ಪೌರಕಾರ್ಮಿಕರ ಗೃಹಭಾಗ್ಯ ಯೋಜನೆ ಪ್ರಯೋಜನ ಒದಗಿಸಿ: ಡಿಸಿ

| Published : May 09 2025, 12:31 AM IST

ಪೌರಕಾರ್ಮಿಕರ ಗೃಹಭಾಗ್ಯ ಯೋಜನೆ ಪ್ರಯೋಜನ ಒದಗಿಸಿ: ಡಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಗೃಹಭಾಗ್ಯ ಯೋಜನೆಯಡಿ ಈಗಾಗಲೇ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರಿಗೆ ಮನೆಗಳನ್ನು ನಿರ್ಮಿಸಲಾಗುತ್ತಿದೆ.

ಕಾರವಾರ: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ಮನೆಗಳನ್ನು ನಿರ್ಮಾಣ ಮಾಡಿಕೊಡುವ ಕಾರ್ಯವನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಜಾಗೃತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗೃಹಭಾಗ್ಯ ಯೋಜನೆಯಡಿ ಈಗಾಗಲೇ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರಿಗೆ ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಈ ಮನೆಗಳ ನಿರ್ಮಾಣ ಕಾರ್ಯವನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಿ ಹಂಚಿಕೆ ಮಾಡುವಂತೆ ಮತ್ತು ಮನೆ ನಿರ್ಮಾಣಕ್ಕೆ ಜಗದ ಕೊರತೆಯಿರುವ ಕಡೆ ಸಂಬಂಧಪಟ್ಟ ತಾಲೂಕಿನ ತಹಸೀಲ್ದಾರ್‌ಗಳನ್ನು ಸಂಪರ್ಕಿಸುವಂತೆ ಸೂಚಿಸಿದರು.

ಜಿಲ್ಲೆಯ ಯಾವುದೇ ನಗರಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮ್ಯಾನ್ಯುಯಲ್ ಸ್ಕಾವೆಂಜರ್ ಪದ್ಧತಿ ಕಂಡು ಬಾರದಂತೆ ಎಚ್ಚರಿಕೆ ವಹಿಸಬೇಕು. ಕಡ್ಡಾಯವಾಗಿ ಸಕ್ಕಿಂಗ್ ಯಂತ್ರಗಳನ್ನೇ ಬಳಕೆ ಮಾಡಬೇಕು ಎಂದ ಜಿಲ್ಲಾಧಿಕಾರಿ ಎಲ್ಲ ಪೌರಕಾರ್ಮಿಕರಿಗೆ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮತ್ತು ವರ್ಷಕ್ಕೊಮ್ಮೆ ಮಾಸ್ಟರ್ ಚೆಕಪ್‌ನ್ನು ಕಡ್ಡಾಯವಾಗಿ ಮಾಡಿಸಬೇಕು. ಅವರ ಸುರಕ್ಷತೆಗಾಗಿ ಅಗತ್ಯವಿರುವ ಎಲ್ಲಾ ಸುರಕ್ಷತಾ ಪರಿಕರಗಳನ್ನು ನೀಡುವುದರ ಜೊತೆಗೆ ಅವುಗಳನ್ನು ಬಳಸಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಗದೀಶ್, ಜಿಪಂ ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್ ವೈ.ಕೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.