ರಾಜ್ಯದಲ್ಲಿ ಕೈಗಾರಿಕೆಗಳು ಹೆಚ್ಚಾಗುತ್ತಿದ್ದು, ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ನೀಡಬೇಕು ಎಂಬ ಬೇಡಿಕೆಯನ್ನು ನಿರಂತರವಾಗಿ ಮುಂದಿಡಲಾಗುತ್ತಿದೆ. ಕೇವಲ ಉದ್ಯೋಗ ನೀಡುವುದಷ್ಟೇ ಅಲ್ಲದೆ, ಸ್ಥಳೀಯ ಯುವಕರಿಗೆ ತರಬೇತಿ, ಅಪ್ರೆಂಟಿಸ್‌ ಶಿಪ್ ಹಾಗೂ ತಾಂತ್ರಿಕ ಶಿಕ್ಷಣಕ್ಕೆ ಅನುಗುಣವಾಗಿ ಉದ್ಯೋಗ ದೊರಕಿಸಿಕೊಡಬೇಕು.

ಕನ್ನಡಪ್ರಭ ವಾರ್ತೆ ಹೊಸಕೋಟೆ

ರಾಜ್ಯದ ಎಲ್ಲಾ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಶೇ.30 ರಿಂದ 40ರಷ್ಟು ಉದ್ಯೋಗ ಮೀಸಲಾತಿ ಕಲ್ಪಿಸಲು ಕೈಗಾರಿಕೆಗಳು ಮುಂದಾಗಬೇಕಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ಹೋರಾಟಗಾರರು ಧ್ವನಿ ಎತ್ತುವಂತಾಗಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ಟಿ.ಎಸ್. ರಾಜಶೇಖರ್ ಆಗ್ರಹಿಸಿದರು.

ತಾಲೂಕಿನ ತಾವರೆಕೆರೆ ಗ್ರಾಮದಲ್ಲಿರುವ ಶ್ರೀ ನಿಮಿಷಾಂಭ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ ಕೈಗಾರಿಕೆಗಳು ಹೆಚ್ಚಾಗುತ್ತಿದ್ದು, ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ನೀಡಬೇಕು ಎಂಬ ಬೇಡಿಕೆಯನ್ನು ನಿರಂತರವಾಗಿ ಮುಂದಿಡಲಾಗುತ್ತಿದೆ. ಕೇವಲ ಉದ್ಯೋಗ ನೀಡುವುದಷ್ಟೇ ಅಲ್ಲದೆ, ಸ್ಥಳೀಯ ಯುವಕರಿಗೆ ತರಬೇತಿ, ಅಪ್ರೆಂಟಿಸ್‌ ಶಿಪ್ ಹಾಗೂ ತಾಂತ್ರಿಕ ಶಿಕ್ಷಣಕ್ಕೆ ಅನುಗುಣವಾಗಿ ಉದ್ಯೋಗ ದೊರಕಿಸಿಕೊಡಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಪ್ರಯತ್ನಿಸಬೇಕಿದೆ ಎಂದರು. ಪ್ರತಿಯೊಬ್ಬರಿಗೂ ಅನ್ನ ನೀಡುವ ರೈತರು ದೇಶದ ಬೆನ್ನೆಲುಬಾಗಿದ್ದರೆ, ದೇಶದ ಅಭಿವೃದ್ಧಿ ಹಾಗೂ ರಕ್ಷಣೆಯಲ್ಲಿ ಕಾರ್ಮಿಕರ ಪಾತ್ರವೂ ಅತ್ಯಂತ ಮಹತ್ವದ್ದಾಗಿದೆ. ರೈತರು ಮತ್ತು ಕಾರ್ಮಿಕರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ, ಯಾವುದೇ ರಾಜಕೀಯ ಪಕ್ಷ, ಜಾತಿ ಅಥವಾ ಧರ್ಮದ ಭೇದವಿಲ್ಲದೆ ಪ್ರತಿಯೊಬ್ಬರೂ ಕಾರ್ಮಿಕರ ಶ್ರಮವನ್ನು ಗೌರವಿಸಬೇಕು. ದೇಶದ ಪ್ರಗತಿಯಲ್ಲಿ ರೈತರು ಮತ್ತು ಕಾರ್ಮಿಕರ ಕೊಡುಗೆ ಅಪಾರವಾಗಿದೆ ಎಂದರು.

ಪಿಡಿಒ ಮುನಿಗಂಗಯ್ಯ ಮಾತನಾಡಿ, ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗನ ಮೇಲಿದೆ. ಬೇರೆ ಭಾಷೆಗಳನ್ನು ಕಲಿಯುವುದಕ್ಕೆ ವಿರೋಧವಿಲ್ಲ. ಆದರೆ, ನಮ್ಮ ನೆಲದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಕಸಾಪ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಟಿ.ನಾಗರಾಜ್ ಮಾತನಾಡಿ, ಕರ್ನಾಟಕದ ಬಹುತೇಕ ಕಡೆಗಳಲ್ಲಿ ಹಿಂದಿ ಭಾಷೆಯ ಬಳಕೆ ಹೆಚ್ಚಾಗುತ್ತಿದೆ. ಹೊರರಾಜ್ಯಗಳಿಂದ ಬಂದವರು ಕನ್ನಡ ಕಲಿಯುವಂತೆ ನಾವು ಪ್ರೋತ್ಸಾಹಿಸಬೇಕು. ನಮ್ಮ ಭಾಷೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸಬೇಕು ಎಂದರು.

ಭೂಮಂಜೂರಾತಿ ಸಮಿತಿ ಸದಸ್ಯ ನಾರಾಯಣಸ್ವಾಮಿ, , ಪಿಡಿಒ ಮುನಿಗಂಗಯ್ಯ, ಕಸಾಪ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಟಿ.ನಾಗರಾಜ್, ಕೈಗಾರಿಕಾ ತರಬೇತಿ ಸಂಸ್ಥೆ ಕಾರ್ಯದರ್ಶಿ ವಿಮಲಾ, ಪ್ರಾಂಶುಪಾಲ ನರಸಿಂಹಮೂರ್ತಿ ಸೇರಿದಂತೆ ಹಲವರು ಗಣ್ಯರು ಹಾಜರಿದ್ದರು.