ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಿ: ಕಡಾಡಿ

| Published : Sep 28 2025, 02:01 AM IST

ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಿ: ಕಡಾಡಿ
Share this Article
  • FB
  • TW
  • Linkdin
  • Email

ಸಾರಾಂಶ

ಮಳೆಯಿಂದಾಗಿ ರಾಜ್ಯಾದ್ಯಂತ ಸಾಕಷ್ಟು ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ. ಮುಖ್ಯಮಂತ್ರಿ ಸೇರಿದಂತೆ ರಾಜ್ಯದ ಯಾವೊಬ್ಬ ಸಚಿವರು ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿಲ್ಲ

ಕನ್ನಡಪ್ರಭ ವಾರ್ತೆ ಬೆಳಗಾವಿ

ರಾಜ್ಯದಲ್ಲಿ ಮಳೆಯಿಂದ ಹಾನಿಗೊಳಗಾದ ಬೆಳೆಗಳಿಗೆ ತಕ್ಷಣ ರಾಜ್ಯ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಹಾಗೂ ಹೆಸರು, ಉದ್ದು, ಸೋಯಾಬಿನ್ ಸೇರಿದಂತೆ ನಾನಾ ಬೆಳೆಗಳ ಖರೀದಿ ಕೇಂದ್ರ ಶೀಘ್ರವಾಗಿ ಪ್ರಾರಂಭಿಸಬೇಕು ಎಂದು ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಒತ್ತಾಯಿಸಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆಯಿಂದಾಗಿ ರಾಜ್ಯಾದ್ಯಂತ ಸಾಕಷ್ಟು ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ. ಮುಖ್ಯಮಂತ್ರಿ ಸೇರಿದಂತೆ ರಾಜ್ಯದ ಯಾವೊಬ್ಬ ಸಚಿವರು ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿಲ್ಲ. ಆದರೆ, ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯಲ್ಲಿ ತೊಡಗಿಕೊಂಡಿದ್ದಾರೆ. ಇನ್ನೊಂದೆಡೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದರು ಸಹ ವಿವಿಧ ಬೆಳೆಗಳಿಗೆ ಖರೀದಿ ಕೇಂದ್ರ ತೆರೆಯದೆ ರೈತರಿಗೆ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಅದರಂತೆ ನಮ್ಮ ಜಿಲ್ಲೆಯಲ್ಲಿ ಸುಮಾರು 1 ಲಕ್ಷ ಹೆಕ್ಟೇ‌ರ್ ಬೆಳೆ ಹಾಳಾಗಿದ್ದರು ಕೂಡ ನಮ್ಮ ಸಚಿವರಿಬ್ಬರು ರೈತರ ಬಳಿ ಹೋಗಿ ಸಂಕಷ್ಟ ಆಲಿಸದೆ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘ ಹಾಗೂ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆಯಲ್ಲಿ ಕಾರ್ಯನಿರ್ತರಾಗಿದ್ದಾರೆ ಎಂದು ಹರಿಹಾಯ್ದರು.

ಶಾಸಕ ಅಭಯ ಪಾಟೀಲ ಮಾತನಾಡಿ, ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಕಾಂಗ್ರೆಸ್ ಸರಕಾರ ಇದುವರೆಗೆ ಯಾವುದೇ ಪರಿಹಾರ ನೀಡಿಲ್ಲ. ಅಲ್ಲದೆ, ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮಂಜೂರಾದ ಮನೆಗಳಿಗೆ ಕೂಡ ಹಣ ಬರುತ್ತಿಲ್ಲ. ಒಟ್ಟಾರೆಯಾಗಿ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರನ್ನು ಕಡೆಗಣಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕರಾದ ಅನಿಲ ಬೆನಕೆ, ಸಂಜಯ ಪಾಟೀಲ, ಗೀತಾ ಸುತಾರ, ಹನುಮಂತ ಕೊಂಗಾಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು.