ಬಸ್ ನಿಲ್ದಾಣದಲ್ಲಿನ ಸಿಸಿ ಕ್ಯಾಮೆರಾಗಳ ಸಂಖ್ಯೆಗಳನ್ನು ಹೆಚ್ಚು ಮಾಡುವಂತೆ ಮತ್ತು ಸಿಸಿ ಟಿವಿ ದೃಶ್ಯಾವಳಿಗಳ ಬ್ಯಾಕ್ ಅಪ್ ಅವಧಿಯನ್ನು ಹೆಚ್ಚು ಮಾಡಲು ಕ್ರಮ ಕೈಗೊಳ್ಳಬೇಕು.

ಕಾರವಾರ: ಕಾರವಾರದ ಬಸ್ ನಿಲ್ದಾಣದಲ್ಲಿ ಮಹಿಳಾ ಸುರಕ್ಷತೆಗೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಸಾರ್ವಜನಿಕರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ನಿರ್ದೇಶನ ನೀಡಿದರು.ಭಾನುವಾರ ಕಾರವಾರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾತನಾಡಿದ ಅವರು, ಬಸ್ ನಿಲ್ದಾಣದಲ್ಲಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆಗೆ ಸಂಬಂಧಪಟ್ಟ ಸಹಾಯವಾಣಿ ಸಂಖ್ಯೆಗಳನ್ನು ಅತ್ಯಂತ ಸ್ಪಷ್ಟವಾಗಿ ಕಾಣುವಂತೆ ಬರೆಸಬೇಕು. ಬಸ್ ನಿಲ್ದಾಣದಲ್ಲಿನ ಶೌಚಾಲಯದಲ್ಲಿ ಮೂತ್ರ ವಿಸರ್ಜನೆಗೂ ಶುಲ್ಕ ಪಡೆಯುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ನೀಡಿದ್ದರೂ, ಶೌಚಾಲಯದಲ್ಲಿ ಮಹಿಳೆಯರಿಗೆ ಕಾನೂನುಬಾಹಿರವಾಗಿ ಶುಲ್ಕ ವಿಧಿಸುತ್ತಿರುವ ಬಗ್ಗೆ ಮತ್ತು ಬಸ್ ಸ್ಟ್ಯಾಂಡ್‌ನ್ನು ಸುಮಾರು 23 ವರ್ಷಗಳಿಂದ ಸ್ವಚ್ಛಗೊಳಿಸುತ್ತಿರುವ ಮಹಿಳೆಗೆ ಅತ್ಯಂತ ಕನಿಷ್ಠ ವೇತನ ನೀಡುತ್ತಿರುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಕಾರ್ಮಿಕ ಇಲಾಖೆಗಳ ನಿಯಮಗಳ ಪ್ರಕಾರ ಸ್ವಚ್ಛತಾ ಸಿಬ್ಬಂದಿಗೆ ವೇತನ ನೀಡುವಂತೆ ಸೂಚಿಸಿದ ಅವರು, ಇದುವರೆಗೆ ಕನಿಷ್ಠ ವೇತನವನ್ನು ನೀಡದೇ, ಸಿಬ್ಬಂದಿ ಸೇವೆಗೆ ಟೆಂಡರ್ ಪಡೆದಿರುವ ಸಂಸ್ಥೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಸ್ ನಿಲ್ದಾಣದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕ ಹಾಳಾಗಿದ್ದರೂ ಇದುವರೆಗೆ ದುರಸ್ತಿಗೆ ಕ್ರಮ ಕೈಗೊಳ್ಳದ ಬಗ್ಗೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ ಅವರು, ಬಸ್ ನಿಲ್ದಾಣದಲ್ಲಿನ ಸಿಸಿ ಕ್ಯಾಮೆರಾಗಳ ಸಂಖ್ಯೆಗಳನ್ನು ಹೆಚ್ಚು ಮಾಡುವಂತೆ ಮತ್ತು ಸಿಸಿ ಟಿವಿ ದೃಶ್ಯಾವಳಿಗಳ ಬ್ಯಾಕ್ ಅಪ್ ಅವಧಿಯನ್ನು ಹೆಚ್ಚು ಮಾಡಲು ಕ್ರಮ ಕೈಗೊಳ್ಳಬೇಕು. ಮಹಿಳಾ ವಿಶ್ರಾಂತಿ ಗೃಹದಲ್ಲಿ ಸ್ವಚ್ಛತೆ ಕಾಪಾಡಬೇಕು ಮತ್ತು ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಸೂಚನೆ ನೀಡಿದರು.ಕ್ರಿಮ್ಸ್ ಆಸ್ಪತ್ರೆಗೆ ಭೇಟಿ: ನಂತರ ಕ್ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಮಹಿಳಾ ಆಯೋಗದ ಅಧ್ಯಕ್ಷರು, ಆಸ್ಪತ್ರೆಯಲ್ಲಿನ ಮಹಿಳೆ ಮತ್ತು ಮಕ್ಕಳ ಚಿಕಿತ್ಸೆ ಕುರಿತಂತೆ ಮಾಹಿತಿ ಪಡೆದರು. ಹೆರಿಗೆ ವಿಭಾಗದಲ್ಲಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಸ್ನಾನಕ್ಕೆ ಮತ್ತು ಕುಡಿಯಲು ಬಿಸಿ ನೀರಿನ ಕೊರತೆ ಇರುವುದನ್ನು ರೋಗಿಗಳಿಂದಲೇ ಮಾಹಿತಿ ಪಡೆದ ಅವರು, ತಕ್ಷಣ ಅವರಿಗೆ ಬಿಸಿ ನೀರು ಒದಗಿಸಲು ಕ್ರಮ ಕೈಗೊಳ್ಳುವಂತೆ ಕ್ರಿಮ್ಸ್‌ನ ನಿರ್ದೇಶಕರಿಗೆ ಸೂಚನೆ ನೀಡಿದರು. ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಪಿಎಫ್ ಪಾವತಿ ಮಾಡದೇ ಇರುವ ಬಗ್ಗೆ ಸಿಬ್ಬಂದಿಗಳಿಂದ ದೂರು ಆಲಿಸಿದ ಅಧ್ಯಕ್ಷರು, ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಒದಗಿಸುವಂತೆ ಸೂಚನೆ ನೀಡಿದರು.ಇದೇ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿನ ಪ್ರಯಾಣಿಕರು ಮತ್ತು ಕ್ರಿಮ್ಸ್ ಆಸ್ಪತ್ರೆಯಲ್ಲಿನ ರೋಗಿಗಳೊಂದಿಗೆ ಅಧ್ಯಕ್ಷರು ಸಂವಾದ ನಡೆಸಿ, ಕುಂದು ಕೊರತೆಗಳ ಕುರಿತಂತೆ ಮಾಹಿತಿ ಪಡೆದರು.

ಅಧ್ಯಕ್ಷರ ಭೇಟಿ ಸಂದರ್ಭದಲ್ಲಿ ಕ್ರಿಮ್ಸ್‌ನ ನಿರ್ದೇಶಕಿ ಡಾ. ಪೂರ್ಣಿಮಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಜಯ್ ದೊಡ್ಡಮನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಪದ್ಮಾವತಿ, ತಹಸೀಲ್ದಾರ್ ನಿಶ್ಚಲ್ ನರೋನ್ಹಾ, ಕ್ರಿಮ್ಸ್‌ನ ವಿವಿಧ ವಿಭಾಗಗಳ ಮುಖ್ಯಸ್ಥರು, ಕೆಎಸ್ಆರ್‌ಟಿಸಿ ಅಧಿಕಾರಿಗಳು ಮತ್ತಿತರರು ಇದ್ದರು.