ಬರೀ ಕುಡಿಯುವ ನೀರಲ್ಲ, ಶುದ್ಧ ನೀರು ಒದಗಿಸಿ: ಸಂತೋಷ ಲಾಡ್

| Published : Apr 08 2025, 12:35 AM IST

ಬರೀ ಕುಡಿಯುವ ನೀರಲ್ಲ, ಶುದ್ಧ ನೀರು ಒದಗಿಸಿ: ಸಂತೋಷ ಲಾಡ್
Share this Article
  • FB
  • TW
  • Linkdin
  • Email

ಸಾರಾಂಶ

ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು, ಅಕಾಲಿಕ ಮಳೆಯಿಂದ ಆಗುವ ಹಾನಿಯ ಬಗ್ಗೆ ಮುನ್ನೆಚ್ಚರಿಕೆ ಕೈಗೊಳ್ಳುವ ಕುರಿತು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಅಧಿಕಾರಿಗಳ ಸಭೆ ನಡೆಸಿದರು.

ಧಾರವಾಡ: ಸದ್ಯದ ಮಟ್ಟಿಗೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಂಪನ್ಮೂಲ ಸಾಕಷ್ಟಿದ್ದು, ಬೇಸಿಗೆ ಸಮಯದಲ್ಲಿ ಜನತೆಗೆ ಶುದ್ಧ ಕುಡಿಯುವ ನೀರನ್ನು ಪೂರೈಕೆ ಮಾಡುವಲ್ಲಿ ಎಚ್ಚರ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು, ಅಕಾಲಿಕ ಮಳೆಯಿಂದ ಆಗುವ ಹಾನಿಯ ಬಗ್ಗೆ ಮುನ್ನೆಚ್ಚರಿಕೆ ಕೈಗೊಳ್ಳುವ ಕುರಿತು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ಜರುಗಿಸಿದ ಅವರು, ಅಳ್ನಾವರ, ಧಾರವಾಡ, ಹುಬ್ಬಳ್ಳಿ, ಕುಂದಗೋಳ, ಕಲಘಟಗಿ ಸೇರಿದಂತೆ ವಿವಿಧ ತಾಲೂಕಿನ ಹಳ್ಳಿಗಳಲ್ಲಿ ಕುಡಿಯುವ ನೀರಿನ ಅಭಾವದ ಸಂಭವವಿದೆ. ಏ. 29ರೊಳಗಾಗಿ ಕುಡಿಯುವ ನೀರಿನ ಸಮಸ್ಯೆಗಳಿರುವ ಹಳ್ಳಿಗಳಿಗೆ ತೆರಳಿ ಸಮಸ್ಯೆ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ಆನಂತರ ಕುಡಿಯುವ ನೀರಿನ ಅಭಾವ ಬಗ್ಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಹುಬ್ಬಳ್ಳಿ ನಗರಕ್ಕೆ ನೀರಸಾಗರ ಜಲಾಶಯದಿಂದ ಕುಡಿಯುವ ನೀರು ಒದಗಿಸಲಾಗುತ್ತಿದೆ. ಕುಡಿಯುವ ನೀರು ಸರಬರಾಜು ಮಾಡುವ ಯೋಜನೆಗಳ ಅನುಷ್ಠಾನಕ್ಕೆ ಪಾಲಿಕೆ ಮುಂದಾಗಬೇಕು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯ 82 ವಾರ್ಡ್‌ಗಳಲ್ಲಿ ಸುಮಾರು 23 ವಾರ್ಡ್‌ಗಳಲ್ಲಿ ನೀರಿನ ಸಮಸ್ಯೆಯಾಗುತ್ತಿದೆ. ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗುವ ವಾರ್ಡ್‌ಗಳಿಗೆ ಸಮಿತಿ ರಚಿಸಿ, ಮಾಹಿತಿ ಸಂಗ್ರಹಿಸಬೇಕಾಗಿದೆ. ಮುಂದಿನ ಮೂರು ದಿನಗಳಲ್ಲಿ ವರದಿ ಸಲ್ಲಿಸಬೇಕು ಎಂದು ಪಾಲಿಕೆ ಆಯುಕ್ತರಿಗೆ ಸಚಿವರು ನಿರ್ದೇಶನ ನೀಡಿದರು.

ಮಳೆಗಾಲದ ಸಂದರ್ಭದಲ್ಲಿ ಅರಣ್ಯ ಇಲಾಖೆ, ಹೆಸ್ಕಾಂ ಹಾಗೂ ತಹಸೀಲ್ದಾರರು ಹೆಚ್ಚಾಗಿ ತಮ್ಮ ಕಾರ್ಯಸ್ಥಾನಗಳಲ್ಲಿ ಇರಬೇಕು. ಜನರಿಂದ ದೂರುಗಳು ಬಂದ ತಕ್ಷಣ ಸ್ಪಂದಿಸಬೇಕಾಗುತ್ತದೆ. ಕಲಘಟಗಿ ತಾಲೂಕಿನಾದ್ಯಂತ ಕಳೆದ ಮೂರು ತಿಂಗಳಲ್ಲಿ 623 ಟ್ರಾನ್ಸ್‌ಫಾರ್ಮರ್‌ಗಳು ಹಾಳಾಗಿವೆ. ಹೀಗಾಗಿ ಹೆಚ್ಚಿನ ಗಮನ ಹರಿಸಬೇಕಾಗಿದೆ ಎಂದು ಸಚಿವರು ಹೇಳಿದರು.

ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ನವಲಗುಂದದಲ್ಲಿ ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ವರದಿ ಮಾಡಲಾಗಿದೆ. ಆದರೆ ಯಮನೂರು, ಕೊಂಗವಾಡ ಹಳ್ಳಿಗಳಿಗೆ ಸ್ವತಃ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬರೀ ಕುಡಿಯುವ ನೀರಲ್ಲ, ಶುದ್ಧ ಕುಡಿಯುವ ನೀರು ಕೊಡುವ ಬಗ್ಗೆ ಅಧಿಕಾರಿಗಳು ಗಮನ ವಹಿಸಬೇಕು. ಜಲಜೀವನ ಮಿಷನ್ ಕಾಮಗಾರಿಗಳಲ್ಲಿ ಸರಿಯಾಗಿ ನೀರು ಪೂರೈಕೆಯಾಗುತ್ತಿಲ್ಲ ಎಂಬ ದೂರುಗಳಿವೆ. ಅವುಗಳನ್ನು ದುರಸ್ತಿ ಪಡಿಸಿ, ಕುಡಿಯುವ ನೀರು ಒದಗಿಸಬೇಕು. ವಿದ್ಯುತ್ ತಂತಿಗಳು ಕೆಳಮಟ್ಟದಲ್ಲಿ ಇರುವುದನ್ನು ಸರಿಪಡಿಸಬೇಕು. ಹಳ್ಳಿಗಳಲ್ಲಿ ಕೊರೆಸಿದ ಬೋರ್‌ವೆಲ್‌ಗಳಿಗೆ ಚೌಕಟ್ಟು ನಿರ್ಮಾಣ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ನಮ್ಮ ಜವಾಬ್ದಾರಿ. ಮಳೆಗಾಲದಲ್ಲಿ ಕಾಲರಾ, ಮಲೇರಿಯಾ ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಹೀಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಜಿಲ್ಲೆಯ 395 ಹಳ್ಳಿಗಳಲ್ಲಿ ಸುಮಾರು 90 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎಂದು ಅಂದಾಜಿಸಲಾಗಿದೆ. ಈಗಾಗಲೇ 160 ಕಡೆಗಳಲ್ಲಿ ಬೋರ್‌ವೆಲ್‌ ಕೊರೆಸಲು ಸ್ಥಳಗಳನ್ನು ಗುರುತಿಸಲಾಗಿದೆ. ಜಿಪಂ ವತಿಯಿಂದ ಬೋರ್‌ವೆಲ್ ಕೊರೆಸಲು ತೀರ್ಮಾನಿಸಲಾಗಿದೆ. ಕುಡಿಯುವ ನೀರಿನ ಕುರಿತು ಸಹಾಯವಾಣಿ ಸಹ ತೆರೆಯಲಾಗಿದೆ. ಸಾರ್ವಜನಿಕರಿಂದ ದೂರುಗಳು ಸಹ ಬರುತ್ತಿವೆ ಎಂದರು. ಪೊಲೀಸ ಆಯುಕ್ತ ಎನ್. ಶಶಿಕುಮಾರ್, ಜಿಪಂ ಸಿಇಒ ಭುವನೇಶ ಪಾಟೀಲ, ಎಸ್ಪಿ ಡಾ. ಗೋಪಾಲ ಬ್ಯಾಕೋಡ, ಪಾಲಿಕೆಯ ಆಯುಕ್ತ ರುದ್ರೇಶ ಘಾಳಿ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಉಪಸ್ಥಿತರಿದ್ದರು. ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳಿದ್ದರು.