ದೌರ್ಜನ್ಯ ಪ್ರಕರಣದಲ್ಲಿ ತ್ವರಿತ ಪರಿಹಾರ ಒದಗಿಸಿ: ನಲಿನ್ ಅತುಲ್

| Published : Dec 26 2024, 01:00 AM IST

ದೌರ್ಜನ್ಯ ಪ್ರಕರಣದಲ್ಲಿ ತ್ವರಿತ ಪರಿಹಾರ ಒದಗಿಸಿ: ನಲಿನ್ ಅತುಲ್
Share this Article
  • FB
  • TW
  • Linkdin
  • Email

ಸಾರಾಂಶ

ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ತ್ವರಿತವಾಗಿ ಪರಿಹಾರ ಒದಗಿಸಲು ಅಗತ್ಯ ಕ್ರಮವಹಿಸಬೇಕು.

ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ, ಉಸ್ತುವಾರಿ ಸಮಿತಿ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆಕನ್ನಡಪ್ರಭ ವಾರ್ತೆ ಕೊಪ್ಪಳ

ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ತ್ವರಿತವಾಗಿ ಪರಿಹಾರ ಒದಗಿಸಲು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಅಧ್ಯಕ್ಷ ನಲಿನ್ ಅತುಲ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜರುಗಿದ ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದೌರ್ಜನ್ಯ, ಗಲಭೆ ಪ್ರಕರಣಗಳ ತನಿಖೆಯಲ್ಲಿ ಸಂತ್ರಸ್ತರೆಂದು ಸಾಬೀತಾದವರಿಗೆ ಸರ್ಕಾರದಿಂದ ನಿಗದಿಪಡಿಸಿದ ಪರಿಹಾರವನ್ನು ಕೂಡಲೇ ಒದಗಿಸಬೇಕು. ಪರಿಶಿಷ್ಟ ಜಾತಿ, ಪಂಗಡಗಳ ಕಾಲನಿಯಲ್ಲಿ ಅಗತ್ಯವಿರುವ ರಸ್ತೆ, ಕುಡಿಯುವ ನೀರು, ಶೌಚಾಲಯ, ಚರಂಡಿ ವ್ಯವಸ್ಥೆ ಸೇರಿದಂತೆ ಇತರೆ ಮೂಲಭೂತ ಸೌಕರ್ಯ ಒದಗಿಸಬೇಕು. ದೌರ್ಜನ್ಯ ಪ್ರಕರಣಗಳಲ್ಲಿ ದೂರು ಸಲ್ಲಿಸಲು ಬಂದಾಗ ಯಾವುದೇ ಕಾರಣ ನೀಡದೆ ದೂರು ಸ್ವೀಕರಿಸಬೇಕು. ಪ್ರಕರಣ ದಾಖಲಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಿವಿಧ ನಿಗಮಗಳಿಂದ ದೊರೆಯುವ ಸೌಲಭ್ಯಗಳನ್ನು ಸಕಾಲದಲ್ಲಿ ತಲುಪಿಸಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಮಾತನಾಡಿ, ಜಿಲ್ಲೆಯಲ್ಲಿ ಯಾವುದೇ ಪೊಲೀಸ್ ಠಾಣೆಯಲ್ಲಿ ದಾಖಲಾದ ದೌರ್ಜನ್ಯ ಪ್ರಕರಣಗಳಲ್ಲಿ ವಿಳಂಬವಿಲ್ಲದೆ ತನಿಖೆ ನಡೆಯುತ್ತಿದ್ದು, ಸಂತ್ರಸ್ತರಿಗೆ ಅಗತ್ಯ ಪರಿಹಾರ ಒದಗಿಸಲಾಗಿದೆ. ಪ್ರತಿ ತಿಂಗಳ ಎರಡನೇ ಭಾನುವಾರದಂದು ಎಸ್ಸಿ, ಎಸ್ಟಿ ಜನಾಂಗದವರ ಕುಂದುಕೊರತೆಗಳ ಸಭೆ ಕೈಗೊಳ್ಳಲಾಗುತ್ತಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಅಜ್ಜಪ್ಪ ಸೊಗಲದ ಮಾತನಾಡಿ, 2024ರಲ್ಲಿ ಒಟ್ಟು 62 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, 18 ಪ್ರಕರಣಗಳು ಎಫ್‌ಐಆರ್, 39 ಪ್ರಕರಣಗಳು ಚಾರ್ಜ್ ಶೀಟ್ ಹಂತದಲ್ಲಿದ್ದು, ಒಟ್ಟು 57 ಪ್ರಕರಣಗಳಲ್ಲಿ ₹1,88,22,500 ಪರಿಹಾರ ಧನವನ್ನು ಮಂಜೂರು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಎಸ್ಸಿಪಿ-ಟಿಎಸ್ಪಿ ಪ್ರಗತಿ ಪರಿಶೀಲನೆ:

ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಅಧಿನಿಯಮ 2013 ರನ್ವಯ ಅನುಸೂಚಿತ ಜಾತಿಗಳು ಉಪಯೋಜನೆ, ಬುಡಕಟ್ಟು ಉಪಯೋಜನೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಕಾರ್ಯಕ್ರಮಗಳ ನವೆಂಬರ್-2024ರ ಅಂತ್ಯದವರೆಗಿನ ಪ್ರಗತಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ, ಎಸ್ಸಿಪಿ-ಟಿಎಸ್ಪಿ ಯೋಜನೆಯ ಮೂಲ ಧ್ಯೇಯ ಮತ್ತು ಮಾನದಂಡಗಳಿಗೆ ಅನುಸಾರವಾಗಿ ಇಲಾಖೆಗಳು ಕಾರ್ಯನಿರ್ವಹಿಸಬೇಕು. ಈ ಯೋಜನೆಗಳನ್ನು ಜಾಗರೂಕತೆಯಿಂದ ನಿರ್ವಹಿಸಬೇಕು. ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಯಾವ ಉದ್ದೇಶಕ್ಕೆ ಬಳಸಲಾಗಿದೆ, ಯಾವ ಪ್ರದೇಶದಲ್ಲಿ ಕಾಮಗಾರಿ ಮಾಡಲಾಗಿದೆ ಎನ್ನುವ ಮಾಹಿತಿಯನ್ನು ಸ್ಪಷ್ಟವಾಗಿ ನೀಡಬೇಕು. ಅಲ್ಲದೇ ಇಲಾಖೆಗಳಿಗೆ ನಿಗದಿಪಡಿಸಲಾದ ಗುರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು, ಜಿಲ್ಲೆಯ ಎಲ್ಲಾ ತಾಲೂಕುಗಳ ತಹಸೀಲ್ದಾರರು ಹಾಗೂ ಇತರೆ ಇಲಾಖೆಗಳ ಅಧಿಕಾರಿಗಳು ಇತರರಿದ್ದರು.