ಸಾರಾಂಶ
ಕಾರವಾರ: ಜಿಲ್ಲೆಯಲ್ಲಿ ತೀವ್ರ ಅಪೌಷ್ಠಿಕತೆ ಮತ್ತು ಮಧ್ಯಮ ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ, ಅವರಿಗೆ ಸೂಕ್ತ ಚಿಕಿತ್ಸೆ ಒದಗಿಸುವ ಕುರಿತಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಶನ್ ಶಕ್ತಿ ಯೋಜನೆ ಮತ್ತು ಇತರ ಯೋಜನೆಗಳ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿನ ಎಲ್ಲ ಅಂಗನವಾಡಿಗಳ ವ್ಯಾಪ್ತಿಯಲ್ಲಿ ತೀವ್ರ ಅಪೌಷ್ಠಿಕತೆ ಮತ್ತು ಮಧ್ಯಮ ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಆರೋಗ್ಯ ಇಲಾಖೆಯ ಮೂಲಕ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಗೆ ಒಳಪಡಿಸುವ ಮೂಲಕ ಯಾವುದೇ ಮಗು ಅಪೌಷ್ಠಿಕತೆಯಿಂದ ಬಳಲದಂತೆ ಎಚ್ಚರಿಕೆ ವಹಿಸಿ, ಈ ಮಕ್ಕಳು ಸಂಪೂರ್ಣ ಆರೋಗ್ಯವಂತರಾಗುವವರೆಗೆ ನಿಗಾ ವಹಿಸುವ ಜತೆಗೆ ಎಲ್ಲ ಮಕ್ಕಳ ಸಂಪೂರ್ಣ ವಿವರಗಳನ್ನು ಇಟ್ಟುಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಕಳೆದ ತ್ರೈಮಾಸಿಕದಲ್ಲಿ ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿದ್ದ ೮೫ ಮಕ್ಕಳು ಇದ್ದು, ಪ್ರಸ್ತುತ ೬೨ ಇದ್ದಾರೆ. ಈ ಎಲ್ಲ ಮಕ್ಕಳು ಸಂಪೂರ್ಣ ಗುಣಮುಖರಾಗುವ ವರೆಗೆ ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸೂಕ್ತ ಚಿಕಿತ್ಸೆ ಮತ್ತು ಪೌಷ್ಠಿಕ ಆಹಾರ ಒದಗಿಸಬೇಕು. ವೈದ್ಯಾಧಿಕಾರಿಗಳು ಅಂಗನವಾಡಿ ಕೇಂದ್ರಗಳಿಗೆ ನಿರಂತರವಾಗಿ ಭೇಟಿ ನೀಡಿ ಮಕ್ಕಳ ಆರೋಗ್ಯ ಕುರಿತು ತಪಾಸಣೆ ನಡೆಸಬೇಕು ಎಂದರು.ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಒದಗಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು. ಪ್ರಸ್ತುತ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿಗಳ ವ್ಯಾಪ್ತಿಯ ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಮತ್ತು ತಹಸೀಲ್ದಾರ್‌ಗಳೊಂದಿಗೆ ಚರ್ಚಿಸಿ, ಆ ಭಾಗದಲ್ಲಿ ಸರ್ಕಾರಿ ಜಮೀನು ಲಭ್ಯವಿರುವ ಬಗ್ಗೆ ಪರಿಶೀಲಿಸಬೇಕು. ಪ್ರಸ್ತುತ ನಿರ್ಮಾಣ ಹಂತದಲ್ಲಿರುವ ಅಂಗನವಾಡಿ ಕಟ್ಟಡಗಳನ್ನು ನಿಗದಿತ ಅವಧಿಯೊಳಗೆ ಮುಕ್ತಾಯಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ ಗರ್ಭಿಣಿಯರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಸಹಾಯಧನವನ್ನು ನಿಗದಿತ ಅವಧಿಯಲ್ಲಿ ಪಾವತಿಸುವಂತೆ ಮತ್ತು ಬ್ಯಾಂಕ್ ಖಾತೆಯಲ್ಲಿ ಕಂಡು ಬರುವ ಸಮಸ್ಯೆಗಳ ಕುರಿತಂತೆ ಲೀಡ್ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಿ, ವಿಶೇಷ ಕ್ಯಾಂಪ್ ಆಯೋಜಿಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ತಿಳಿಸಿದರು.ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಟ ತಡೆ ಕುರಿತಂತೆ ಗ್ರಾಮಮಟ್ಟದಲ್ಲಿ ಸಭೆ ನಡೆಸಬೇಕು. ಗ್ರಾಮ ಮತ್ತು ತಾಲೂಕು ಮಟ್ಟದಲ್ಲಿ ಈಗಾಗಲೇ ರಚಿಸಲಾಗಿರುವ ಕಾವಲು ಸಮಿತಿಗಳು ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದರು.
ಸಾಂತ್ವನ ಯೋಜನೆಯ ಮೂಲಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಅಗತ್ಯ ನೆರವು, ಆಪ್ತ ಸಮಾಲೋಚನೆ ಒದಗಿಸುವ ಜತೆಗೆ ಅವರಿಗೆ ಸ್ವಯಂ ಉದ್ಯೋಗ ಮತ್ತು ಕೌಶಲ್ಯ ತರಬೇತಿ ನೀಡಿ, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಬೇಕು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಉಚಿತ ಕಾನೂನು ನೆರವು ಒದಗಿಸಬೇಕು. ಸಾಂತ್ವನ ಯೋಜನೆಯ ಕುರಿತಂತೆ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕು. ತಾಲೂಕು ಮಹಿಳಾ ಸ್ವ ಸಹಾಯ ಸಂಘದ ಸಭೆಗಳಲ್ಲಿ ಅರಿವು ಮೂಡಿಸಬೇಕು ಎಂದರು.ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳನ್ನು ಆದಷ್ಟು ಶೀಘ್ರದಲ್ಲಿ ಇತ್ಯರ್ಥಪಡಿಸಿ ನೊಂದ ಮಹಿಳೆಗೆ ನ್ಯಾಯ ಒದಗಿಸಬೇಕು ಎಂದು ತಿಳಿಸಿದ ಜಿಲ್ಲಾಧಿಕಾರಿ, ಸಖಿ ಒನ್ ಸ್ಟಾಫ್ ಸೆಂಟರ್ ಮೂಲಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಆಪ್ತ ಸಮಾಲೋಚನೆ, ವೈದ್ಯಕೀಯ, ಪೊಲೀಸ್, ಕಾನೂನು ಸೇರಿದಂತೆ ಎಲ್ಲ ರೀತಿಯ ನೆರವು ಒದಗಿಸುವಂತೆ ತಿಳಿಸಿದರು.
ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಶ್ವರ ಕಾಂದೂ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ನಟರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವಿರೂಪಾಕ್ಷ ಗೌಡ ಪಾಟೀಲ್ ಇದ್ದರು.