈಗೊಂಡ ಕ್ರಮಗಳ ಬಗ್ಗೆ ಆಯೋಗಕ್ಕೆ ವರದಿ ಸಲ್ಲಿಸುವಂತೆ ಡಾ. ನಾಗಲಕ್ಷ್ಮಿ ಚೌಧರಿ ಸೂಚಿಸಿದರು. ಜಿಲ್ಲಾಧಿಕಾರಿ ಹರ್ಷಲ್ ಬೊಯರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಡಿವೈಎಸ್ಪಿ ಲೋಕಾಪುರ, ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ರೂಪಾ ಆರ್. ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.