ಅಲ್ಪಸಂಖ್ಯಾತರಿಗೆ ಇಲಾಖೆವಾರು ಸೌಲಭ್ಯ ನೀಡಿ: ಸಾವಿತ್ರಿ ಕಡಿ

| Published : Jul 28 2024, 02:11 AM IST

ಅಲ್ಪಸಂಖ್ಯಾತರಿಗೆ ಇಲಾಖೆವಾರು ಸೌಲಭ್ಯ ನೀಡಿ: ಸಾವಿತ್ರಿ ಕಡಿ
Share this Article
  • FB
  • TW
  • Linkdin
  • Email

ಸಾರಾಂಶ

ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಜೈನ, ಸಿಖ್, ಪಾರ್ಸಿ, ಬೌದ್ಧ ಮುಂತಾದ ಸಮುದಾಯಗಳ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆ

ಕನ್ನಡಪ್ರಭ ವಾರ್ತೆ ಕೊಪ್ಪಳ

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ ಅಲ್ಪಸಂಖ್ಯಾತರಿಗೆ ಇಲಾಖಾವಾರು ಸೌಲಭ್ಯಗಳನ್ನು ನೀಡುವಂತೆ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಜೈನ, ಸಿಖ್, ಪಾರ್ಸಿ, ಬೌದ್ಧ ಮುಂತಾದ ಸಮುದಾಯಗಳ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಡಿ ಅರ್ಹ ಫಲಾನುಭವಿಗಳನ್ನು ಗುರುತಿಸುವ ಕಾರ್ಯವಾಗಬೇಕು. ವಿವಿಧ ಇಲಾಖೆಗಳಿಂದ ಅನುಷ್ಠಾನಗೊಳಿಸಲಾಗುವ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಿಟ್ಟ ಗುರಿಗಳನ್ನು ಸಮರ್ಪಕವಾಗಿ ಪೂರ್ಣಗೊಳಿಸಬೇಕು. ನಿವೇಶನ, ಮನೆಗಳ ಹಂಚಿಕೆ, ಗಂಗಾಕಲ್ಯಾಣ, ಸಾಲ ಸೌಲಭ್ಯ, ಸ್ವಯಂ ಉದ್ಯೋಗ ಯೋಜನೆ ಮುಂತಾದ ಯೋಜನೆಗಳಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸುವ ಸಂದರ್ಭದಲ್ಲಿ ನಿಗದಿತ ಗುರಿಯಂತೆ ಅಲ್ಪಸಂಖ್ಯಾತ ಸಮುದಾಯದ ಫಲಾನುಭವಿಗಳಿಗೂ ಆದ್ಯತೆ ನೀಡಿ. ಇದರ ಜತೆಗೆ ಇಲಾಖೆಗಳ ಸೌಲಭ್ಯಕ್ಕಾಗಿ ಬರುವ ಅರ್ಜಿಗಳಲ್ಲಿ ಅಲ್ಪಸಂಖ್ಯಾತರ ಬಗ್ಗೆ ಮಾಹಿತಿ ಸಂಗ್ರಹಿಸಿ ಪಿಎಂ ಹೊಸ 15 ಅಂಶಗಳ ಕಾರ್ಯಕ್ರಮದಡಿ ಸೂಕ್ತ ಸೌಲಭ್ಯ ಒದಗಿಸಿ. ಅರ್ಹ ಫಲಾನುಭವಿಗಳಿಗೆ ಸೂಕ್ತ ಸೌಲಭ್ಯ ಒದಗಿಸಲು ಕ್ರಮವಹಿಸಿ. ಅಲ್ಪಸಂಖ್ಯಾತರ ಸಮುದಾಯದವರನ್ನು ಮುಖ್ಯವಾಹಿನಿಗೆ ತರಲು ರೂಪಿಸಿರುವ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ ಇಲಾಖೆಗಳಲ್ಲಿನ ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೆ ಒತ್ತು ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಜಂಟಿ ಕೃಷಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಪಶು ಇಲಾಖೆಯ ಉಪನಿರ್ದೇಶಕ ಪಿ.ಎಂ. ಮಲ್ಲಯ್ಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುರೇಶ ಕೋಕರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಗಂಗಪ್ಪ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.