ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಾಗಾರ, ಸಂವಾದ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ ಕಾರವಾರಮಾಹಿತಿ ಹಕ್ಕು ಕಾಯಿದೆ-2005ರಡಿ ಮಾಹಿತಿ ಕೋರಿ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳಿಗೆ ನಿಗದಿತ ಅವಧಿಯೊಳಗೆ ಅಗತ್ಯ ಮಾಹಿತಿ ಒದಗಿಸುವುದು ಎಲ್ಲಾ ಇಲಾಖೆಗಳ ಮಾಹಿತಿ ಅಧಿಕಾರಿಗಳ ಕಡ್ಡಾಯ ಜವಾಬ್ದಾರಿಯಾಗಿದೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಡಾ. ಹರೀಶಕುಮಾರ್ ತಿಳಿಸಿದರು.
ಶನಿವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಆಯೋಜಿಸಿದ್ದ ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.ಮಾಹಿತಿ ಹಕ್ಕು ಕಾಯಿದೆಯ ಅಧಿಕಾರಿಗಳು ಪ್ರಾಮಾಣಿಕವಾಗಿ ಮತ್ತು ತಪ್ಪು ಮಾಡದಂತೆ ಕೆಲಸ ನಿರ್ವಹಿಸಲು ಸಹಕಾರಿಯಾಗಿದೆ ಎಂದರು.
ಕಾಯಿದೆಯಲ್ಲಿನ ಎಲ್ಲಾ ಅಂಶಗಳ ಬಗ್ಗೆ ಸಮಗ್ರವಾಗಿ ಅರಿತುಕೊಂಡು ಸಾರ್ವಜನಿಕರಿಗೆ ಮಾಹಿತಿ ಒದಗಿಸಬೇಕು. ಪ್ರಥಮ ಮೇಲ್ಮನವಿ ಮತ್ತು ಎರಡನೇ ಮೆಲ್ಮನವಿಗಳ ಸಲ್ಲಿಕೆಗೆ ಅವಕಾಶ ನೀಡದೇ ಅರ್ಜಿ ವಿಲೇಗೊಳಿಸಬೇಕು. ನಿಗಧಿತ ಅವಧಿಯೊಳಗೆ ಮಾಹಿತಿ ಒದಗಿಸದ ಅಧಿಕಾರಿಗಳಿಗೆ ₹25000 ಗಳವರೆಗೆ ದಂಡ ಮತ್ತು ಕರ್ತವ್ಯ ಲೋಪದ ಶಿಸ್ತು ದಂಡ ವಿಧಿಸುವಂತೆ ಸಂಬಂಧಪಟ್ಟ ಪ್ರಾಧಿಕಾರಕ್ಕೆ ಸೂಚಿಸುವ ಅಧಿಕಾರ ಆಯೋಗಕ್ಕಿದೆ ಎಂದರು.ಸಾರ್ವಜನಿಕರಿಗೆ ಶೀಘ್ರದಲ್ಲಿ ಮತ್ತು ಸಮರ್ಪಕವಾದ ಮಾಹಿತಿ ನೀಡಲು ಅನುಕೂಲವಾಗುವಂತೆ ಕಚೇರಿಗಳಲ್ಲಿ ಕಡತ ವರ್ಗಿಕರಣ ಮಾಡಿಟ್ಟುಕೊಳ್ಳಬೇಕು, ಕಡತ ನಿಯಮಾನುಸಾರ ನಾಶಪಡಿಸಿದ್ದರೆ ಈ ಬಗ್ಗೆ ದಾಖಲೆ ಇರಬೇಕು, ಕಡತಗಳು ಕಣ್ಮರೆಯಾಗಿದ್ದಲ್ಲಿ ಈ ಬಗ್ಗೆ ಎಫ್.ಐ.ಆರ್ ದಾಖಲಿಸಬೇಕು. ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಯ ವಿರುದ್ಧವೇ ಶಿಕ್ಷೆ ವಿಧಿಸಬಹುದಾಗಿದೆ ಎಂದು ತಿಳಿಸಿದರು.
ಮಾಹಿತಿ ಆಯೋಗದ ಆಯುಕ್ತ ಬದ್ರುದ್ದೀನ್, ಸಾರ್ವಜನಿಕರಿಗೆ ಅಗತ್ಯ ಮಾಹಿತಿ ನಿಗದಿತ ಶುಲ್ಕ ಪಡೆದು ನೀಡಬೇಕು. ಈ ಕಾಯಿದೆಯ ದುರ್ಬಳಕೆ ಕುರಿತು ಕೂಡಾ ಆಯೋಗಕ್ಕೆ ದೂರು ಬಂದಿದ್ದು, ಆಯೋಗವು ಇದುವರೆಗೆ 26 ಜನರನ್ನು ಕಪ್ಪುಪಟ್ಟಿಗೆ ಸೇರ್ಪಡೆ ಮಾಡಿದೆ. ಕಳೆದ ವರ್ಷ ಫೆಬ್ರವರಿಯಲ್ಲಿ ಆಯೋಗದಲ್ಲಿ 55,400 ಮೇಲ್ಮನವಿ ಅರ್ಜಿಗಳು ವಿಚಾರಣೆಗೆ ಬಾಕಿ ಇದ್ದು, ಅವುಗಳಲ್ಲಿ 26,670 ಅರ್ಜಿ ವಿಲೇವಾರಿ ಮಾಡಲಾಗಿದ್ದು, ಪ್ರಸ್ತುತ 28,730 ಬಾಕಿ ಇವೆ. ಉತ್ತರ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ 524 ಅರ್ಜಿಗಳು ಬಾಕಿ ಇದ್ದು ಜಿಲ್ಲೆಯು ರಾಜ್ಯದಲ್ಲಿ 17ನೇ ಸ್ಥಾನದಲ್ಲಿದ್ದು, ಜಿಲ್ಲೆಯ ಅರ್ಜಿಗಳಲ್ಲಿ 164 ಅರ್ಜಿಗಳು ಆರ್.ಡಿ.ಪಿ.ಆರ್ ಮತ್ತು 110 ಅರ್ಜಿಗಳು ಕಂದಾಯ ಇಲಾಖೆಗೆ ಸೇರಿದ್ದು, ಉಳಿದದ್ದು ಇತರೆ ಇಲಾಖೆಗಳಿಗೆ ಸಂಬಂದಪಟ್ಟದ್ದಾಗಿದೆ ಎಂದರು.ಮೇಲ್ಮನವಿ ಅರ್ಜಿಗಳನ್ನು ಪ್ರಥಮ ಮೇಲ್ಮನವಿ ಅಧಿಕಾರಿಗಳ ಹಂತದಲ್ಲೇ ವಿಲೇ ಮಾಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಎಲ್ಲಾ ಇಲಾಖಾಧಿಕಾರಿಗಳು ತಮ್ಮ ಹಂತದಲ್ಲಿ ಪರಿಶೀಲನಾ ಸಭೆಯನ್ನು ನಡೆಸುವಂತೆ ಮತ್ತು ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾಹಿತಿ ಹಕ್ಕು ಅರ್ಜಿಗಳ ವಿಲೇವಾರಿಯನ್ನು ಒಂದು ವಿಷಯವನ್ನಾಗಿ ತೆಗೆದುಕೊಂಡು ಪ್ರಗತಿ ಪರಿಶೀಲನೆ ನಡೆಸುವಂತೆ ತಿಳಿಸಿದರು.ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ, ಜಿಲ್ಲೆಯಲ್ಲಿ ಕಂದಾಯ, ಅರಣ್ಯ, ಪೊಲೀಸ್, ಗ್ರಾಮೀಣಭಿವೃದ್ಧಿ ಇಲಾಖೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಮಾಹಿತಿ ಹಕ್ಕು ಕಾಯಿದೆ ಅರ್ಜಿಗಳು ಸಲ್ಲಿಕೆಯಾಗುತ್ತಿದ್ದು, ಕಾಯಿದೆಯು ಸಾರ್ವಜನಿಕರಿಗೆ ಆಡಳಿತ ವ್ಯವಸ್ಥೆ ಮೇಲೆ ನಂಬಿಕೆ ಮೂಡಿಸುವ ಮತ್ತು ಪ್ರಜಾಪ್ರಭುತ್ವದ ಬಲಪಡಿಸಲು ಸಹಾಯವಾಗಲಿದ್ದು, ಕಂದಾಯ ಇಲಾಖೆಯಲ್ಲಿ ಡಿಜಿಟಲೀಕರಣ ನಡೆಯುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಅತ್ಯಂತ ಶೀಘ್ರದಲ್ಲಿ ಮಾಹಿತಿ ಒದಗಿಸಲು ಸಾಧ್ಯವಾಗಲಿದ್ದು, ಪಾರದರ್ಶಕತೆ ತರಲಾಗುತ್ತಿದೆ ಎಂದರು.
ಮಾಹಿತಿ ಆಯುಕ್ತ ನಾರಾಯಣ ಚನ್ನಾಳ, ಜಿಪಂ ಸಿಇಒ ಡಾ. ದಿಲೀಷ್ ಶಶಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಇದ್ದರು.