ಕನ್ನಡಪ್ರಭ ವಾರ್ತೆ ತುಮಕೂರುಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿಕಸಿತ ಭಾರತ - ಗ್ಯಾರಂಟಿ ಫಾರ್ ರೋಜ್‌ಗಾರ್ ಆ್ಯಂಡ್‌ ಜೀವಿಕ ಮಿಷನ್ (ವಿಬಿ-ಜಿರಾಮ್‌-ಜಿ) ಯೋಜನೆಯ ಕುರಿತ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು, ಗಿಡಕ್ಕೆ ನೀರೆರೆಯುವುದರ ಮೂಲಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಚಾಲನೆ ನೀಡಿದರು.ತರಬೇತಿ ಕಾರ್ಯಕ್ರಮ ಕುರಿತು ಮಾತನಾಡಿದ ಅವರು, ಜು. 1ದ ಈ ಯೋಜನೆ ಜಾರಿಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಎಲ್ಲಾ ಮಾರ್ಗಸೂಚಿಗಳನ್ವಯ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವ ಉದ್ದೇಶದಿಂದ ಎಲ್ಲಾ ವರ್ಗದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಸದರಿ ತರಬೇತಿಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳ ಸಹಾಯಕ ನಿರ್ದೇಶಕರು, ಆಡಳಿತ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಂತ್ರಿಕ ಸಿಬ್ಬಂದಿ ಹಾಜರಾಗಿದ್ದು, ತರಬೇತಿಯ ಎಲ್ಲಾ ಅಂಶಗಳನ್ನು ತಿಳಿದುಕೊಳ್ಳಬೇಕು ಎಂದರು. ಮೈಸೂರಿನ ಅಬ್ದುಲ್ ನಜೀರ್ ಸಾಬ್ ಮಾತನಾಡಿ, ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯಿಂದ ತರಬೇತಿ ಪಡೆದ ನಾಲ್ಕು ಜನ ಮಾಸ್ಟರ್ ಟ್ರೈನರ್‌ಗಳಿಂದ ತರಬೇತಿ ನೀಡಲಾಗುತ್ತಿದ್ದು, ಯೋಜನೆಯ ಕುರಿತ ಹಾಗೂ ಅನುಷ್ಟಾನದ ಕುರಿತ ಎಲ್ಲಾ ಅಂಶಗಳನ್ನು ಹಾಗೂ ಮಾಹಿತಿಯನ್ನು ಅನುಷ್ಟಾನಾಧಿಕಾರಿಗಳು ಹಾಗೂ ಸಿಬ್ಬಂದಿಗೆ ತಿಳಿಸಲಾಗುವುದು ಎಂದರು.

ಈ ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ (ಅಭಿವೃದ್ಧಿ) ಸಂಜೀವಪ್ಪ ಕೆ.ಪಿ., ಮಾಸ್ಟರ್‌ ಟ್ರೈನರ್ ಸುರೇಶ್, ಪಿಡಿಒಗಳಾದ ಸುಬ್ಬರಾಜು ಅರಸ್, ಗಂಗಾಧರ್‌ ಇದ್ದರು.