-ಮಾದಿಗ ದಂಡೋರ–ಮಾದಿಗ ಮೀಸಲಾತಿ ಹೋರಾಟ ಸಮಿತಿ ಆಗ್ರಹ
----ಕನ್ನಡಪ್ರಭ ವಾರ್ತೆ ಸುರಪುರ
ತಾಲೂಕಿನ ಹೆಮ್ಮಡಗಿ ಗ್ರಾಮದ ಎಸ್‌ಸಿ ವಾರ್ಡ್‌ನಲ್ಲಿ ಕಳೆದ ಎರಡು ತಿಂಗಳಿನಿಂದ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಕೂಡಲೇ ಪರಿಹರಿಸುವಂತೆ ಆಗ್ರಹಿಸಿ ಮಾದಿಗ ದಂಡೋರ–ಮಾದಿಗ ಮೀಸಲಾತಿ ಹೋರಾಟ ಸಮಿತಿಯ ತಾಲೂಕು ಘಟಕದ ಮುಖಂಡರು ಸೂಗೂರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು ಹೆಮ್ಮಡಗಿ ಗ್ರಾಮದ ದಲಿತ ಕೇರಿಯಲ್ಲಿರುವ ಕೊಳವೆ ಬಾವಿಗಳು ಕೆಟ್ಟುಹೋಗಿರುವ ಪರಿಣಾಮ ಸುಮಾರು 100ಕ್ಕೂ ಹೆಚ್ಚು ಕುಟುಂಬಗಳು ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸಮಸ್ಯೆ ಕಳೆದ ಎರಡು ತಿಂಗಳಿನಿಂದ ಮುಂದುವರಿದಿದ್ದರೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ನೀರಿನ ಅಭಾವದಿಂದ ಗ್ರಾಮಸ್ಥರು ಪ್ರತಿನಿತ್ಯ ದೂರದ ಪ್ರದೇಶಗಳಿಂದ ನೀರು ತಂದು ಜೀವನ ಸಾಗಿಸುವ ಅನಿವಾರ್ಯ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಹೀಗಾಗಿ ಕೆಟ್ಟುಹೋಗಿರುವ ಕೊಳವೆ ಬಾವಿಗಳನ್ನು ದುರಸ್ತಿಪಡಿಸುವುದರ ಜೊತೆಗೆ, ಸಮಸ್ಯೆ ಬಗೆಹರಿಯುವವರೆಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಬೇಕು ಎಂದು ಸಮಿತಿ ಒತ್ತಾಯಿಸಿದೆ.
ಸಮಸ್ಯೆಯನ್ನು ನಿರ್ಲಕ್ಷಿಸಿದಲ್ಲಿ ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಕಚೇರಿ ಎದುರು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮನವಿ ಸ್ವೀಕರಿಸಿದ ಪಿಡಿಒ, ಶೀಘ್ರದಲ್ಲೇ ಸ್ಥಳ ಪರಿಶೀಲನೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.ಸಂಘಟನೆಯ ತಾಲೂಕು ಅಧ್ಯಕ್ಷ ಬಸವರಾಜ ಹಾದಿಮನಿ, ಸಂಘಟನಾ ಕಾರ್ಯದರ್ಶಿ ಹಣಮಂತ ಅಡ್ಡೊಡಗಿ, ಸಹ ಕಾರ್ಯದರ್ಶಿ ಯಲ್ಲಪ್ಪ ಹೆಮ್ಮಡಗಿ, ಮುಖಂಡರಾದ ಶಿವು, ಭೀಮಣ್ಣ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
----ಫೋಟೋ:
ಸುರಪುರ ತಾಲೂಕಿನ ಹೆಮ್ಮಡಗಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ಆಗ್ರಹಿಸಿ ಸೂಗೂರ ಪಿಡಿಒ ಅವರಿಗೆ ಮಾದಿಗ ದಂಡೋರ–ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಮುಖಂಡರು ಮನವಿ ಸಲ್ಲಿಸಿದರು.