ಸಾರಾಂಶ
ಬಳ್ಳಾರಿ: ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ, ನಗರದ ಸರಳಾದೇವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ಸರ್ಕಾರಿ ಪ್ರಥಮ ಕಾಲೇಜುಗಳ ಅತಿಥಿ ಉಪನ್ಯಾಸಕರು, ಬುಧವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸುವ ಕುರಿತು ರಾಜ್ಯ ಸರ್ಕಾರ ಯಾವುದೇ ನಿರ್ಧಾರ ಕೈಗೊಳ್ಳುತ್ತಿಲ್ಲ. ಇದರಿಂದ ಉಪನ್ಯಾಸಕರಿಗೆ ಉದ್ಯೋಗ ಅಭದ್ರತೆಯ ಆತಂಕ ಎದುರಾಗಿದೆ ಎಂದು ಹೇಳಿದರು.ನೆರೆಯ ಆಂಧ್ರಪ್ರದೇಶ, ತೆಲಂಗಾಣ, ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಅತಿಥಿ ಉಪನ್ಯಾಸಕರ ಸೇವಾನುಭವದ ಮೇಲೆ ಕಾಯಂಗೊಳಿಸುವ ಮೂಲಕ ಅಲ್ಲಿನ ಸರ್ಕಾರಗಳು ಉದ್ಯೋಗ ಭದ್ರತೆ ಕಲ್ಪಿಸಿವೆ. ಆದರೆ, ಕರ್ನಾಟಕದಲ್ಲಿ ಮಾತ್ರ ಈ ಕುರಿತು ಯಾವುದೇ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಪ್ರತಿಭಟನಾಕಾರರು ಬೇಸರ ವ್ಯಕ್ತಪಡಿಸಿದರಲ್ಲದೆ, ಸಚಿವ ಸಂಪುಟ ಸಭೆಯಲ್ಲಿ ಸೇವೆ ಕಾಯಂಗೊಳಿಸುವ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇಲ್ಲಿನ ಸರಳಾದೇವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಮೆರವಣಿಗೆ ಹೊರಟ ಅತಿಥಿ ಉಪನ್ಯಾಸಕರಿಗೆ ವಿವಿಧ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಬೆಂಬಲ ವ್ಯಕ್ತಪಡಿಸಿ, ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಡೊಳ್ಳು, ತಮಟೆ ವಾದ್ಯಗಳೊಂದಿಗೆ ಶುರುಗೊಂಡ ಮೆರವಣಿಗೆ ನಗರದ ಪ್ರಮುಖ ಬೀದಿಗಳ ಮೂಲಕ ಗಡಗಿಚೆನ್ನಪ್ಪ ವೃತ್ತ ತಲುಪಿತು. ವೃತ್ತದಲ್ಲಿ ಕೆಲ ಹೊತ್ತು ಮಾನವ ಸರಪಳಿ ನಿರ್ಮಿಸಿ, ಆಕ್ರೋಶ ವ್ಯಕ್ತಪಡಿಸಲಾಯಿತು. ಕೆಲವು ಅತಿಥಿ ಉಪನ್ಯಾಸಕರು ಡೊಳ್ಳು, ತಮಟೆ ಬಾರಿಸುವ ಮೂಲಕ ಗಮನ ಸೆಳೆದರು.ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಪ್ರತಿಭಟನಾಕಾರರು, ಜಿಲ್ಲಾಡಳಿತ ಮೂಲಕ ಮುಖ್ಯಮಂತ್ರಿಗೆ ಮನವಿಪತ್ರ ಕಳುಹಿಸಿಕೊಟ್ಟರು. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮನವಿಪತ್ರ ಸ್ವೀಕರಿಸಿದರು.
ಸರ್ಕಾರಿ ಪ್ರಥಮ ದರ್ಜೆ ಅತಿಥಿ ಉಪನ್ಯಾಸರ ಸಂಘದ ಜಿಲ್ಲಾಧ್ಯಕ್ಷ ಡಾ. ಟಿ. ದುರುಗುಪ್ಪ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಸಂಘದ ಸದಸ್ಯರು ಹಾಗೂ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ನೂರಾರು ಅತಿಥಿ ಉಪನ್ಯಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.