ಭವಿಷ್ಯದ ಕನಸನ್ನು ಹೊತ್ತು ವಿದ್ಯಾಭ್ಯಾಸಕ್ಕಾಗಿ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉತ್ತಮ ಆಹಾರವನ್ನು ನೀಡುವ ಮೂಲಕ ಅಧ್ಯಯನಕ್ಕೆ ಸೂಕ್ತ ವಾತಾವರಣವನ್ನು ಸೃಷ್ಟಿಸಬೇಕೆಂದು ಅಧಿಕಾರಿಗಳಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಚಿಕ್ಕನಾಯಕನಹಳ್ಳಿ

ಭವಿಷ್ಯದ ಕನಸನ್ನು ಹೊತ್ತು ವಿದ್ಯಾಭ್ಯಾಸಕ್ಕಾಗಿ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉತ್ತಮ ಆಹಾರವನ್ನು ನೀಡುವ ಮೂಲಕ ಅಧ್ಯಯನಕ್ಕೆ ಸೂಕ್ತ ವಾತಾವರಣವನ್ನು ಸೃಷ್ಟಿಸಬೇಕೆಂದು ಅಧಿಕಾರಿಗಳಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಸೂಚನೆ ನೀಡಿದರು.

ಪಟ್ಟಣದ ಪಟ್ಟಣದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಂದ ಸಮಸ್ಯೆಗಳನ್ನು ಆಲಿಸಿದ ಅವರು ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸುವಂತೆ ಸೂಚಿಸಿದರು. ವಿದ್ಯಾರ್ಥಿಗಳು ಇದು ನಮ್ಮ ಮನೆ ಎಂಬ ಭಾವನೆಯಿಂದ ಹಾಸ್ಟೆಲ್‌ನಲ್ಲಿ ಸ್ವಚ್ಛತೆಯನ್ನು ಕಾಪಾಡಿ, ಶಿಕ್ಷಣವೇ ಜೀವನದ ಯಶಸ್ಸಿನ ಅಡಿಪಾಯವಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಗುರಿ ಹೊಂದಿ ಶ್ರದ್ಧೆ ಹಾಗೂ ಪರಿಶ್ರಮದಿಂದ ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರುನಂತರ ಪಟ್ಟಣದ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಕ್ಷೇತ್ರದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಪ್ರಥಮ ಮತ್ತು ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಪ್ರತಿ ಭಾನುವಾರ ಎಸ್ಬಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಉಚಿತ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಈ ಸೌಲಭ್ಯದ ಸದುಪಯೋಗ ಪಡೆದುಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಾಂತರಾಜು ಸಿ.ಎಸ್, ಸಮಾಜ ಕಲ್ಯಾಣಾಧಿಕಾರಿ ಶ್ರೀಧರ್ ಹಾಗೂ ಕಾಲೇಜಿನ ಪ್ರಾಂಶುಪಾಲರು ಹಾಜರಿದ್ದರು.