ಅಪಘಾತ, ಶಸ್ತ್ರಚಿಕಿತ್ಸೆ, ಹೆರಿಗೆ ಹಾಗೂ ಇನ್ನಿತರ ತುರ್ತು ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಹೆಚ್ಚಿರುತ್ತದೆ. ಹೀಗಾಗಿ ಕೃತಕವಾಗಿ ರಕ್ತವನ್ನು ತಯಾರಿಸಲು ಸಾಧ್ಯವಿಲ್ಲ. ಆದ್ದರಿಂದ ಸ್ವಯಂಪ್ರೇರಿತವಾಗಿ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡುವುದು ಅತ್ಯಂತ ಮುಖ್ಯ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಗಳು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ, ಕಷ್ಟದಲ್ಲಿರುವ ರೋಗಿಗಳಿಗೆ ನೆರವಾಗಬೇಕು ಎಂದು ಅರಕೆರೆ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಮಂಜುನಾಥ್ ಹೇಳಿದರು.

ತಾಲೂಕಿನ ಅರಕೆರೆ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಮಂಡ್ಯ ಶಾಖೆ, ತಾಲೂಕು ಆರೋಗ್ಯ ಇಲಾಖೆ, ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಇಲಾಖೆ, ಅರಕೆರೆ ಗ್ರಾಪಂ ಸಹಕಾರದೊಂದಿಗೆ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.

ಅಪಘಾತ, ಶಸ್ತ್ರಚಿಕಿತ್ಸೆ, ಹೆರಿಗೆ ಹಾಗೂ ಇನ್ನಿತರ ತುರ್ತು ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಹೆಚ್ಚಿರುತ್ತದೆ. ಹೀಗಾಗಿ ಕೃತಕವಾಗಿ ರಕ್ತವನ್ನು ತಯಾರಿಸಲು ಸಾಧ್ಯವಿಲ್ಲ. ಆದ್ದರಿಂದ ಸ್ವಯಂಪ್ರೇರಿತವಾಗಿ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡುವುದು ಅತ್ಯಂತ ಮುಖ್ಯ ಎಂದರು.

ಸಾರ್ವಜನಿಕ ಆಸ್ಪತ್ರೆ ಪ್ರಯೋಗಾಲಯ ತಂತ್ರಜ್ಞೆ ಭಾನುಮತಿ ಮಾತನಾಡಿ, ನಿಮ್ಮ ಒಂದು ಹನಿ ರಕ್ತ, ಮತ್ತೊಬ್ಬರ ಬದುಕಿನಲ್ಲಿ ಹೊಸ ಬೆಳಕು ಮೂಡಿಸಬಹುದು. ಆರೋಗ್ಯವಂತ ವಯಸ್ಕರು ವೈದ್ಯಕೀಯ ತಪಾಸಣೆಯ ನಂತರ ರಕ್ತದಾನ ಮಾಡಬಹುದು ಎಂದರು.

ಸರ್ಕಾರಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಹಾಗೂ ಆಡಳಿತ ಸಿಬ್ಬಂದಿ ಸ್ವಯಂ ಪ್ರೇರಣೆಯಿಂದ ರಕ್ತದಾನ ನೀಡಿದರು. ರಕ್ತದಾನ ಶಿಬಿರದಲ್ಲಿ ದಾನಿಗಳಿಂದ 84 ಯೂನಿಟ್ ರಕ್ತ ಸಂಗ್ರಹಿಸಲಾಯಿತು.

ಮಂಡ್ಯದ ಮಿಮ್ಸ್ ನ ವೈದ್ಯರಾದ ಡಾ.ಮಹಿಮಾ ಹಾಗೂ ಡಾ.ಕೋಮಲ್ ಕುಮಾರ್ ಅವರ ನಿರ್ದೇಶನದಲ್ಲಿ ನರ್ಸಿಂಗ್ ಅಧಿಕಾರಿ ಸೋಮಣ್ಣ ನೇತೃತ್ವದಲ್ಲಿ ಸಿಬ್ಬಂದಿಗಳು ರಕ್ತವನ್ನು ದಾನಿಗಳಿಂದ ಸುರಕ್ಷಿತವಾಗಿ ಪಡೆದುಕೊಂಡು ಸಂರಕ್ಷಿಸಿದರು.

ಈ ವೇಳೆ ಗ್ರಾಪಂ ಮಾಜಿ ಅಧ್ಯಕ್ಷ ಮಂಜುನಾಥ್, ರೆಡ್ ಕ್ರಾಸ್ ಕೋಆರ್ಡಿನೇಟರ್ ಕೆ.ಎಲ್. ವಿನೂತ್ ಕುಮಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎ.ಎಂ.ಶ್ವೇತಲತಾ, ಗ್ರಾಪಂ ಆಡಳಿತಾಧಿಕಾರಿ ಡಾ.ಪ್ರವೀಣ್, ಪಿಡಿಒ ರವಿಕುಮಾರ್,ಹಿರಿಯ ಆರೋಗ್ಯ ನೀರಿಕ್ಷಣಾಧಿಕಾರಿ ನಟರಾಜ್, ಆರೋಗ್ಯ ನೀರಿಕ್ಷಣಾಧಿಕಾರಿ ಫಣೀಂದ್ರ, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ಅನಿತಾ, ಆಶಾ ಕಾರ್ಯಕರ್ತೆ ಹೇಮಾವತಿ ರಾಣೆ, ಸಿಬ್ಬಂದಿ ವೆಂಕಟೇಶ್, ಪುನೀತ್,ತಿಮ್ಮೇಗೌಡ ಇತರರು ಉಪಸ್ಥಿತರಿದ್ದರು.