ಸಾರಾಂಶ
ಚಾಮರಾಜನಗರ : ಜಿಲ್ಲೆಯ ಕಾಡಂಚಿನ ಗ್ರಾಮಗಳು ಹಾಗೂ ದುರ್ಗಮ ಪ್ರದೇಶಗಳ ಜನತೆಗೆ ಮೂಲಸೌಲಭ್ಯ ಕಲ್ಪಿಸಲು ವಿಳಂಬ ಮಾಡಬಾರದು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಮಹಿಳೆಯರ ಸುರಕ್ಷತೆ ಹಾಗೂ ಪ್ರಗತಿ ಸಂಬಂಧ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಿಳಿಗಿರಿರಂಗನಬೆಟ್ಟ ಪುರಾಣಿಪೋಡಿಗೆ ಬುಧವಾರ ತಾವು ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಹಲವು ಸಮಸ್ಯೆಗಳು ಬೆಳಕಿಗೆ ಬಂದಿವೆ. ವಿಶೇಷವಾಗಿ ವಿದ್ಯುತ್ ಇಲ್ಲದೇ ಅಲ್ಲಿನ ಜನ ಪರಿತಪಿಸುವುದನ್ನು ನೋಡಿದ್ದೇನೆ. ಸೋಲಾರ್ ದೀಪ ಸಹ ಬಹಳಷ್ಟು ವರ್ಷಗಳಿಂದ ಸರಿಯಾಗಿ ಬಳಸಲು ಆಗುತ್ತಿಲ್ಲ. ಕಾಡಿನ ವಾಸಿಗಳಿಗೆ ಮೂಲಸೌಲಭ್ಯ ಸಮರ್ಪಕವಾಗಿ ತಲುಪುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಇದೇ ವೇಳೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿ, ತಾವು ಸಹ ಕಾಡಂಚಿನ ಗ್ರಾಮಗಳಿಗೆ ಭೇಟಿ ನೀಡಿದ್ದು, ಪರಿಶೀಲಿಸುತ್ತಿದ್ದೇನೆ. ಅರಣ್ಯ ಗ್ರಾಮಗಳಿಗೆ ವಿದ್ಯುತ್ ಸೌಲಭ್ಯ ಕಲ್ಪಿಸಲು ಪ್ರಸ್ತಾವನೆ ತಯಾರಿಸಿ ಕಳುಹಿಸಿಕೊಡಲಾಗಿದೆ. ಒಂದೂವರೆ ತಿಂಗಳಲ್ಲಿ ವಿದ್ಯುತ್ ಒದಗಿಸುವ ಕೆಲಸ ಆರಂಭವಾಗುವ ನಿರೀಕ್ಷೆ ಇದೆ. ಪೌತಿಖಾತೆ ಮಾಡಿಕೊಡಲು ಆಂದೋಲನ ಮಾದರಿಯಲ್ಲಿ ಕಾರ್ಯಕ್ರಮ ಮಾಡಲು ಸೂಚಿಸಲಾಗಿದೆ. ನರೇಗಾ ಅಡಿ ಸಮುದಾಯಕ್ಕೆ ಉಪಯೋಗವಾಗುವ ಕೆಲಸ ಹಮ್ಮಿಕೊಳ್ಳಲು ತಿಳಿಸಲಾಗಿದೆ ಎಂದರು.
ಮಹಿಳಾ ಆಯೋಗದ ಅಧ್ಯಕ್ಷೆ ಮಾತನಾಡಿ, ಮಹಿಳೆಯರು ಕೋಳಿ, ಕುರಿ ಸಾಕಾಣೆಯಂತಹ ಉದ್ಯೋಗ ಕೈಗೊಳ್ಳಲು ಸಹಾಯಧನ ಒದಗಿಸಬೇಕು. ಅರಣ್ಯ ವಾಸಿ ಮಹಿಳೆಯರಿಗೆ ವಿವಿಧ ಉದ್ಯೋಗಾಧಾರಿತ ಚಟುವಟಿಕೆಗಳನ್ನು ಜಿಪಂ ವತಿಯಿಂದ ಹಮ್ಮಿಕೊಳ್ಳಬೇಕು. ಮಹಿಳೆಯರಿಗೆ ತರಬೇತಿ ನೀಡಿ ಅವರ ಬದುಕು ಹಸನುಗೊಳಿಸಲು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಬೇಕು. ಮಹಿಳೆಯರ ಅಭಿವೃದ್ದಿಗೆ ಇರುವ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದರು.
ಪ್ರಸ್ತುತ ರಾಜ್ಯದೆಲ್ಲೆಡೆ ಡೆಂಘೀ ಪ್ರಕರಣಗಳು ಉಲ್ಬಣಗೊಳ್ಳುತ್ತಿದೆ. ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಷ್ಠಾನಗೊಳಿಸಬೇಕಿದೆ. ಡೆಂಘೀ ನಿಯಂತ್ರಣಕ್ಕೆ ಪಾಲಿಸಬೇಕಾಗಿರುವ ಕ್ರಮಗಳ ಬಗ್ಗೆ ಜನರಲ್ಲಿ ಅರಿವು ಉಂಟು ಮಾಡಬೇಕಿದೆ. ಶುದ್ಧ ಕುಡಿಯುವ ನೀರು ಪೂರೈಕೆ, ಸೊಳ್ಳೆಗಳ ನಿಯಂತ್ರಣ ಆಗಬೇಕಿದೆ. ಆರೋಗ್ಯ ಕುರಿತ ಕಾಳಜಿ ಕಾರ್ಯಕ್ರಮಗಳು ಹೆಚ್ಚಾಗಬೇಕಿದೆ ಎಂದರು.
ಹಾಸ್ಟೆಲ್‌ಗಳಲ್ಲಿ ಮೂಲಸೌಕರ್ಯಗಳು ಸಮರ್ಪಕವಾಗಿ ಇವೆಯೇ ಎಂಬ ಬಗ್ಗೆ ಅಧಿಕಾರಿಗಳು ಆಗಿದ್ದಾಂಗೆ ನೋಡಬೇಕು. ವಿದ್ಯಾರ್ಥಿಗಳೊಂದಿಗೆ ಸಮಾಲೋಚಿಸಿ ಸೌಲಭ್ಯಗಳು ಉತ್ತಮವಾಗಿ ತಲುಪಿಸಬೇಕು. ಶುಚಿತ್ವದ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು. ಊಟ ಉಪಹಾರ ಮೆನು ಪ್ರಕಾರ ಇರಬೇಕು. ಗುಣಮಟ್ಟದ ಆಹಾರ, ಶಿಕ್ಷಣ ವಿದ್ಯಾರ್ಥಿ ನಿಲಯಗಳಲ್ಲಿ ಖಾತರಿಪಡಿಸಬೇಕು ಎಂದು ಮಹಿಳಾ ಆಯೋಗದ ಅಧ್ಯಕ್ಷರು ತಾಕೀತು ಮಾಡಿದರು.
ಜಿಲ್ಲೆಯಲ್ಲಿ ಬಾಲ್ಯವಿವಾಹ ತಡೆ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು, ಮಹಿಳೆಯರು ಕಾಣೆಯಾಗಿರುವ ಬಗ್ಗೆ ದಾಖಲಾಗಿರುವ ದೂರುಗಳಿಗೆ ಸಂಬಂಧಿಸಿದಂತೆ ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪರಿಶೀಲಿಸಿ, ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆಯೆ ಎಂದು ಪ್ರಶ್ನಿಸಿದರು. ಮಹಿಳೆಯರಿಗೆ ಸಂಬಂಧಿಸಿದಂತೆ ಪರಿಪಾಲಿಸಿರುವ ಕಾನೂನು ಕ್ರಮಗಳ ಬಗ್ಗೆಯೂ ವಿವರ ನೀಡುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಟಿ. ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ. ಉದೇಶ, ಉಪವಿಭಾಗಾಧಿಕಾರಿ ಮಹೇಶ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಲಕ್ಷ್ಮೀ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಮಂಜುನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಿದಂಬರ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.