ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ
ಕೃಷಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಾಯಧನ ಯೋಜನೆಯಡಿ ಆಯ್ಕೆಗೊಂಡಿರುವ ಫಲಾನುಭವಿಗಳಿಗೆ ಬ್ಯಾಂಕುಗಳು ಕಡ್ಡಾಯವಾಗಿ ಸಾಲಸೌಲಭ್ಯ ನೀಡಬೇಕು. ಒಂದು ವೇಳೆ ವಿನಾಕಾರಣ ಸಾಲ ನಿರಾಕರಿಸಿದರೆ ಅಂತಹ ಬ್ಯಾಂಕಿನ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ದೌರ್ಜ್ಯನ್ಯ ತಡೆ ಹಾಗೂ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೃಷಿ ಇಲಾಖೆಯ ಸಹಾಯಧನ ಯೋಜನೆಯಡಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಸಾಲ ನೀಡುತ್ತಿಲ್ಲ ಎಂದು ದೌರ್ಜನ್ಯ ತಡೆ ಸಮಿತಿ ಸದಸ್ಯರಾದ ಕರೆಪ್ಪ ಗುಡೆನ್ನವರ ಸಭೆಯ ಗಮನಕ್ಕೆ ತಂದರು. ಈ ಬಗ್ಗೆ ಚರ್ಚಿಸಿದ ಜಿಲ್ಲಾಧಿಕಾರಿಗಳು, ಆಯ್ಕೆಗೊಂಡ ಫಲಾನುಭವಿಗಳು ಸಾಲಕ್ಕೆ ಅರ್ಜಿ ಸಲ್ಲಿಸಿದಾಗ ಸಾಲ ನೀಡದಿದ್ದರೆ ಸಂಬಂಧಿಸಿದ ಬ್ಯಾಂಕಿನ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.ಜಿಲ್ಲೆಯ 40 ಸ್ಮಶಾನ ಭೂಮಿಗಳಿಗೆ ಮೂಲಸೌಕರ್ಯ ಕಲ್ಪಿಸಲು ತಲಾ ₹ 5 ಲಕ್ಷ ಅನುದಾನ ಕೋರಿ ಪ್ರಸ್ತಾವ ಕಳಿಸಲು ಸೂಚನೆ ನೀಡಿದ್ದು, ಕೂಡಲೇ ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ನಿರ್ದೇಶನ ನೀಡಿದರು.
ಸ್ಮಶಾನ ಭೂಮಿಗಳಿಗೆ ಕಾಂಪೌಂಡ್ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನರೇಗಾ ಮತ್ತಿತರ ಯೋಜನೆಗಳಡಿ ಕ್ರಮ ಕೈಗೊಳ್ಳಲಾಗುವುದು. ಕುಕಡೊಳ್ಳಿ ಗ್ರಾಮದಲ್ಲಿ ರಸ್ತೆ ಸಮಸ್ಯೆ ಬಗ್ಗೆ ಸಾರ್ವಜನಿಕರು ಅಹವಾಲು ಸಲ್ಲಿಸಿದರು. ಈ ಬಗ್ಗೆ ಗ್ರಾಮದ ನಕಾಶೆ ಪರಿಶೀಲಿಸಿ ಸೂಕ್ತ ಕ್ರಮ ವಹಿಸುವಂತೆ ತಹಸೀಲ್ದಾರ್ ಗೆ ಸೂಚನೆ ನೀಡಿದರು.ಪೊಲೀಸರು ನ್ಯಾಯಾಲಯಕ್ಕೆ ಬಿ ವರದಿ ಸಲ್ಲಿಸಿರುವ ಕೆಲ ಪ್ರಕರಣಗಳಲ್ಲಿ ನೋಂದ ಕುಟುಂಬದವರು ಮುಂದಿನ ಕಾನೂನು ಹೋರಾಟ ನಡೆಸಲು ಇಚ್ಛಿಸಿದಲ್ಲಿ ಅವರಿಗೆ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಉಚಿತ ನೆರವು ನೀಡಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಕೆಲವು ಅಟ್ರಾಸಿಟಿ ಪ್ರಕರಣಗಳಲ್ಲಿ ಬಿ ವರದಿ ಸಲ್ಲಿಸುತ್ತಿರುವುದರಿಂದ ಮೊದಲೇ ನೋಂದ ಕುಟುಂಬದವರು ಬಿ ವರದಿ ಪ್ರಶ್ನಿಸಲು ಸಾಧ್ಯವಾಗುತ್ತಿಲ್ಲ. ಇಂತಹ ಪ್ರಕರಣಗಳಲ್ಲಿ ನೋಂದ ಕುಟುಂಬಗಳಿಗೆ ಹೆಚ್ಚಿನ ಕಾನೂನು ನೆರವು ನೀಡಬೇಕು ಎಂದು ಜಿಲ್ಲಾ ದೌರ್ಜನ್ಯ ತಡೆ ಹಾಗೂ ಜಾಗೃತ ಸಮಿತಿಯ ಸದಸ್ಯ ಕರೆಪ್ಪ ಗುಡೆನ್ನವರ ಒತ್ತಾಯಿಸಿದರು.ದಲಿತ ಸಂಘಟನೆ ಮುಖಂಡ ಮಲ್ಲೇಶ್ ಚೌಗುಲೆ, ಬೆಳಗಾವಿ ತಾಲೂಕು ಸೇರಿದಂತೆ ಅನೇಕ ಕಡೆ ಸ್ಮಶಾನ ಭೂಮಿಗಳಿಗೆ ಮೂಲ ಸೌಕರ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಕೃಷಿ ಇಲಾಖೆಯಿಂದ ಸಹಾಯಧನ ಯೋಜನೆಯಡಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ರಾಷ್ಟ್ರೀಕೃತ ಬ್ಯಾಂಕಿನಿಂದ ಸಾಲ ಸೌಲಭ್ಯ ದೊರಕದಿರುವುದರಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ತೊಂದರೆಯಾಗುತ್ತಿದೆ ಎಂದು ದೂರಿದರು.ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನವೀನ್ ಶಿಂತ್ರೆ, 2024ರ ಜನವರಿಯಿಂದ ಮಾರ್ಚ್ ಅಂತ್ಯದವರೆಗೆ ದೌರ್ಜನ್ಯ ಪ್ರಕರಣಗಳಲ್ಲಿ ನೋಂದ ಒಟ್ಟು 95 ಜನರಿಗೆ ₹ 71.12 ಲಕ್ಷ ಪರಿಹಾರಧನ ವಿತರಿಸಲಾಗಿದೆ ಎಂದು ವಿವರಿಸಿದರು.
ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಪಂ ಸಿಇಒ ರಾಹುಲ್ ಶಿಂಧೆ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಮಹಾನಗರ ಪಾಲಿಕೆಯ ಆಯುಕ್ತ ಪಿ.ಎನ್. ಲೋಕೇಶ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ. ಬಸರಗಿ ಉಪಸ್ಥಿತರಿದ್ದರು.---------