ಏಡ್ಸ್ ಸೋಂಕಿತರಿಗೆ ಸಾಮಾಜಿಕ ಸೌಲಭ್ಯ ಕಲ್ಪಿಸಿ: ಡಿಸಿ

| Published : Aug 20 2025, 01:30 AM IST

ಏಡ್ಸ್ ಸೋಂಕಿತರಿಗೆ ಸಾಮಾಜಿಕ ಸೌಲಭ್ಯ ಕಲ್ಪಿಸಿ: ಡಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಏಡ್ಸ್ ನಿಯಂತ್ರಣಕ್ಕೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಹೆಚ್ಚಿನ ಆದ್ಯತೆ ನೀಡಬೇಕು. ಈ ರೋಗ ಹರಡುವಿಕೆಯ ಬಗ್ಗೆ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ, ಅಂತಹ ಕಡೆಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು.

ಕೊಪ್ಪಳ:

ಜಿಲ್ಲೆಯಲ್ಲಿರುವ ಎಚ್‌ಐವಿ, ಏಡ್ಸ್ ಸೋಂಕಿತರಿಗೆ ಸಾಮಾಜಿಕ ಸೌಲಭ್ಯ ಮತ್ತು ಸರ್ಕಾರದ ಸೌಲಭ್ಯ ದೊರಕಿಸಲು ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಮಟ್ಟದಲ್ಲಿ ಏಕಗವಾಕ್ಷಿ ಮಾದರಿ ಯೋಜನೆ ಅಡಿಯಲ್ಲಿ ಎಚ್‌ಐವಿ ಸೋಂಕಿತರಿಗೆ ಸಾಮಾಜಿಕ ಸೌಲಭ್ಯ ಒದಗಿಸುವ ಕುರಿತಾದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಚ್‌ಐವಿ, ಏಡ್ಸ್ ಸೋಂಕಿತರಿಗೆ ಸ್ವಯಂ ಸೇವಾ ಸಂಸ್ಥೆಗಳು ಬೆಂಬಲವಾಗಿ ನಿಂತು, ಅವರಿಗೆ ನೆರವಿನ ಹಸ್ತ ಚಾಚಬೇಕಿದೆ. ಎಚ್‌ಐವಿ, ಏಡ್ಸ್ ಪೀಡಿತರಿಗಾಗಿಯೇ ಸರ್ಕಾರ ಹಲವು ಸೌಲಭ್ಯ ಕಲ್ಪಿಸಿದ್ದು, ಅಂತ್ಯೋದಯ ಅನ್ನ ಪಡಿತರ ಚೀಟಿ, ಮಾಸಾಶನ, ವಸತಿ ಕಲ್ಪಿಸುವುದು, ಉಚಿತ ಚಿಕಿತ್ಸೆ ಹೀಗೆ ವಿವಿಧ ಕಾರ್ಯಕ್ರಮಗಳಿವೆ. ಅವರಿಗೆ ಈ ಎಲ್ಲ ಸೌಲ್ಯಭ ದೊರೆಯುವಂತಾಗಲಿ. ಅಲ್ಲದೇ ಇಂತಹ ಯೋಜನೆ ಅನುಷ್ಠಾನಗೊಳಿಸುವಾಗ ಸಾಮಾಜಿಕ ಹಿತದೃಷ್ಟಿಯಿಂದ ಎಚ್‌ಐವಿ, ಏಡ್ಸ್ ಸೋಂಕಿತರ ವಿವರಗಳ ಗೌಪ್ಯತೆ ಕಾಪಾಡುವ ಬಗ್ಗೆಯೂ ವಿಗಮನ ಹರಿಸಬೇಕು ಎಂದರು.

ಜಿಲ್ಲೆಯಲ್ಲಿ ಏಡ್ಸ್ ನಿಯಂತ್ರಣಕ್ಕೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಹೆಚ್ಚಿನ ಆದ್ಯತೆ ನೀಡಬೇಕು. ಈ ರೋಗ ಹರಡುವಿಕೆಯ ಬಗ್ಗೆ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ, ಅಂತಹ ಕಡೆಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ನಿರಂತರವಾಗಿ ವಿಶೇಷ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಏಡ್ಸ್ ನಿಯಂತ್ರಣಕ್ಕೆ ಕ್ರಮ ವಹಿಸಬೇಕು. ಜಿಲ್ಲೆಯ ಬ್ಲಡ್ ಬ್ಯಾಂಕುಗಳು ಕೆಪಿಎಂಇ ಕಾಯ್ದೆಯಡಿ ಕಡ್ಡಾಯವಾಗಿ ನೋಂದಣಿಯಾಗಿರಬೇಕು. ತಪ್ಪಿದ್ದಲ್ಲಿ ಅಂತಹ ಬ್ಲಡ್ ಬ್ಯಾಂಕ್‌ ಮೇಲೆ ಕಾನೂನು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಏಡ್ಸ್ ಮತ್ತು ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಶಶಿಧರ ಮಾತನಾಡಿ, ಅ. 12ರ ವರೆಗೆ ಜಿಲ್ಲೆಯಲ್ಲಿ ಎಚ್‌ಐವಿ ಮತ್ತು ಏಡ್ಸ್ ಅರಿವಿನ ಮಾಸಾಚರಣೆ ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ 13,943 ಎಚ್‌ಐವಿ, ಏಡ್ಸ್ ಸೋಂಕಿತರು ನೋಂದಣಿಯಾಗಿದ್ದು ಇದರಲ್ಲಿ 12,113 ಜನರು ಚಿಕಿತ್ಸೆಗೆ ಅರ್ಹರಿದ್ದು, ಸದ್ಯ 6311 ಜನರು ಜಿಲ್ಲೆಯ ಎಆರ್‌ಟಿ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ. ಲಿಂಗರಾಜು, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಪ್ರಕಾಶ ವಿ., ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರವಿಂದ್ರನಾಥ ಎಂ.ಎಚ್., ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಂದಕುಮಾರ, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ. ಕುಮಾರಸ್ವಾಮಿ ಗೋನಾಳ, ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಪ್ರಕಾಶ ಎಚ್., ಕಿಮ್ಸ್ ಪ್ರಾಶುಂಪಾಲರಾದ ಡಾ. ನಾರಾಯಣ, ಡಿಡಿಪಿಯು ಜಗದೀಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ್ ಸೇರಿದಂತೆ ತಾಲೂಕುಗಳ ಆರೋಗ್ಯಾಧಿಕಾರಿಗಳು, ತತ್ಞವೈದ್ಯರು, ವೈದ್ಯಾಧಿಕಾರಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.