ಸಾರಾಂಶ
ಕೆಸ್ವಾನ್‌ನಲ್ಲಿ ವಿಡಿಯೋ ಕಾನ್ಫೆರೆನ್ಸ್ ಮೂಲಕ ಅಧಿಕಾರಿಗಳ ಸಭೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು, ಜು.20ಅತಿವೃಷ್ಠಿಯಿಂದ ಹಾನಿಗೊಳಗಾದ ಮನೆಗಳಿಗೆ ತುರ್ತು ಪರಿಹಾರವನ್ನು ಒದಗಿಸಿ ಸಂತ್ರಸ್ತ ಕುಟುಂಬಗಳ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸಬೇಕೆಂದು ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.ಪ್ರಕೃತಿ ವಿಕೋಪದಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಕೆಸ್ವಾನ್‌ನಲ್ಲಿ ವಿಡಿಯೋ ಕಾನ್ಫೆರೆನ್ಸ್ ಮೂಲಕ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಾದ್ಯಂತ ಹೆಚ್ಚು ಮಳೆಯಾಗುತ್ತಿದ್ದು, ಮಳೆಯಿಂದ ಮನೆಗಳು, ಜಾನುವಾರುಗಳಿಗೆ ತೊಂದರೆಯಾಗುತ್ತಿದೆ. ಮಳೆಯಿಂದ ಹಾನಿಗೊಳಗಾದ ಮನೆಗಳನ್ನು ಗುರುತಿಸಿ ಶೀಘ್ರವಾಗಿ ಪರಿಹಾರ ಒದಗಿಸಬೇಕು ಹಾಗೂ ಯಾವುದೇ ರೀತಿಯ ಗೋಡೆ, ಮೇಲ್ಛಾವಣಿ ಕುಸಿದು ಭಾಗಶಃ ಹಾನಿಗೊಳಗಾಗಿದ್ದರೆ ಅಂತಹ ಮನೆಗಳನ್ನು ಗುರುತಿಸಿ ಪರಿಶೀಲಿಸಿ ಶೇಕಡವಾರು ಪರಿಹಾರ ನೀಡದೆ ಪೂರ್ಣ ಪ್ರಮಾಣದ ಪರಿಹಾರ ಒದಗಿಸಿಕೊಡಬೇಕು ಎಂದು ಹೇಳಿದರು.ಗುಡ್ಡ ಪ್ರದೇಶಗಳಲ್ಲಿ ವಾಸಿಸುತ್ತಿರುವ ಕುಟುಂಬಗಳು ಅಪಾಯದಲ್ಲಿದ್ದರೆ ಅಂತಹ ಕುಟುಂಬಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು. ಸ್ಥಳೀಯ ಮಟ್ಟದಲ್ಲಿ ಪಿಡಿಒಗಳು ಹಾಗೂ ಆಪ್ತಮಿತ್ರ ತಂಡದವರು ಜೊತೆಗೂಡಿ ಸಂತ್ರಸ್ತರ ನೆರವಿಗೆ ಸಹಕರಿಸಬೇಕು ಮತ್ತು ಮನೆ ಕಳೆದುಕೊಂಡು ನಿರಾಶ್ರಿತರಾದ ಸಂತ್ರಸ್ತರಿಗೆ ಕಾಳಜಿ ಕೇಂದ್ರಗಳನ್ನು ತೆರೆದು ಆಶ್ರಯ ನೀಡಬೇಕು ಎಂದರು.ಯಾವುದೇ ರೀತಿ ಹಾನಿ ಉಂಟಾದಲ್ಲಿ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸಂಪರ್ಕದಲ್ಲಿದ್ದು, ಸಮಸ್ಯೆ ಬಗೆಹರಿಸಲು ಕಟ್ಟುನಿ ಟ್ಟಾದ ಕ್ರಮ ಕೈಗೊಳ್ಳಬೇಕು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅವರ ಸಮಸ್ಯೆಗಳಿಗೆ ಪ್ರತಿಯೊಬ್ಬರು ಸ್ಪಂದಿಸಬೇಕು.ಮಳೆ ಹಾಗೂ ಪ್ರವಾಹ ಎದುರಿಸಲು ಎಲ್ಲರೂ ಒಗ್ಗೂಡಿ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ, ಅಪಾಯದ ಮುನ್ಸೂಚನೆ ಇರುವ ಪ್ರದೇಶ ಹಾಗೂ ಮನೆಗಳನ್ನು ಗುರುತಿಸಿ ಅವರನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ. ಗ್ರಾಪಂ ಮಟ್ಟದಲ್ಲಿ ತಂಡಗಳನ್ನು ರಚಿಸಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಯಾವುದೇ ಪ್ರದೇಶದಲ್ಲಿ ಹಾನಿ ಉಂಟಾದರೆ ತಕ್ಷಣ ಗುರುತಿಸಿ ಕ್ರಮ ಕೈಗೊಳ್ಳ ಲಾಗುತ್ತಿದೆ. ಜಿಲ್ಲೆಯ ಅಪಾಯ ಸಂಭವಿಸಬಹುದಾದ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಬಾರದಂತೆ ನಿರ್ಬಂಧಿಸಲಾಗಿದೆ. ಪ್ರವಾಹ ಹಾಗೂ ಮಳೆಯಿಂದ ಸಂಭವಿಸಬಹುದಾದ ತೊಂದರೆಗಳನ್ನು ಎದುರಿಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಂ ಅಮಟೆ ಮಾತನಾಡಿ, ಹಾಸನ ಜಿಲ್ಲೆಯ ಸಂಪಾಜೆ ರಸ್ತೆಯ ಗುಡ್ಡ ಕುಸಿತ ದಿಂದ ಆ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿರುವುದರಿಂದ ಭಾರಿ ತೂಕದ ವಾಹನಗಳು ಚಾರ್ಮಾಡಿ ರಸ್ತೆ ಮೂಲಕ ಸಂಚರಿಸುತ್ತಿದ್ದು, ಭಾರಿ ವಾಹನಗಳ ಸಂಚಾರದಿಂದ ಅಡಚಣೆಯುಂಟಾಗುತ್ತಿದೆ. ಹಾಗಾಗಿ ಭಾರಿ ವಾಹನಗಳ ಸಂಚಾರ ನಿಷೇಧಿಸಲು ಕ್ರಮವಹಿಸುವಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಹೇಳಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವತ್ ಬಾಬು ಮಾತನಾಡಿ, ಪ್ರಸ್ತುತ ಜಿಲ್ಲೆಯಲ್ಲಿ 26 ಡೆಂಘೀ ಪ್ರಕರಣಗಳು ಸಕ್ರಿಯದಲ್ಲಿದೆ. ಕಳೆದ ತಿಂಗಳಿಗಿಂತ ಶೇ. 50 ರಷ್ಟು ಪ್ರಕರಣ ಕಡಿಮೆಯಾಗಿದೆ. ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಡೆಂಘೀ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಕ್ರಮವಹಿಸಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ, ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ, ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ದಲ್ಜಿತ್ ಕುಮಾರ್, ತರೀಕೆರೆ ಉಪ ವಿಭಾಗಾಧಿಕಾರಿ ಡಾ. ಕಾಂತರಾಜ್, ತಾಲೂಕು ತಹಸೀಲ್ದಾರ್‌ಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. 20 ಕೆಸಿಕೆಎಂ 1ಪ್ರಕೃತಿ ವಿಕೋಪದಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿ ಕಚೇರಿ ಆವರಣದ ಕೆಸ್ವಾನ್‌ನಲ್ಲಿ ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಸಭೆ ನಡೆಸಿದರು. ಡಿಸಿ ಮೀನಾ ನಾಗರಾಜ್, ಎಸ್ಪಿ ಡಾ. ವಿಕ್ರಂ ಅಮಟೆ, ಸಿಇಓ ಕೀರ್ತನಾ, ಎಸಿ ಡಾ. ಕಾಂತರಾಜ್, ದಲ್ಜಿತ್ ಕುಮಾರ್ ಇದ್ದರು.