ಸಾರಾಂಶ
ಹೊಸಪೇಟೆ: ವಿಜಯನಗರ ಜಿಲ್ಲೆಯ ವಿವಿಧೆಡೆ ಪ್ರವಾಸ ಕೈಗೊಂಡ ವೇಳೆಯಲ್ಲಿ ಕೆಲವು ಅಂಗನವಾಡಿಗಳಲ್ಲಿ ಮತ್ತು ಇನ್ನಿತರ ಕಡೆಗಳಲ್ಲಿ ಮಕ್ಕಳಿಗೆ ಕಲ್ಪಿಸಬೇಕಾದ ಮೂಲಸೌಕರ್ಯದ ವಿಷಯದಲ್ಲಿ ಲೋಪದೋಷ ಕಂಡುಬಂದಿದ್ದು, ಅಗತ್ಯ ಕ್ರಮ ವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಸೂಚಿಸಿದರು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಪಂ, ಮಹಿಳಾ-ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಹಾಗೂ ಮಕ್ಕಳ ಪಾಲನಾ ಸಂಸ್ಥೆ, ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರಿಗೆ ಮಕ್ಕಳ ರಕ್ಷಣಾ ವ್ಯವಸ್ಥೆ ಕುರಿತು ಭಾಗಿದಾರರೊಂದಿಗೆ ಜಿಲ್ಲಾಧಿಕಾರಿ ಅಡಿಟೋರಿಯಂ ಹಾಲ್‌ನಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕೆಲ ಶಾಲೆಗಳು ಮತ್ತು ವಸತಿ ನಿಲಯಗಳಲ್ಲಿ ಅಗತ್ಯ ಮೂಲಸೌಕರ್ಯ ಒದಗಿಸಲು ಉಂಟಾಗುತ್ತಿರುವ ವಿಳಂಬಕ್ಕೆ ಕಾರಣ ಏನು ಎಂಬುದರ ಬಗ್ಗೆ ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಅಧಿಕಾರಿಗಳು ಕಾಲ ಕಾಲಕ್ಕೆ ಗ್ರಾಮೀಣ ಭಾಗದಲ್ಲಿ ಪ್ರವಾಸ ಕೈಗೊಂಡು ಸರಿಪಡಿಸಬೇಕು ಎಂದು ನಿರ್ದೇಶನ ನೀಡಿದರು.
ರಾಜ್ಯಾದ್ಯಂತ ಎಲ್ಲ ಕಡೆಗಳಲ್ಲಿ ಡೆಂಘೀ ಪ್ರಕರಣಗಳು ಹೆಚ್ಚುತ್ತಿವೆ. ಈ ನಿಟ್ಟಿನಲ್ಲಿ ಮಕ್ಕಳು ಮಾರಕ ಡೆಂಘೀಗೆ ಬಲಿಯಾಗದಂತೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಶಾಲೆ, ಅಂಗನವಾಡಿ ಸೇರಿದಂತೆ ಎಲ್ಲ ಕಡೆಗೆ ಶುಚಿತ್ವದ ಬಗ್ಗೆ ಸಾಕಷ್ಟು ಗಮನ ಹರಿಸಬೇಕು. ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ತಾಲೂಕು ಆರೋಗ್ಯ ಅಧಿಕಾರಿಗಳಿಂದ ಕಾಲಕಾಲಕ್ಕೆ ವರದಿ ಪಡೆದು ಸೂಕ್ತ ಮೇಲ್ವಿಚಾರಣೆ ನಡೆಸಬೇಕು ಎಂದು ನಿರ್ದೇಶನ ನೀಡಿದರು.ಜಿಪಂ ಸಿಇಒ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ, ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಲೀಂ ಪಾಷಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ವೇತಾ, ಜಿಲ್ಲಾ ಕಾರ್ಮಿಕ ಅಧಿಕಾರಿ ಸೂರಪ್ಪ ಡೊಂಬರಮತ್ತೂರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುದೀಪ್ ಉಂಕ್ರಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.