ನೆಲಮಂಗಲ: ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯನ್ನು 39 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಹಾಗೂ ಅತ್ಯಾಧುನಿಕ ಸೌಲಭ್ಯಗಳ ಜೊತೆಗೆ 100 ಹಾಸಿಗೆಗಳ ಸಾಮರ್ಥ್ಯದಲ್ಲಿ ರಾಜ್ಯದಲ್ಲಿಯೇ ಮಾದರಿ ತಾಲೂಕು ಆಸ್ಪತ್ರೆಯನ್ನಾಗಿ ನಿರ್ಮಿಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು
ನೆಲಮಂಗಲ: ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯನ್ನು 39 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಹಾಗೂ ಅತ್ಯಾಧುನಿಕ ಸೌಲಭ್ಯಗಳ ಜೊತೆಗೆ 100 ಹಾಸಿಗೆಗಳ ಸಾಮರ್ಥ್ಯದಲ್ಲಿ ರಾಜ್ಯದಲ್ಲಿಯೇ ಮಾದರಿ ತಾಲೂಕು ಆಸ್ಪತ್ರೆಯನ್ನಾಗಿ ನಿರ್ಮಿಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು.
ನಗರದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಆಸ್ಪತ್ರೆ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೂ ಗುಣಮಟ್ಟದ ಆರೋಗ್ಯ ಸೇವೆ ತಾಲೂಕು ಮಟ್ಟದಲ್ಲೇ ಸಿಗಬೇಕು ಎಂಬುದು ನಮ್ಮ ಸರ್ಕಾರದ ಸಂಕಲ್ಪ. ಎಲ್ಲ ಸೌಕರ್ಯಗಳೊಂದಿಗೆ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವುದಷ್ಟೇ ಅಲ್ಲದೇ, ಪ್ರಯೋಗಾಲಯ, ಐಸಿಯು, ಸ್ಕ್ಯಾನಿಂಗ್ ಸೌಕರ್ಯ, ರಕ್ತನಿಧಿ ಕೇಂದ್ರ, ತುರ್ತು ಚಿಕಿತ್ಸೆ, ಪಾರ್ಕಿಂಗ್, ಕುಡಿಯುವ ನೀರು, ಶೌಚಗೃಹ ಸೇರಿದಂತೆ ಎಲ್ಲ ಸೌಕರ್ಯಗಳನ್ನೂ ಒಳಗೊಂಡ ಸರ್ವಾಂಗೀಣ ಆಸ್ಪತ್ರೆಯಾಗಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ನೆಲಮಂಗಲ ತಾಲೂಕು ಹಾಗೂ ಸುತ್ತಮುತ್ತಲಿನ ಗ್ರಾಮೀಣ ಜನರಿಗೆ ಈ ಆಸ್ಪತ್ರೆ ವರದಾನವಾಗಲಿದೆ. ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ, ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.ರಾಜ್ಯದಲ್ಲಿ ಶೇ.80ರಷ್ಟು ಜನ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಾರೆ, ಅವರ ಗುಣಮಟ್ಟದ ಚಿಕಿತ್ಸೆ, ಔಷಧಿ ನೀಡುವುದು ನಮ್ಮ ಸರ್ಕಾರದ ಕರ್ತವ್ಯ. ಈ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯ ಒದಗಿಸಲು ಹಂತ ಹಂತವಾಗಿ ಕೆಲಸ ಮಾಡಲಾಗುತ್ತಿದೆ. ಜನರು ಸರ್ಕಾರಿ ಆಸ್ಪತ್ರೆಗೆ ಬಂದಾಗ ಅವರ ವಿಶ್ವಾಸ ಗಳಿಸುವಂತ ಕೆಲಸ ವೈದ್ಯಾಧಿಕಾರಿಗಳು ಮಾಡಬೇಕು ಎಂದರು.
ನೆಲಮಂಗಲದಲ್ಲಿ ರಾಷ್ಟ್ರ, ರಾಜ್ಯ ಹೆದ್ದಾರಿಗಳು ಹಾದುಹೋಗಿವೆ. ಜೊತೆಗೆ ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ಗಾಯಾಳುಗಳಿಗೆ ತುರ್ತು ಚಿಕಿತ್ಸೆ ಅಗತ್ಯಕ್ಕೆ ವೈದ್ಯರು, ಸಿಬ್ಬಂದಿ, ಹಾಸಿಗೆಗಳ ಕೊರತೆ, ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬೇಕು, ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಸ್ತುತ ಇರುವ ಆಂಬ್ಯುಲೆನ್ಸ್ ಸಾಕಾಗುವುದಿಲ್ಲ ಎಂಬ ಸಾರ್ವಜನಿಕರ ಮನವಿಗೆ ಸ್ಪಂದಿಸಿದ ಸಚಿವರು ಸಮಸ್ಯೆ ಬಗೆ ಹರಿಸುವುದಾಗಿ ತಿಳಿಸಿದರು.ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಔಷಧಿ ಕೊರತೆಯಾಗದಂತೆ ಅಗತ್ಯ ದಾಸ್ತಾನು ಶೇಖರಿಸಲು ಸೂಚಿಸಿದ್ದೇನೆ. ಆಸ್ಪತ್ರೆಗಳಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಲಾಗುತ್ತಿದೆ. ಜೊತಗೆ ಸಿಬ್ಬಂದಿ ನೇಮಕ ಹಂತ ಹಂತವಾಗಿ ಮಾಡಲಾಗುವುದು ಎಂದು ಹೇಳಿದರು.
ಈಗಿನ ಆಸ್ಪತ್ರೆ ಸ್ಥಳಾಂತರ:ನೂತನ ಸರ್ಕಾರಿ ಆಸ್ಪತ್ರೆಯ ಕಾಮಗಾರಿ ಪೂರ್ಣಗೊಳ್ಳುವವರೆಗೂ ಸಾರ್ವಜನಿಕ ಹಿತದೃಷ್ಟಿಯಿಂದ ನಗರದ ಮುಖ್ಯಬೀದಿಯಲ್ಲಿನ ವಿಶ್ವೇಶ್ವರಪುರದ ಟಿಬಿಟಿಯನ್ ವಸತಿ ಸಮುಚ್ಚಯಕ್ಕೆ ತಾಲ್ಲೂಕು ಆಸ್ಪತ್ರೆಯನ್ನು ತಾತ್ಕಾಲಿಕ ಸ್ಥಳಾಂತರ ಮಾಡಲು ಉದ್ದೇಶಿಸಲಾಗಿದೆ. ಸರ್ಕಾರಿ ಆಸ್ಪತ್ರೆಯ ಕಟ್ಟಡ ಹಾಗೂ ಸುತ್ತಮುತ್ತಲಿನ ಅಭಿವೃದ್ಧಿಯಿಂದ ಹಾಗೂ ಸ್ಥಳಾಂತರಗೊಂಡ ಕಾರಣ ಅಲ್ಲಿನ ಸಿಬ್ಬಂದಿ, ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತದೆ ಎಂದು ಹೇಳಿದರು.
ಬಳಿಕ ಕಣೇಗೌಡನಹಳ್ಳಿ ಗ್ರಾಪಂ ವ್ಯಾಪ್ತಿಯ ಇಸ್ಲಾಂಪುರ ಗ್ರಾಮದಲ್ಲಿ 5 ಕೋಟಿ ಅನುದಾನದಲ್ಲಿ ಮೌಲಾನ ಆಜಾದ್ ಮಾದರಿ ಶಾಲೆ ಶಂಕುಸ್ಥಾಪನೆ ನೆರವೇರಿಸಿದರು.ಕಾರ್ಯಕ್ರಮದಲ್ಲಿ ನೆಲಮಂಗಲ ಶಾಸಕ ಶ್ರೀನಿವಾಸ್, ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುನಾಥ್, ನಗರಸಭಾಧ್ಯಕ್ಷ ಎನ್.ಗಣೇಶ್, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಗೋವಿಂದರಾಜು, ಮಾಜಿ ಅಧ್ಯಕ್ಷ ನಾರಾಯಣಗೌಡ, ಎಂ.ಕೆ.ನಾಗರಾಜು, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
ಪೊಟೊ-13ಕೆಎನ್ಎಲ್ಎಮ್3-ನೆಲಮಂಗಲ ತಾಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಆರೋಗ್ಯ ಸಚಿವ ಯು.ಟಿ.ಖಾದರ್ ಭೂಮಿಪೂಜೆ ನೆರವೇರಿದರು. ಶಾಸಕ ಶ್ರೀನಿವಾಸ್, ಜಿಲ್ಲಾಧಿಕಾರಿ ಡಾ. ಅನುರಾಧ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುನಾಥ್, ನಗರಸಭಾ ಅಧ್ಯಕ್ಷ ಎನ್.ಗಣೇಶ್, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಗೋವಿಂದರಾಜು ಇತರರಿದ್ದರು.