ಸಾರಾಂಶ
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಫಲಾನುಭವಿಗಳಿಗಾಗಿ ಬೇರೆ ಬೇರೆ ಇಲಾಖೆಗಳಲ್ಲಿ ಇರುವ ಸೌಲಭ್ಯಗಳ ಮಾಹಿತಿಯನ್ನು ಸಂಗ್ರಹಿಸಿ, ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಯ ಲಾಭ ತಲುಪಿಸಬೇಕು.
ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಅಧಿಕಾರಿಗಳಿಗೆ ನಲಿನ್ ಅತುಲ್ ಸೂಚನೆ
ಕನ್ನಡಪ್ರಭವಾರ್ತೆ ಕೊಪ್ಪಳ
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ನಿಗದಿತ ಅವಧಿಯೊಳಗೆ ನೀಡುವಂತೆ ಜಿಲ್ಲಾಧಿಕಾರಿ ನಲಿನ್ ಅತುಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಡೆದ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ (ಯೋಜನೆ ರೂಪಿಸುವುದು, ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ) ಅಧಿನಿಯಮ 2013ರನ್ವಯ ಅನುಸೂಚಿತ ಜಾತಿಗಳು ಉಪಯೋಜನೆ/ಬುಡಕಟ್ಟು ಉಪಯೋಜನೆ ಹಾಗೂ ಪರಿಶಿಷ್ಟ ಜಾತಿ/ವರ್ಗದ ಅಭಿವೃದ್ಧಿ ಕಾರ್ಯಕ್ರಮಗಳ 2024-25ನೇ ಸಾಲಿನ ಆಗಸ್ಟ್-2024ರ ಪ್ರಗತಿ ಪರಿಶೀಲನೆಗಾಗಿ ಆಯೋಜಿಸಲಾಗಿದ್ದ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಲ್ಲ ಇಲಾಖೆಗಳು, ನಿಗಮಗಳಿಗೆ ಎಸ್.ಸಿ.ಪಿ.-ಟಿ.ಎಸ್.ಪಿ. ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರ ಅಭಿವೃದ್ಧಿಗಾಗಿ ಸರ್ಕಾರ ಅನುದಾನ ಬಿಡುಗಡೆ ಮಾಡಿ, ಗುರಿ ನಿಗದಿಪಡಿಸಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಫಲಾನುಭವಿಗಳಿಗಾಗಿ ಬೇರೆ ಬೇರೆ ಇಲಾಖೆಗಳಲ್ಲಿ ಇರುವ ಸೌಲಭ್ಯಗಳ ಮಾಹಿತಿಯನ್ನು ಸಂಗ್ರಹಿಸಿ, ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಯ ಲಾಭ ತಲುಪಿಸಬೇಕು. ಎಸ್.ಸಿ.ಪಿ.-ಟಿ.ಎಸ್.ಪಿ. ಯೋಜನೆಯಡಿ ವಿವಿಧ ಅನುಷ್ಠಾನ ಏಜೆನ್ಸಿಗಳ ಮೂಲಕ ನಿರ್ಮಿಸುತ್ತಿರುವ ಕಟ್ಟಡಗಳು, ಸಮುದಾಯ ಭವನಗಳ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಸರ್ಕಾರ ನೀಡುವ ಅನುದಾನ, ಬಿಡುಗಡೆಯಾದ ದಿನಾಂಕ, ಫಲಾನುಭವಿಗಳಿಗೆ ತಲುಪಿಸಿದ ದಿನಾಂಕ, ಖರ್ಚಾದ ಮೊತ್ತ, ಬಾಕಿ ಉಳಿದಿರುವ ಅನುದಾನವನ್ನು ಕಾರಣ ಸಹಿತ ಮಾಹಿತಿಯನ್ನು ನೀಡುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.ಎಸ್.ಸಿ.ಪಿ.-ಟಿ.ಎಸ್.ಪಿ. ಯೋಜನೆಗೆ ಸಂಬಂಧಿಸಿದಂತೆ ಫಲಾನುಭವಿ ಆಧಾರಿತ ಯೋಜನೆಗಳಿಗೆ ಆದ್ಯತೆ ನೀಡಬೇಕು. ಸರ್ಕಾರದಿಂದ ಒದಗಿಸಿದ ಅನುದಾನವನ್ನು ಸಮರ್ಪಕವಾಗಿ ಬಳಸಿ, ಫಲಾನುಭವಿಗಳಿಗೆ ತಲುಪಿಸಿದಾಗ ಮಾತ್ರ ಪ್ರಗತಿ ಸಾಧಿಸಲು ಸಾಧ್ಯ ಎಂದರು.
ಜಂಟಿ ಕೃಷಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜು ತಳವಾರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿಗಳು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಇದ್ದರು.