ವಿದ್ಯಾರ್ಥಿಗಳ ಸಂಖ್ಯೆಗೆ ತಕ್ಕಂತೆ ಹಾಸ್ಟೆಲ್‌, ಬಸ್‌ ಒದಗಿಸಿ

| Published : Jul 13 2024, 01:38 AM IST

ಸಾರಾಂಶ

ರಾಜ್ಯದಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳನ್ನು ಪರಿಹರಿಸಲು ಒತ್ತಾಯಿಸಿ, ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತು ಜಿಲ್ಲಾ ಘಟಕ ನೇತೃತ್ವದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ನಗರದ ಎಂಸಿಸಿ ಬಿ ಬ್ಲಾಕ್‌ನಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

- ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಸಚಿವರ ಮನೆಗೆ ಮುತ್ತಿಗೆ ಹಾಕಿ ಎಬಿವಿಪಿ ಕಾರ್ಯಕರ್ತರ ಒತ್ತಾಯ

- - - ಕನ್ನಡಪ್ರಭ ವಾರ್ತೆ, ದಾವಣಗೆರೆ

ರಾಜ್ಯದಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳನ್ನು ಪರಿಹರಿಸಲು ಒತ್ತಾಯಿಸಿ, ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತು ಜಿಲ್ಲಾ ಘಟಕ ನೇತೃತ್ವದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ನಗರದ ಎಂಸಿಸಿ ಬಿ ಬ್ಲಾಕ್‌ನಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಎಬಿವಿಪಿ ವಿಭಾಗ ಸಂಚಾಲಕ ವರುಣ್ ಕೌಟಿ ಮಾತನಾಡಿ, ಎಲ್ಲ ಕ್ಷೇತ್ರಗಳಿಗೂ ಶಿಕ್ಷಣ ಕ್ಷೇತ್ರವು ಉತ್ತಮ, ವಿದ್ಯಾವಂತ, ಕೌಶಲ್ಯವುಳ್ಳ, ಪ್ರಾಮಾಣಿಕ ವ್ಯಕ್ತಿಗಳನ್ನು ನೀಡುತ್ತದೆ. ಇಂಥ ಕ್ಷೇತ್ರದ ಮೇಲೆ ರಾಜ್ಯಗಳು, ದೇಶದ ಅಭಿವೃದ್ಧಿ ನಿಂತಿದೆ. ಅಂತಹ ಕ್ಷೇತ್ರಕ್ಕೆ ಎಲ್ಲ ಕ್ಷೇತ್ರಕ್ಕೆ ಸೌಲಭ್ಯ ನೀಡುವುದು ಸರ್ಕಾರದ ಮೊದಲ ಆದ್ಯತೆಯಾಗಬೇಕು. ಆದರೆ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರವು ವಿದ್ಯಾರ್ಥಿಗಳಿಗೆ ತರಗತಿ ಆರಂಭವಾದ ನಂತರ ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸಿಲ್ಲ ಎಂದರು.

ಸ್ತ್ರೀಶಕ್ತಿ ಯೋಜನೆಯಿಂದ ಅತಿ ಹೆಚ್ಚು ಮಹಿಳೆಯರು ಬಸ್‌ನಲ್ಲಿ ಸಂಚರಿಸುತ್ತಿದ್ದಾರೆ. ಇದರಿಂದಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ತರಗತಿಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ದೂರಿದರು.

ರಾಜ್ಯ ಕಾರ್ಯಕಾರಿಣಿ ಸದಸ್ಯೆ ತನುಷಾ ಮಾತನಾಡಿ, ಬಡ, ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುವಾಗುವಂತೆ ವಿದ್ಯಾರ್ಥಿ ವೇತನ ನೀಡುವುದು ಸರ್ಕಾರದ ಕರ್ತವ್ಯ. ಆದರೆ, ಕಳೆದ ವರ್ಷದ ವಿದ್ಯಾರ್ಥಿ ವೇತನ ಸರಿಯಾಗಿ ಜಮಾ ಆಗಿಲ್ಲ. ಶಾಲಾ-ಕಾಲೇಜು ಆರಂಭವಾದ ತಿಂಗಳ ನಂತರ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿ, ಪ್ರಕ್ರಿಯೆ ಮುಗಿಯುವುದರೊಳಗೆ 3 ತಿಂಗಳ ಕಾಲ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಸಿಗದಿರುವುದು, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಚೆಲ್ ಸಂಖ್ಯೆ ಇಲ್ಲದಿರುವುದರಿಂದ ತೊಂದರೆಯಾಗಿದೆ ಎಂದು ಹೇಳಿದರು.

ವಿಶ್ವವಿದ್ಯಾನಿಲಯಗಳ ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಬಹಳಷ್ಟು ಬದಲಾವಣೆ ಇದೆ. ಇದರಿಂದ ವಿದ್ಯಾರ್ಥಿಗಳು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆ ಜಿಲ್ಲಾ ಉಸ್ತುವಾ ರಿ ಸಚಿವರು ರಾಜ್ಯದ ವಿದ್ಯಾರ್ಥಿಗಳು ಹಾಗೂ ಶೈಕ್ಷಣಿಕ ಕ್ಷೇತ್ರವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆದು, ಸಮಸ್ಯೆಗಳ ಪರಿಹರಿಸುವಂತೆ ಒತ್ತಡ ಹೇರಬೇಕು. ಈ ಮೂಲಕ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಸಂಘಟನೆ ಜಿಲ್ಲಾ ಸಂಚಾಲಕ ನವೀನ, ರಾಜ್ಯ ಕಾರ್ಯಕಾರಿಣಿ ಸದಸ್ಯ ರತನ್‌, ನಗರ ಸಹ ಕಾರ್ಯದರ್ಶಿ ಮೋಹಿತ್‌, ತಿಪ್ಪೇಶ, ಮಂಜುನಾಥ ಕೊಳ್ಳೇರ ಇತರರು ಇದ್ದರು.

- - -

* ಬೇಡಿಕೆಗಳೇನು? 1. ರಾಜ್ಯದಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್‌ಗಳ ಸಂಖ್ಯೆ ಹೆಚ್ಚಿಸಬೇಕು

2. ಶಾಲಾ-ಕಾಲೇಜುಗಳು ಆರಂಭವಾದ ನಂತರ ವಿದ್ಯಾರ್ಥಿಗಳ ಹಾಸ್ಟೆಲ್ ಆಯ್ಕೆ ಪ್ರವೇಶಾತಿ ಪ್ರಕ್ರಿಯೆಯನ್ನು ವಿಳಂಬ ಮಾಡದೇ, ಪ್ರವೇಶಾತಿ ಕಲ್ಪಿಸಬೇಕು

3. ವಿದ್ಯಾರ್ಥಿಗಳ ಶಾಲಾ-ಕಾಲೇಜು ಸಮಯಕ್ಕೆ ಸರಿಯಾಗಿ ಬಸ್‌ಗಳ ಸಂಖ್ಯೆ ಹೆಚ್ಚಿಸಬೇಕು 4. ಬಸ್‌ ಪಾಸ್ ವಿತರಣೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ಅರ್ಜಿ ಸಲ್ಲಿಸಿದ ತಕ್ಷಣವೇ ವಿದ್ಯಾರ್ಥಿಗಳಿಗೆ ಪಾಸ್ ಸಿಗಬೇಕು.

5. ಸರ್ಕಾರಿ ಹಾಸ್ಟೆಲ್‌ಗಳಿಗೆ ಮೂಲ ಸೌಲಭ್ಯ ಕಲ್ಪಿಸುವ ಜೊತೆಗೆ ಗುಣಮಟ್ಟದ ಆಹಾರ ಪೂರೈಸುವ ಕೆಲಸ ಆಗಬೇಕು

6. ಸಕಾಲಕ್ಕೆ ಸರಿಯಾಗಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು

7. ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳಲ್ಲಿ ಏಕರೂಪದ ಶೈಕ್ಷಣಿಕ ವೇಳಾಪಟ್ಟಿಯನ್ನು ಸಮರ್ಪಕ ಜಾರಿಗೊಳಿಸಬೇಕು

- - - -12ಕೆಡಿವಿಜಿ1, 2:

ಎಬಿವಿಪಿ ನೇತೃತ್ವದಲ್ಲಿ ದಾವಣಗೆರೆಯ ವಿವಿಧ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಜಿಲ್ಲಾ ಉಸ್ತುವಾರಿ ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.