ಲೋಕಾಯುಕ್ತರಿಗೆ ಸಮಗ್ರ ಮಾಹಿತಿ ನೀಡಿ

| Published : Aug 04 2024, 01:23 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಹಾಗೂ ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಆಗಸ್ಟ್‌ ತಿಂಗಳಲ್ಲಿ ವಿಜಯಪುರ ಜಿಲ್ಲೆಯ ವಿವಿಧೆಡೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಲ್ಲದೇ, ವಿವಿಧೆಡೆ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಈ ವೇಳೆ ಅಧಿಕಾರಿಗಳು ಸಮಗ್ರ ಮಾಹಿತಿಯೊಂದಿಗೆ ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಜಿಲ್ಲೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಹಾಗೂ ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಆಗಸ್ಟ್‌ ತಿಂಗಳಲ್ಲಿ ವಿಜಯಪುರ ಜಿಲ್ಲೆಯ ವಿವಿಧೆಡೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಲ್ಲದೇ, ವಿವಿಧೆಡೆ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಈ ವೇಳೆ ಅಧಿಕಾರಿಗಳು ಸಮಗ್ರ ಮಾಹಿತಿಯೊಂದಿಗೆ ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಜಿಲ್ಲೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿಗಳು ಆ.೯ರಿಂದ ೧೩ರವರೆಗೆ ಪ್ರವಾಸ ಕೈಗೊಂಡಿದ್ದಾರೆ. ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ, ವಿವಿಧ ಕಚೇರಿ, ಆಸ್ಪತ್ರೆ, ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ. ವಕೀಲರೊಂದಿಗೆ ಸಂವಾದ, ಸಾರ್ವಜನಿಕರ ಕುಂದು ಕೊರತೆಗಳು ಮತ್ತು ಅಹವಾಲುಗಳ ಕುರಿತಂತೆ ಮಾಹಿತಿ, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಮತ್ತು ಬಾಕಿ ಇರುವ ಕಡತಗಳ ಕುರಿತು ಸಭೆ ನಡೆಸಲಿದ್ದಾರೆ. ಲೋಕಾಯುಕ್ತರ ಸಭೆಗೆ ಅಧಿಕಾರಿಗಳು ತಮ್ಮ ಕಚೇರಿ ಕಡತ ವಿಲೇವಾರಿ ಹಾಗೂ ಬಾಕಿ ಇರುವ ಪ್ರಕರಣಗಳ ಸಮಗ್ರ ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ಸೂಚಿಸಿದರು.

ಸಾರ್ವಜನಿಕರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ದೂರುಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಲೋಕಾಯುಕ್ತ ಎಸ್ಪಿ ಟಿ.ಮಲ್ಲೇಶಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಲೋಕಾಯುಕ್ತ ಪೊಲೀಸ್ ಡಿವೈಎಸ್‌ಪಿ ಸುರೇಶ ರೆಡ್ಡಿ, ಪೊಲೀಸ್‌ ಇನ್ಸಪೆಕ್ಟರ್‌ಗಳಾದ ಆನಂದ ಠಕ್ಕಣ್ಣವರ, ಆನಂದ ಡೋಣಿ, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ವಿಜಯ ಆಜೂರ ಮುಂತಾದವರು ಇದ್ದರು.