ಸಾರಾಂಶ
ಜಿಲ್ಲೆಯಲ್ಲಿ ಗಣಿಗಾರಿಕೆಯಿಂದ ಹಲವಾರು ಕುಟುಂಬಗಳಿಗೆ ತೊಂದರೆಯುಂಟಾಗುತ್ತಿದ್ದು, ಗಣಿಬಾಧಿತ ಕುಟುಂಬಗಳಿಗೆ ಮೂಲಸೌಕರ್ಯಗಳನ್ನು ಕಲ್ಪಿಸಿಕೊಡಬೇಕು.
ಕನ್ನಡಪ್ರಭ ವಾರ್ತೆ ತುಮಕೂರು
ಗಣಿಬಾಧಿತ ಕುಟುಂಬಗಳಿಗೆ ಆದ್ಯತೆ ಮೇರೆಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ (ಕೆಎಂಇಆರ್‌ಸಿ)ದ ವ್ಯವಸ್ಥಾಪಕ ನಿರ್ದೇಶಕ ಡಾ. ಸಂಜಯ್ ಎಸ್. ಬಿಜ್ಜೂರ್ ಸೂಚಿಸಿದರು.ಮಂಗಳವಾರ ಜಿಲ್ಲಾಧಿಕಾರಿಯ ಕಚೇರಿಯಲ್ಲಿ ನಡೆದ ಕೆಎಂಇಆರ್‌ಸಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಗಣಿಗಾರಿಕೆಯಿಂದ ಹಲವಾರು ಕುಟುಂಬಗಳಿಗೆ ತೊಂದರೆಯುಂಟಾಗುತ್ತಿದ್ದು, ಗಣಿಬಾಧಿತ ಕುಟುಂಬಗಳಿಗೆ ಮೂಲಸೌಕರ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಸರ್ಕಾರವು ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಮೂಲಕ ರಾಜ್ಯದ ಗಣಿಬಾಧಿತ ಪ್ರದೇಶಗಳಲ್ಲಿ ಪರಿಸರ ಪುನಶ್ಚೇತನ ಮತ್ತು ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಗಣಿಬಾಧಿತ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಸಮಗ್ರ ಪರಿಸರ ಯೋಜನೆ ಮತ್ತು ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ ಯೋಜನೆಯು ಪ್ರಮುಖವಾಗಿದ್ದು, ಈ ಯೋಜನೆಯಡಿ ಗಣಿಬಾಧಿತ ಪ್ರದೇಶಗಳಲ್ಲಿ ಮೂಲಸೌಕರ್ಯ, ಆರೋಗ್ಯ, ಶಿಕ್ಷಣ, ಪರಿಸರ ಸಂರಕ್ಷಣೆ ಮತ್ತು ಜನರ ಜೀವನ ಮಟ್ಟದ ಸುಧಾರಣೆಗಾಗಿ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಆರ್ಥಿಕವಾಗಿ ಹಿಂದುಳಿದವರಿಗೆ ಮಾತ್ರ ಗಣಿಬಾಧಿತ ಯೋಜನೆಗಳನ್ನು ಕಲ್ಪಿಸಬೇಕು. ಗಣಿಬಾಧಿತ ಪ್ರದೇಶಗಳಲ್ಲಿ ಶೀಘ್ರದಲ್ಲೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು.ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಜಿಲ್ಲೆಯ ಗಣಿಬಾಧಿತ ಪ್ರದೇಶಗಳಿಗೆ ಮೂಲಭೂತ ಸೌಕರ್ಯ ಹಾಗೂ ವೈಯಕ್ತಿಕ ಸೌಲಭ್ಯ ಒದಗಿಸುವ ಕಾರ್ಯಕ್ರಮಗಳಿಗೆ 2,500 ಕೋಟಿ ರು. ನಿಗದಿಯಾಗಿದ್ದು, ಇದುವರೆಗೆ ನಿಗಮದಿಂದ 1,500 ಕೋಟಿ ರು. ಗಳ ಪ್ರಸ್ತಾವನೆಗೆ ಅನುಮೋದನೆ ದೊರೆತಿದೆ ಎಂದು ತಿಳಿಸಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ, ಜಿಲ್ಲೆಯ ಗಣಿಬಾಧಿತ ತಿಪಟೂರು, ಗುಬ್ಬಿ, ಚಿಕ್ಕನಾಯಕನಹಳ್ಳಿ ಸೇರಿದಂತೆ ಗಣಿಬಾಧಿತ ತಾಲೂಕುಗಳಿಗೆ ಪರಿಸರ ಪುನಶ್ಚೇತನ, ಮೂಲಸೌಕರ್ಯ ಅಭಿವೃದ್ಧಿ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ಗಣಿಬಾಧಿತ ತಾಲೂಕುಗಳಲ್ಲಿರುವ ಅಂಗನವಾಡಿ ಮತ್ತು ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವುದರೊಂದಿಗೆ ಆರೋಗ್ಯ ಶಿಬಿರಗಳನ್ನು ಏರ್ಪಡಿಸಬೇಕೆಂದು ಸೂಚನೆ ನೀಡಿದರು.ಸಭೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕ ಲೋಕೇಶ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ಮತ್ತಿತರರ ಅಧಿಕಾರಿಗಳು ಹಾಜರಿದ್ದರು.