ಚಿಕ್ಕಮಗಳೂರುಬಡ ಮತ್ತು ಶೋಷಿತ ವರ್ಗದ ಮಕ್ಕಳಿಗೆ ಉಚಿತವಾಗಿ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಸರ್ಕಾರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಸ್ಥಾಪಿಸುತ್ತಿದೆ. ಈ ಶಾಲೆಗಳಲ್ಲಿ ನಿರ್ಮಾಣವಾಗುವ ಕಟ್ಟಡಗಳು ಗುಣ ಮಟ್ಟದಿಂದ ಕೂಡಿರಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ಮಲ್ಲೇನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಬಡ ಮತ್ತು ಶೋಷಿತ ವರ್ಗದ ಮಕ್ಕಳಿಗೆ ಉಚಿತವಾಗಿ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಸರ್ಕಾರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಸ್ಥಾಪಿಸುತ್ತಿದೆ. ಈ ಶಾಲೆಗಳಲ್ಲಿ ನಿರ್ಮಾಣವಾಗುವ ಕಟ್ಟಡಗಳು ಗುಣ ಮಟ್ಟದಿಂದ ಕೂಡಿರಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.ನಗರದ ಹೋಟೆಲ್ ಗೇಟ್‌ವೇ ಸಮೀಪ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಜಿಲ್ಲಾಡಳಿತದಿಂದ ಮಲ್ಲೇನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ನೂತನ ಕಟ್ಟಡ ನಿರ್ಮಾಣಕ್ಕೆ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.ಸುಮಾರು ₹22 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಸರ್ಕಾರ ಮಂಜೂರಾತಿ ನೀಡಿದ್ದು, ಜಿಲ್ಲಾಡಳಿತ ಒದಗಿ ಸಿರುವ ಜಾಗದಲ್ಲಿ ಕಾಮಗಾರಿ ಆರಂಭಿಸಲಾಗಿದೆ. ಮುಂದಿನ 12 ತಿಂಗಳೊಳಗೆ ಕಟ್ಟಡ ನಿರ್ಮಾಣ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದರು.ಕಟ್ಟಡ ನಿರ್ಮಾಣದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು. ರಸ್ತೆಗಳಲ್ಲಿ ಗುಂಡಿ ಬಿದ್ದರೆ ದುರಸ್ತಿ ಮಾಡಬಹುದು. ಆದರೆ, ಬಡಮಕ್ಕಳು ವಿದ್ಯಾಭ್ಯಾಸ ಮಾಡುವ ಶಾಲಾ ಕಟ್ಟಡದಲ್ಲಿ ಗುಣಮಟ್ಟದ ಕೊರತೆ ಯಾಗಬಾರದು. ಗುತ್ತಿಗೆದಾರರು ಹಾಗೂ ಎಂಜಿನಿಯರ್‌ಗಳು ತಮ್ಮ ಮನೆ ಮಕ್ಕಳೇ ಈ ಶಾಲೆಯಲ್ಲಿ ಓದುತ್ತಿದ್ದಾರೆ ಎಂಬ ಭಾವನೆಯಿಂದ ಕಾಮಗಾರಿ ನಿರ್ವಹಿಸಬೇಕು ಎಂದು ಸೂಚಿಸಿದರು.ಜಿಲ್ಲೆಯ ವಿವಿಧ ಭಾಗಗಳ ಬಡ ಮತ್ತು ಶೋಷಿತ ವರ್ಗದ ಮಕ್ಕಳು ಈ ಶಾಲೆಯಲ್ಲಿ ಪ್ರವೇಶ ಪಡೆದು ಶಿಕ್ಷಣ ಪಡೆಯಲಿದ್ದಾರೆ. ಅವರಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ಇಲ್ಲಿ ಶಿಕ್ಷಣ ಪಡೆದ ಮಕ್ಕಳು ತಮ್ಮ ಕುಟುಂಬ ಹಾಗೂ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುವಂತಾಗಬೇಕು ಎಂದು ಆಶಿಸಿದರು.ಬುದ್ಧ, ಬಸವ, ಅಂಬೇಡ್ಕರ್, ಕನಕದಾಸ, ವಾಲ್ಮೀಕಿ ಹಾಗೂ ಕುವೆಂಪು ಅವರ ಆಶಯವೂ ಸಮಸಮಾಜ ನಿರ್ಮಾಣ ವಾಗಬೇಕು ಎಂಬುದಾಗಿತ್ತು. ಕುವೆಂಪು ಅವರ ಸರ್ವಜನಾಂಗದ ಶಾಂತಿ ತೋಟದ ಪರಿಕಲ್ಪನೆ ಸಾಕಾರಗೊಳ್ಳಬೇಕಾದರೆ ಎಲ್ಲರಿಗೂ ಸಮಾನವಾಗಿ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುತ್ತಿದೆ ಎಂದು ತಿಳಿಸಿದರು.ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿದ್ದು, ರೈತರಿಗೆ ನೆರವಾಗುವ ಉದ್ದೇಶದಿಂದ ಈಗಾಗಲೇ ನೀಡುತ್ತಿರುವ ಪರಿ ಹಾರದ ಜತೆಗೆ ಹೆಚ್ಚುವರಿಯಾಗಿ 2 ಸಾವಿರ ರೂ. ಸೇರಿಸಿ ಒಟ್ಟು ₹5 ಸಾವಿರ ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ ಎಂದರು.ರಾಜ್ಯದ ನಗರ ಮತ್ತು ಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ಧಿಗೆ ಸುಮಾರು ₹20 ಸಾವಿರ ಕೋಟಿ ವೆಚ್ಚದ ಯೋಜನೆಗೆ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಚಿಕ್ಕಮಗಳೂರು ಕ್ಷೇತ್ರದ ಬಾಕಿ ಉಳಿದ ರಸ್ತೆ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ತರಲು ಜನಪ್ರತಿನಿಧಿಗಳು ಹಾಗೂ ಮುಖಂಡರೊಂದಿಗೆ ಪ್ರಯತ್ನಿಸಲಾಗುವುದು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್. ಮಹೇಶ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಾನಂದಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಪಿ. ಮಂಜೇಗೌಡ, ಸದಸ್ಯೆ ಕವಿತಾ ಶೇಖರ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಾಲತಿ, ತಾಲೂಕು ಮಟ್ಟದ ಅಧಿಕಾರಿ ರೇವಣ್ಣ, ಗುತ್ತಿಗೆದಾರ ರವಿಶಂಕರ್ ಹಾಗೂ ಕಾಂಗ್ರೆಸ್ ಮುಖಂಡ ನಟರಾಜ್ ಉಪಸ್ಥಿತರಿದ್ದರು.