ಕೈಗಾರಿಕಾ ಪ್ರದೇಶಗಳಿಗೆ ಮೂಲ ಸೌಲಭ್ಯ ಒದಗಿಸಿ: ಲಕ್ಷ್ಮೀಪ್ರಿಯಾ

| Published : Feb 13 2025, 12:47 AM IST

ಕೈಗಾರಿಕಾ ಪ್ರದೇಶಗಳಿಗೆ ಮೂಲ ಸೌಲಭ್ಯ ಒದಗಿಸಿ: ಲಕ್ಷ್ಮೀಪ್ರಿಯಾ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯ ಎಲ್ಲ ಕೈಗಾರಿಕಾ ವಸಾಹತುಗಳಲ್ಲಿ ನೀರು, ವಿದ್ಯುತ್, ರಸ್ತೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಕ್ರಮಗಳನ್ನು ಕೈಗೊಳ್ಳುವಂತೆ ಏಕಗವಾಕ್ಷಿ ಒಪ್ಪಿಗೆ ಸಮಿತಿ ಸಭೆಯಲ್ಲಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.

ಕಾರವಾರ: ಜಿಲ್ಲೆಯಲ್ಲಿರುವ ಕೈಗಾರಿಕಾ ಪ್ರದೇಶಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಕೈಗಾರಿಕೆಗಳ ಬೆಳವಣಿಗೆಗೆ ಎಲ್ಲ ರೀತಿಯ ನೆರವು ಒದಗಿಸುವಂತೆ ಕೈಗಾರಿಕೆ ಇಲಾಖೆ ಮತ್ತು ನಗರಾಭಿವೃದ್ಧಿ ಕೋಶದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಏಕಗವಾಕ್ಷಿ ಒಪ್ಪಿಗೆ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ದಾಂಡೇಲಿ ಕೈಗಾರಿಕಾ ವಸಾಹತು ಪ್ರದೇಶದಲ್ಲಿನ ಕೈಗಾರಿಕೆಗಳಿಂದ ಸ್ವಚ್ಛತಾ ಶುಲ್ಕ ವಸೂಲಿ ಮಾಡಿದರೂ ನಗರ ಸ್ಥಳೀಯ ಸಂಸ್ಥೆಯಿಂದ ತ್ಯಾಜ್ಯ ವಿಲೇವಾರಿ, ಚರಂಡಿ ಸ್ವಚ್ಛತೆ ಮತ್ತು ರಸ್ತೆ ದುರಸ್ತಿ ಮಾಡದೇ ಇರುವ ಬಗ್ಗೆ ಕೈಗಾರಿಕೋದ್ಯಮಿಗಳು ಜಿಲ್ಲಾಧಿಕಾರಿ ಗಮನಕ್ಕೆ ತಂದರು. ಜಿಲ್ಲೆಯ ಎಲ್ಲ ಕೈಗಾರಿಕಾ ವಸಾಹತುಗಳಲ್ಲಿ ನೀರು, ವಿದ್ಯುತ್, ರಸ್ತೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ದಾಂಡೇಲಿ ಕೈಗಾರಿಕಾ ವಸಾಹತುವಿನಲ್ಲಿ ಹಂಚಿಕೆಯಾಗಿರುವ ನಿವೇಶನಗಳ ನೋಂದಣಿ ಕುರಿತಂತೆ ಇರುವ ಸಮಸ್ಯೆಯನ್ನು ಕೈಗಾರಿಕಾ ಇಲಾಖೆಯ ಅಧಿಕಾರಿಗಳು ಭೂ ದಾಖಲೆಗಳ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಒಂದು ವಾರದ ಒಳಗೆ ಸಭೆ ನಡೆಸಿ, ಸಮಸ್ಯೆಯನ್ನು ಬಗೆಹರಿಸಬೇಕು. ಜಿಲ್ಲೆಯ ಕೈಗಾರಿಕಾ ಪ್ರದೇಶಗಳಿಂದ ಸುತ್ತಮುತ್ತಲಿನ ಜನ ವಸತಿ ಪ್ರದೇಶ ಸೇರಿದಂತೆ ಯಾವುದೇ ಪ್ರದೇಶದಲ್ಲಿ ವಾಯು ಮಾಲಿನ್ಯ ಮತ್ತು ಜಲ ಮಾಲಿನ್ಯ ಆಗದಂತೆ ನಿಯಮಿತವಾಗಿ ಈ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಪರಿಸರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಜಯಂತ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸ್ಟೆಲ್ಲಾ ವರ್ಗಿಸ್, ಜಿಲ್ಲಾ ಪರಿಸರ ಅಧಿಕಾರಿ ಸಂತೋಷ್ ಹಾಗೂ ಜಿಲ್ಲೆಯ ವಿವಿಧ ಕೈಗಾರಿಕೋದ್ಯಮಿಗಳು ಇದ್ದರು.